ಬಿಜೆಪಿ ತಂತ್ರಕ್ಕೆ ಪ್ರತಿ ತಂತ್ರ ರೂಪಿಸಲು ಬ್ರೇಕ್‌ ಫಾಸ್ಟ್‌ ಮೀಟಿಂಗ್‌ ಕರೆದ ಸಿಎಂ …!

ಬೆಂಗಳೂರು: 

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಿಂದ ವಾಪಸ್ ಆಗುತ್ತಿದ್ದಂತೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಮತ್ತು ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ತಮ್ಮನ್ನು ಸಿಲುಕಿಸಲು ಮುಂದಾಗಿರುವ ಪ್ರತಿಪಕ್ಷಗಳ ವಿರುದ್ಧ ರಣತಂತ್ರ ರೂಪಿಸಲು ಗುರುವಾರ ಬೆಳಗ್ಗೆ ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿದರು.

   ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಹೈಕಮಾಂಡ್ ಬೆಂಬಲದೊಂದಿಗೆ ಬಿಜೆಪಿಗೆ ಸವಾಲೆಸೆಯಲು ಸಿದ್ಧರಾಗಿದ್ದು, ಇಂದು ಬೆಳಗ್ಗೆ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಸಂಪುಟ ಸಹೋದ್ಯೋಗಿಗಳೊಂದಿಗೆ ಉಪಹಾರ ಸಭೆ ನಡೆಸಿದರು.

   ಈ ಸಭೆ ತಮ್ಮ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಭವಿಷ್ಯದಲ್ಲಿ ಯಾವುದೇ ಅನಾಹುತವನ್ನು ಎದುರಿಸುವ ಕಾರ್ಯತಂತ್ರದ ಭಾಗವಾಗಿದೆ ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಿದ್ದಾರೆ.

   ಉಪಹಾರ ಸಭೆಯಲ್ಲಿ ರಾಜ್ಯಪಾಲರು ಮುಡಾ ಹಗರಣದ ಬಗ್ಗೆ ಮತ್ತೆ ವರದಿ ಕೇಳಿರುವುದು ಮತ್ತು ಅವರ ಮುಂದಿನ ನಡೆ, ಕಾನೂನು ಹೋರಾಟ, ಬಿಜೆಪಿ ತಂತ್ರಕ್ಕೆ ಪ್ರತಿತಂತ್ರ ರೂಪಿಸುವ ಕುರಿತು ಚರ್ಚೆ ನಡೆದಿದ್ದು, ಬಿಜೆಪಿಯವರ ಪಾದಯಾತ್ರೆಯನ್ನು ಹೇಗೆ ಮಟ್ಟಹಾಕಬೇಕು ಮತ್ತು ಅವರ ಹಗರಣಗಳ ಬಗ್ಗೆಯೂ ಪಟ್ಟಿ ಮಾಡಬೇಕು ಎನ್ನುವದರ ಬಗ್ಗೆ ಚರ್ಚೆಯಾಗಿದೆ ಎನ್ನಲಾಗಿದೆ.

    ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ಅವರು ಮುಖ್ಯಮಂತ್ರಿ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ಕೋರಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ. ಹಾಗಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡುವಂತೆ ನೋಟೀಸ್ ನೀಡಿದ್ದಾರೆ. ಈ ಕುರಿತು ಈಗಾಗಲೆ ಹಲವಾರು ಸಚಿವರು, ಕಾಂಗ್ರೆಸ್ ನಾಯಕರು ಕಿಡಿಕಾರಿದ್ದು, ರಾಜ್ಯಪಾಲರ ಮೂಲಕ ರಾಜ್ಯ ಸರ್ಕಾರ ಕೆಡವಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಸಚಿವ ಸಂಪುಟ ಸಭೆ ಕರೆದಿರುವ ಸಿಎಂ ಸಿದ್ದರಾಮಯ್ಯ ಅವರು, ಸಭೆಯಲ್ಲಿ ರಾಜ್ಯಪಾಲರ ನಡೆ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ ಮತ್ತು ನೋಟಿಸ್ ವಾಪಸ್ ಪಡೆಯುವಂತೆ ರಾಜ್ಯಪಾಲರನ್ನು ಕೋರುವ ನಿರ್ಣಯ ಅಂಗೀಕರಿಸುವ ಸಾಧ್ಯತೆ ಇದೆ.

    ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನಿನ್ನೆ ದೆಹಲಿಗೆ ತೆರಳಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ಹಿರಿಯ ನಾಯಕರನ್ನು ಭೇಟಿ ಮಾಡಿ, ರಾಜ್ಯದ ಪ್ರಸ್ತುತ ರಾಜಕೀಯ ಸನ್ನಿವೇಶದ ಬಗ್ಗೆ ಚರ್ಚಿಸಿದ್ದಾರೆ.

   ಇನ್ನು ಆಗಸ್ಟ್ 4ರಂದು ಕಾಂಗ್ರೆಸ್ ಹೈಕಮಾಂಡ್ ನಾಯಕರಾದ ರಣದೀಪ್ ಸಿಂಗ್ ಸುರ್ಜೇವಾಲಾ, ಕೆ.ಸಿ.ವೇಣುಗೋಪಾಲ್ ರಾಜ್ಯಕ್ಕೆ ಆಗಮಿಸಲಿದ್ದು, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಕೆಲ ಸಚಿವರ ಬದಲಾವಣೆ ನಿಟ್ಟಿನಲ್ಲಿ ಮಹತ್ವದ ಚರ್ಚೆ ನಡೆಲಿದ್ದಾರೆ ಎನ್ನಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link