ಬೆಂಗಳೂರು:
ಸರ್ಕಾರದ ಮಹತ್ವಾಕಾಂಕ್ಷಿಯಾದ ಪ್ರಮುಖ ಐದು ‘ಗ್ಯಾರಂಟಿ’ ಯೋಜನೆಗಳ ಬಗ್ಗೆ ಸುಳ್ಳು ಜಾಹೀರಾತುಗಳನ್ನು ನೀಡಿದ ಆರೋಪದ ಮೇಲೆ ಮಹಾರಾಷ್ಟ್ರ ಮುಖ್ಯಮಂತ್ರಿ ವಿರುದ್ಧ ಮೊಕದ್ದಮೆ ಹೂಡಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ.ಗ್ಯಾರಂಟಿ ಯೋಜನೆ ಬಗ್ಗೆ ಸುಳ್ಳು ಜಾಹೀರಾತು ನೀಡಿದ ಮಹಾಯುತಿ ಸರ್ಕಾರದ ವಿರುದ್ಧ ಕಾನೂನು ಕ್ರಮದ ಕುರಿತು ಪರಿಶೀಲಿಸಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
‘ಮತ ಪಡೆಯುವ ಸಲುವಾಗಿ ಮಹಾರಾಷ್ಟ್ರದ ಜನರನ್ನು ದಾರಿ ತಪ್ಪಿಸಲಾಗುತ್ತಿದೆ. ಅವರು(ಪ್ರಧಾನಿ) ಸುಳ್ಳು ಹೇಳುತ್ತಿದ್ದಾರೆ. ಮಹಾರಾಷ್ಟ್ರ ಸರ್ಕಾರವು ಸುಳ್ಳು ಜಾಹೀರಾತು ನೀಡುತ್ತಿದೆ’ ಎಂದು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಗುರಿಯಾಗಿಟ್ಟುಕೊಂಡು ವಾಗ್ದಾಳಿ ನಡೆಸುತ್ತಿರುವ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದರು. ಮಹಾರಾಷ್ಟ್ರ ವಿಧಾನಸಭೆ ಚುನಾವಣಾ ಪ್ರಚಾರದ ಸಮಯದಲ್ಲಿ ಮತ್ತು ಜಾಹೀರಾತಿನಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ತಪ್ಪು ಮಾಹಿತಿ ನೀಡಿದ್ದು, ಅವರ ವಿರುದ್ಧ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲಿದೆ ಎಂದರು.
“ಕಾನೂನು ಕ್ರಮ ತೆಗೆದುಕೊಳ್ಳುವ ಬಗ್ಗೆ ನಾನು ಪರಿಶೀಲಿಸುತ್ತಿದ್ದೇನೆ. ಮಹಾರಾಷ್ಟ್ರ ಸರ್ಕಾರದ ವಿರುದ್ಧ ಮೊಕದ್ದಮೆ ಹೂಡಲು ನಾವು ಯೋಚಿಸುತ್ತಿದ್ದೇವೆ. ಏಕೆಂದರೆ ಅವರು ಸುಳ್ಳು ಜಾಹೀರಾತುಗಳನ್ನು ನೀಡಿದ್ದಾರೆ” ಎಂದು ಸಿಎಂ ಸಿದ್ದರಾಮಯ್ಯ ಸುದ್ದಿಗಾರರಿಗೆ ತಿಳಿಸಿದರು.ಕರ್ನಾಟಕ ಸರ್ಕಾರವು ಖಾತರಿ ಯೋಜನೆಗಳಿಗಾಗಿ ವರ್ಷಕ್ಕೆ 56,000 ಕೋಟಿ ರೂಪಾಯಿಗಳನ್ನು ಖರ್ಚು ಮಾಡುತ್ತಿದೆ ಎಂದು ಮುಖ್ಯಮಂತ್ರಿ ಹೇಳಿದರು.
“ಅವರು ನಮ್ಮ ಬಳಿ ಹಣವಿಲ್ಲ ಎಂದು ಹೇಳುತ್ತಾರೆ. ಬಿಜೆಪಿ ಅಧಿಕಾರದಲ್ಲಿರುವ ಇತರ ರಾಜ್ಯಗಳಲ್ಲಿ ಇಂತಹ ಯೋಜನೆಗಳನ್ನು ಏಕೆ ಜಾರಿಗೆ ತರುತ್ತಿಲ್ಲ?” ಎಂದು ಪ್ರಶ್ನಿಸಿದರು.ಜೆಡಿಎಸ್‌ನ ಎಚ್‌ಡಿ ಕುಮಾರಸ್ವಾಮಿ ಅವರು ಅಧಿಕಾರದಲ್ಲಿದ್ದಾಗ ಗ್ಯಾರಂಟಿ ಯೋಜನೆಗಳನ್ನು ನೀಡಿದ್ದೀರಾ? ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಲು ಅವರಿಗೆ ಯಾವ ನೈತಿಕ ಹಕ್ಕಿದೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಕುಮಾರಸ್ವಾಮಿ ದೆಹಲಿಯಲ್ಲಿ ಮಾತನಾಡಲಿ, ಕರ್ನಾಟಕ ವರ್ಷಕ್ಕೆ 4.5 ಲಕ್ಷ ಕೋಟಿ ರೂ. ತೆರಿಗೆ ಕಟ್ಟುತ್ತಿದೆ. ಆದರೆ ನಮಗೆ ಸಿಗುವುದು 59,000-60,000 ಕೋಟಿ ರೂ. 1 ರೂ. ಕೊಟ್ಟರೆ 14 ಪೈಸೆ ವಾಪಸ್ ಪಡೆಯುತ್ತೇವೆ. ಉಳಿದ ಹಣ ಕೇಂದ್ರದ ಬಳಿ ಇದೆ, ಸುಮ್ಮನೆ ಮಾತನಾಡುವ ಬದಲು ಅವರು ರಾಜ್ಯಕ್ಕೆ ಹೆಚ್ಚಿನ ಅನುದಾನ ನೀಡಲಿ” ಎಂದು ಕೇಂದ್ರ ಸಚಿವರಿಗೆ ತಿರುಗೇಟು ನೀಡಿದರು.