ಸಿದ್ದರಾಮಯ್ಯ ವಿರುದ್ದ ವ್ಯಂಗ್ಯವಾಡಿದ ಬಿವೈವಿ…..!

ಮಂಗಳೂರು:

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ರೋಮ್ ದೊರೆ ನೀರೋಗೆ ಹೋಲಿಸಿದ್ದು, ರೋಮ್ ಹೊತ್ತಿ ಉರಿಯುವಾಗ ದೊರೆ ನೀರೋ ಪಿಟೀಲು ಬಾರಿಸುತ್ತಿದ್ದಂತೆ ಸಿದ್ದರಾಮಯ್ಯ ಅವರು ಇಡೀ ರಾಜ್ಯ ಬರಗಾಲದಿಂದ ತತ್ತರಿಸಿದ್ದರೂ ಮೋಜು ಮಾಡುತ್ತಿದ್ದಾರೆಂದು ವ್ಯಂಗ್ಯವಾಡಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಆರು ತಿಂಗಳಾದರೂ ಕಾಂಗ್ರೆಸ್ ನಾಯಕರು ಇನ್ನೂ ಮೋಜಿನ ಮೂಡ್‌ನಲ್ಲಿದ್ದಾರೆ. ಬರ ಪರಿಸ್ಥಿತಿಯನ್ನು ಲೆಕ್ಕಿಸದೆ ಸಚಿವರು ಹೊಸ ಕಾರುಗಳನ್ನು ಖರೀದಿಸುತ್ತಿದ್ದಾರೆ. ಸಿಎಂ ತಮ್ಮ ಮನೆ ನವೀಕರಣಕ್ಕೆ ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತಿದ್ದಾರೆಂದು ಟೀಕಿಸಿದರು.

     ಇದಲ್ಲದೆ, ಬರದ ತೀವ್ರತೆಯನ್ನು ನಿರ್ಣಯಿಸಲು ಸಚಿವರು ತಮ್ಮ ಜಿಲ್ಲೆಗಳಿಗೆ ಪ್ರವಾಸ ಮಾಡಿಲ್ಲ . ಬೆಂಗಳೂರಿನಲ್ಲಿ ಮಂಗಳವಾರ ನಡೆದ ಕಾಂಗ್ರೆಸ್‌ನ ವರಿಷ್ಠರ ಸಭೆಯಲ್ಲಿ ಸರ್ಕಾರ ಬರ ಪರಿಹಾರ ಘೋಷಣೆ ಮಾಡುವ ನಿರೀಕ್ಷೆ ಇತ್ತು. ಆದರೆ, ಅವರು ಲೋಕಸಭೆ ಚುನಾವಣೆ ಮತ್ತು ಮಂಡಳಿಗಳು ಮತ್ತು ನಿಗಮಗಳ ನೇಮಕಾತಿಗಳ ಬಗ್ಗೆ ಚರ್ಚಿಸಿರುವುದು ದುರಾದೃಷ್ಟಕರ ಸಂಗತಿ. ಇದು ಅವರ ಆದ್ಯತೆಗಳನ್ನು ತೋರಿಸುತ್ತದೆ ಎಂದು ಕಿಡಿಕಾರಿದರು.ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ನಡೆದುಕೊಳ್ಳುತ್ತಿರುವ ರೀತಿ ರೈತ, ಬಡವರು, ದಲಿತರ ವಿರೋಧಿ ಎಂಬುದನ್ನು ಸೂಚಿಸುತ್ತದೆ. ಸರಕಾರ ತನ್ನ ಜನಪ್ರಿಯತೆಯನ್ನು ಕಳೆದುಕೊಂಡಿದೆ ಎಂದು ಹೇಳಿದರು.

     ಇದೇ ವೇಳೆ ಬರ ಪರಿಹಾರ ವಿಚಾರದಲ್ಲಿ ಕೇಂದ್ರದ ಮೇಲೆ ಆರೋಪ ಮಾಡುತ್ತಿರುವ ಸಿಎಂ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, ರಾಜ್ಯ ಸರ್ಕಾರಕ್ಕೆ ಜವಾಬ್ದಾರಿ ಇಲ್ಲವೇ ಎಂದು ಪ್ರಶ್ನಿಸಿದರು.

     ಬಳಿಕ ಹಿಂದುತ್ವದ ಮುಖಂಡ ಅರುಣಕುಮಾರ ಪುತ್ತಿಲ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದ್ದಾರೆ ಎಂಬ ವರದಿಗಳ ಕುರಿತು ಮಾತನಾಡಿ, ಪಕ್ಷದ ಹಿರಿಯ ನಾಯಕರ ಅಭಿಪ್ರಾಯ ಪಡೆದು ಈ ಕುರಿತು ನಿರ್ಧಾರ ಕೈಗೊಳ್ಳುವುದಾಗಿ ಹೇಳಿದರು.

    ಜಾತಿ ಗಣತಿ ವಿಚಾರ ಕುರಿತು ಮಾತನಾಡಿ, ಜಾತಿ ಗಣತಿಗೆ ಬಿಜೆಪಿ ವಿರೋಧಿಸುತ್ತಿಲ್ಲ. ಆದರೆ, ಹಿಂದೆ ಅಧಿಕಾರದಲ್ಲಿದ್ದಾಗ ಏಕೆ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಿಲ್ಲ  ಎಂದು ಪ್ರಶ್ನಿಸಿದರು.ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಜಾತಿಗಣತಿ ವರದಿ ವಿಚಾರವನ್ನು ಪ್ರಸ್ತಾಪಿಸಲಾಗುತ್ತಿದೆ. ಇದನ್ನು ಚುನಾವಣಾ ಲಾಭಕ್ಕಾಗಿ ದುರ್ಬಳಕೆ ಮಾಡಿಕೊಳ್ಳುವುದು ಸರಿಯಲ್ಲ ಎಂದರು.

    ಇದೇ ವೇಳೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ “ಮುಸ್ಲಿಂ ಸ್ಪೀಕರ್‌ಗೆ ನಮಸ್ಕರಿಸುವ” ಹೇಳಿಕೆಯನ್ನು ಟೀಕಿಸಿದ ಅವರು, ಅವರಿಗೆ ಇನ್ನೂ ಹೊರಗೆ ತಿರುಗಾಡಲು ಅವಕಾಶ ನೀಡಿರುವುದೇ ದೊಡ್ಡ ಅಪರಾಧವಾಗಿದೆ ಎಂದು ಹೇಳಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap