ಉಡುಪಿ
ಬಿಜೆಪಿ ಪಕ್ಷದಿಂದ ಉಚ್ಚಾಟನೆಗೊಂಡಿರುವ ಮಾಜಿ ಶಾಸಕ ರಘುಪತಿ ಭಟ್ ಜೊತೆ ಗುರುತಿಸಿಕೊಂಡ ಬಿಜೆಪಿ ನಾಯಕರಿಗೆ ಪಕ್ಷದಿಂದ ನೋಟಿಸ್ ನೀಡಲಾಗಿದೆ. ಈ ಬಾರಿಯ ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ವಂಚಿತರಾಗಿರುವ ರಘುಪತಿ ಭಟ್ ಬಿಜೆಪಿಗೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆಗಿಳಿದಿದ್ದಾರೆ.
ರಾಜ್ಯ ಬಿಜೆಪಿಯಲ್ಲಿ ಕರಾವಳಿ ನಾಯಕರನ್ನು ಕಡೆಗಣಿಸುತ್ತಿದ್ದಾರೆ ಎಂದು ಆರೋಪಿಸಿ ರಘುಪತಿ ಭಟ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಘುಪತಿ ಭಟ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿತ್ತು. ಇದೀಗ ರಘುಪತಿ ಭಟ್ ಜೊತೆ ಗುರುತಿಸಿಕೊಂಡ ನಾಲ್ವರು ಬಿಜೆಪಿ ಪದಾಧಿಕಾರಿಗಳಿಗೆ ಶಿಸ್ತು ಕ್ರಮ ಜರುಗಿಸುವುದಾಗಿ ನೋಟಿಸ್ ನೀಡಲಾಗಿದೆ.
ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಮಹೇಶ್ ಠಾಕೂರ್, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಉಪೇಂದ್ರ ನಾಯಕ್, ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ರೋಶನ್ ಶೆಟ್ಟಿ ಹಾಗೂ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಜುನೈದ್ ಅವರಿಗೆ ನೋಟಿಸ್ ನೀಡಲಾಗಿದೆ.
ಪಕ್ಷದ ಜವಾಬ್ದಾರಿ ಹೊಂದಿದ್ದರು, ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವುದು ಅಕ್ಷಮ್ಯ. ಇದು ಪಕ್ಷದ ಶಿಸ್ತನ್ನು ಉಲ್ಲಂಘನೆ ಮಾಡಿದಂತೆ ಹೀಗಾಗಿ 48 ಗಂಟೆಗಳ ಒಳ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷರ ಮುಂದೆ ಸ್ಪಷ್ಟೀಕರಣ ನೀಡುವಂತೆ ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ.
ಇನ್ನು ಈ ಹಿಂದೆ ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ವಿರುದ್ಧ ಬಂಡಾಯ ಸಾರಿರುವ ಬಿಜೆಪಿಯ ಮಾಜಿ ಶಾಸಕರಾದ ರಘುಪತಿ ಭಟ್ ಅವರನ್ನು ಪಕ್ಷದಿಂದ ಕೂಡಲೇ ಉಚ್ಚಾಟಿಸುವಂತೆ ಜಿಲ್ಲಾ ಬಿಜೆಪಿ ಮುಖಂಡರು ಪಕ್ಷದ ರಾಜ್ಯ ಸಮಿತಿಗೆ ಶಿಫಾರಸು ಮಾಡಿತ್ತು.
ಪಕ್ಷದ ವಿರುದ್ಧ ಬಂಡಾಯ ಎದ್ದಿರುವ ಅವರು ಬಿಜೆಪಿ ಕಾರ್ಯಕರ್ತರ ಅಭ್ಯರ್ಥಿ ಎಂದು ಬಿಂಬಿಸಿಕೊಳ್ಳುತ್ತಿರುವುದರಿಂದ ಕಾರ್ಯಕರ್ತರಲ್ಲಿ ಗೊಂದಲ ಸೃಷ್ಟಿಯಾಗಿದೆ. ಮತದಾರರಲ್ಲೂ ಗೊಂದಲ ಸೃಷ್ಟಿಸುವುದು ಸರಿಯಲ್ಲ. ಹಾಗಾಗಿ ಅವರನ್ನು ಉಚ್ಛಾಟಿಸುವಂತೆ ಶಿಫಾರಸು ಮಾಡಲಾಗಿತ್ತು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಬಿಜೆಪಿ ರಾಜ್ಯ ಸಮಿತಿ ರಘುಪತಿ ಭಟ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿತ್ತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ