ಕಲಬುರಗಿಯಲ್ಲಿಂದು ಸಂಪುಟ ಸಭೆ: ಮಹತ್ವದ ನಿರ್ಣಯ ಸಾಧ್ಯತೆ

ಬೆಂಗಳೂರು:

   ಕಲಬುರಗಿಯಲ್ಲಿ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿ ಸೇರಿ ಹಲವು ಮಹತ್ವದ ವಿಷಯಗಳ ಕುರಿತು ನಿರ್ಣಯ ಕೈಗೊಳ್ಳುವ ಸಾಧ್ಯತೆಗಳಿವೆ.

   ಸಭೆ ಕುರಿತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಪ್ರಿಯಾಂಕ್ ಮಾತನಾಡಿ, ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಇಲಾಖೆ, ಐಟಿ–ಬಿಟಿ, ಶಿಕ್ಷಣ ಇಲಾಖೆ, ನೀರಾವರಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಹಲವು ಪ್ರಸ್ತಾವನೆಗಳ ಬಗ್ಗೆ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

   ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಯಾಗಬೇಕು ಎನ್ನುವುದು ನಮ್ಮ ಸರ್ಕಾರದ ಆಶಯ. ಅದಕ್ಕಾಗಿಯೇ 10 ವರ್ಷಗಳ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಲು ತೀರ್ಮಾನಿಸಿದ್ದಾರೆ. ಸಂಪುಟ ಸಭೆಯಲ್ಲಿ ರಾಜ್ಯಮಟ್ಟದಲ್ಲಿ ಆರ್ಥಿಕ ಇಲಾಖೆಯ ಮುಂದೆ ಇರುವ ಪ್ರಸ್ತಾವಗಳಿಗೆ ಒಪ್ಪಿಗೆ ಸಿಗಲಿದೆ. ಅದರಲ್ಲೂ ಮುಖ್ಯವಾಗಿ ಕಲ್ಯಾಣ ಕರ್ನಾಟಕ ವ್ಯಾಪ್ತಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಪ್ರಸ್ತಾವಗಳು ಚರ್ಚೆಗೆ ಬರಲಿವೆ.

   ಜಲಸಂಪನ್ಮೂಲ ಸಚಿವರೂ ಆದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಲು ಅಮೆರಿಕ ಪ್ರವಾಸವನ್ನು ಮೊಟಕುಗೊಳಿಸಿ ವಾಪಸಾಗುತ್ತಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರು ಗುಜರಾತ್ ಪ್ರವಾಸದಲ್ಲಿರುವುದರಿಂದ ಮುಖ್ಯಮಂತ್ರಿಗಳ ಒಪ್ಪಿಗೆ ಪಡೆದು ಸಂಪುಟ ಸಭೆಗೆ ಹಾಜರಾಗುತ್ತಿಲ್ಲ ಎಂದು ತಿಳಿಸಿದರು. ವಿವಿಧ ಇಲಾಖೆಗಳಲ್ಲಿ 2.4 ಲಕ್ಷ ಹುದ್ದೆಗಳು ಖಾಲಿ ಇವೆ. ನೀರಾವರಿ, ಶಿಕ್ಷಣ ಮತ್ತು ಆರೋಗ್ಯ ಇಲಾಖೆಗಳಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆಯೂ ಚರ್ಚೆಗಳು ನಡೆಯಲಿದೆ ಎಂದರು.

   ಹನಿ ಟ್ರ್ಯಾಪ್ ಪ್ರಕರಣದ ಸಿಬಿಐ ತನಿಖೆಗೆ ಆಗ್ರಹಿಸಿ ಸೋಮವಾರ ಕಲಬುರಗಿಯಲ್ಲಿ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನಡೆಸಿದ ಪ್ರತಿಭಟನೆ ಕುರಿತ ಪ್ರಶ್ನೆಗೆ ಉತ್ತರಿಸಿ, ಸಚಿವ ಸಂಪುಟ ಸಭೆಯಿಂದ ಜನರ ಗಮನ ಬೇರೆಡೆ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದರು.ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆಗೆ ತ್ವರಿತ ನ್ಯಾಯಾಲಯಗಳ ಅಗತ್ಯವಿದೆ ಎಂಬ ಬಿಜೆಪಿ ಆಗ್ರಹ ಕುರಿತು ಪ್ರತಿಕ್ರಿಯಿಸಿ, ಬಿಜೆಪಿ ನಾಯಕರು ಮಾಡಿರುವ ಹಗರಣಗಳ ವಿಚಾರಣೆ ನಡೆಸಲು ಮಾತ್ರ ಇಂತಹ ನ್ಯಾಯಾಲಯಗಳ ಅಗತ್ಯವಿದೆ ಎಂದು ವ್ಯಂಗ್ಯವಾಡಿದರು.

   ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಮಾತನಾಡಿ, ಹಿಂದೆ ಕಾಂಗ್ರೆಸ್ ಸರ್ಕಾರ ಇದ್ದಾಗಲೂ ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇದ್ದ 30 ಸಾವಿರ ಹುದ್ದೆಗಳನ್ನು ಭರ್ತಿ ಮಾಡಿದ್ದೆವು. ಈಗಲೂ ಮುಂದಿನ ಒಂದೂವರೆ ವರ್ಷದೊಳಗಾಗಿ ಈ ಭಾಗದ 15 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ಸಿದ್ಧತೆ ನಡೆಸಲಾಗಿದ್ದು, ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ನೀಡುವಂತೆ ತಿಳಿಸಲಾಗಿದೆ. ನಂತರ ಇನ್ನೂ 25 ಸಾವಿರ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುವುದು. ಮತ್ತೆ 6500 ಶಿಕ್ಷಕರ ನೇಮಕಾತಿಗೆ ಶೀಘ್ರ ಅಧಿಸೂಚನೆ ಹೊರಡಿಸಲಾಗುವುದು ಎಂದರು.

Recent Articles

spot_img

Related Stories

Share via
Copy link
Powered by Social Snap