ನವದೆಹಲಿ:
ಪೌರತ್ವ (ತಿದ್ದುಪಡಿ) ಕಾಯ್ದೆಯ ನಿಮಯಗಳ ಅನುಷ್ಠಾನಕ್ಕೆ ತಡೆ ಕೋರಿ ಸಲ್ಲಿಸಲಾಗಿರುವ ಅರ್ಜಿಗಳಿಗೆ ಮೂರು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿರುವ ಸುಪ್ರೀಂ ಕೋರ್ಟ್, ಸಿಎಎ ಜಾರಿಗೆ ತಡೆ ನೀಡುವ ಯಾವುದೇ ಮಧ್ಯಂತರ ಆದೇಶ ನೀಡಲು ಮಂಗಳವಾರ ನಿರಾಕರಿಸಿದೆ.
2024ರ ಪೌರತ್ವ ತಿದ್ದುಪಡಿ ನಿಯಮಗಳ ಜಾರಿಯನ್ನು ಪ್ರಶ್ನಿಸುವ ಅರ್ಜಿಗಳಿಗೆ ಪ್ರತಿಕ್ರಿಯಿಸಲು ಕೇಂದ್ರ ಸರ್ಕಾರಕ್ಕೆ ಸಮಂಜಸವಾದ ಸಮಯವನ್ನು ನೀಡಬೇಕು ಎಂದು ಒತ್ತಿಹೇಳಿರುವ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು ಮುಂದಿನ ವಿಚಾರಣೆಯನ್ನು ಏಪ್ರಿಲ್ 9 ಕ್ಕೆ ಮುಂದೂಡಿದೆ.
ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಸಿಎಎ ಅನುಷ್ಠಾನವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ 20 ಅರ್ಜಿಗಳಿಗೆ ಉತ್ತರ ನೀಡಲು ನಾಲ್ಕು ವಾರಗಳ ಕಾಲಾವಕಾಶ ಬೇಕು ಎಂದು ಪೀಠಕ್ಕೆ ತಿಳಿಸಿದರು.
ಪೌರತ್ವ ತಿದ್ದುಪಡಿ ಕಾಯ್ದೆ-2019ರ ಸಾಂವಿಧಾನಿಕ ಮಾನ್ಯತೆಯನ್ನು ಪ್ರಶ್ನಿಸಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಲೇವಾರಿ ಮಾಡುವ ತನಕ ಸಿಎಎ ನಿಯಮಗಳ ಜಾರಿಗೆ ತಡೆ ನೀಡಬೇಕು ಎಂದು ಅರ್ಜಿಗಳಲ್ಲಿ ಕೋರಲಾಗಿದೆ.
‘ಸಿಎಎ ಕಾಯ್ದೆಯ ಅನುಷ್ಠಾನವು ಯಾವುದೇ ವ್ಯಕ್ತಿಯ ಪೌರತ್ವವನ್ನು ಕಸಿದುಕೊಳ್ಳುವುದಿಲ್ಲ’ ಎಂದು ಮೆಹ್ತಾ ಅವರು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠಕ್ಕೆ ತಿಳಿಸಿದರು.
ಪೌರತ್ವ ತಿದ್ದುಪಡಿ ಕಾಯ್ದೆ-2019ಕ್ಕೆ ಸಂಬಂಧಿಸಿದಂತೆ ನಿಯಮಗಳನ್ನು ಕೇಂದ್ರ ಸರ್ಕಾರವು ಮಾರ್ಚ್ 11 ರಂದು ಅಧಿಸೂಚನೆಯಲ್ಲಿ ಪ್ರಕಟಿಸಿದೆ. ಯಾವುದೇ ದಾಖಲೆಗಳು ಇಲ್ಲದೆ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಗಾನಿಸ್ತಾನದಿಂದ 2014ರ ಡಿಸೆಂಬರ್ 31ಕ್ಕೂ ಮೊದಲು ಭಾರತವನ್ನು ಪ್ರವೇಶಿಸಿದ ಮುಸ್ಲಿಮೇತರರಿಗೆ ಭಾರತದ ಪೌರತ್ವವನ್ನು ಈ ಕಾಯ್ದೆ ನೀಡುತ್ತದೆ.
ಮೇಲಿನ ಮೂರು ದೇಶಗಳಲ್ಲಿ ದೌರ್ಜನ್ಯಕ್ಕೆ ಗುರಿಯಾಗಿ ಭಾರತಕ್ಕೆ ಬಂದ ಹಿಂದೂ, ಸಿಖ್, ಜೈನ, ಬೌದ್ಧ, ಪಾರ್ಸಿ ಮತ್ತು ಕ್ರೈಸ್ತ ಸಮುದಾಯಕ್ಕೆ ಸೇರಿದವರಿಗೆ ಭಾರತದ ಪೌರತ್ವ ದೊರೆಯಲಿದೆ.
ಪೌರತ್ವ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿಯವರು 2019ರ ಡಿಸೆಂಬರ್‌ನಲ್ಲಿ ಅಂಕಿತ ಹಾಕಿದ್ದರು. ಆದರೆ, ಈ ಕಾನೂನು ವಿರೋಧಿಸಿ ದೇಶದ ಹಲವು ಕಡೆಗಳಲ್ಲಿ ಪ್ರತಿಭಟನೆಗಳು ನಡೆದಿದ್ದವು. ಕಾಯ್ದೆಗೆ ಸಂಬಂಧಿಸಿದ ನಿಯಮಗಳನ್ನು ಇದುವರೆಗೆ ಅಧಿಸೂಚನೆಯಲ್ಲಿ ಪ್ರಕಟಿಸಿರಲಿಲ್ಲ. ಹೀಗಾಗಿ ಕಾಯ್ದೆ ಜಾರಿಗೆ ಬಂದಿರಲಿಲ್ಲ. ಇತ್ತೀಚೆಗೆ ಕೇಂದ್ರ ಸರ್ಕಾರ ಅಧಿಸೂಚನೆಯನ್ನು ಹೊರಡಿಸಿತ್ತು.