ತೆರಿಗೆ ಹಂಚಿಕೆ ಕಡಿತ : ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ : ಸಿಎಂ

ಬೆಂಗಳೂರು:

     ರಾಜ್ಯದಿಂದ 4 ಲಕ್ಷ 30 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹವಾಗುತ್ತಿದೆ. ತೆರಿಗೆ ಸಂಗ್ರಹದಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ. ಆದರೂ ನಮಗೆ ತೆರಿಗೆ ಹಣದಲ್ಲಿ ಮೋಸವಾಗುತ್ತಿದೆ. ತೆರಿಗೆ ಹಂಚಿಕೆ ಕಡಿತದಿಂದ ಕರ್ನಾಟಕಕ್ಕೆ 45 ಸಾವಿರ ಕೋಟಿಗೂ ಹೆಚ್ಚು ನಷ್ಟವಾಗುತ್ತಿದೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

    ರಾಜ್ಯದ ಪಾಲಿನ ತೆರಿಗೆ ಹಣವನ್ನು ನೀಡದ ಕೇಂದ್ರ ಸರ್ಕಾರದ ವಿರುದ್ಧ ಫೆಬ್ರವರಿ 7 ರಂದು ದೆಹಲಿಯ ಜಂತರ್​ ಮಂತರ್​​ನಲ್ಲಿ ಧರಣಿ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರು ಇಂದು ವಿಧಾನಸೌಧದಲ್ಲಿ ಜಂಟಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು.

    ನಾವು ಕೇಂದ್ರ ಸರ್ಕಾರಕ್ಕೆ 100 ರೂ. ತೆರಿಗೆ ಕಟ್ಟಿದರೆ ನಮಗೆ ಶೇ. 12-13ರಷ್ಟು ವಾಪಸ್ ಬರುತ್ತಿದೆ. ಆದರೂ ಕರ್ನಾಟಕಕ್ಕೆ ಅನ್ಯಾಯವಾಗಿಲ್ಲವೆಂದು ರಾಜ್ಯ ಬಿಜೆಪಿ ನಾಯಕರು ಹೇಳುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.

    ಕೇಂದ್ರದ ವಿರುದ್ಧ ನಾವು ಧ್ವನಿ ಎತ್ತಲೇಬೇಕಾದ ಅನಿವಾರ್ಯತೆ ಎದುರಾಗಿದೆ. ದೆಹಲಿಯಲ್ಲಿ ನಮ್ಮ ಇಡೀ ಸರ್ಕಾರ ಪ್ರತಿಭಟನೆ ಮಾಡಲಿದೆ. ಈ ಪ್ರತಿಭಟನೆಯಲ್ಲಿ ಎಲ್ಲಾ ಸಚಿವರು, ಶಾಸಕರು ಭಾಗಿಯಾಗಲಿದ್ದಾರೆ. ಧರಣಿಯಲ್ಲಿ ರಾಜ್ಯದ ಎಲ್ಲಾ ಸಂಸದರು ಕೂಡ ಭಾಗಿಯಾಗಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಮನವಿ ಮಾಡಿದರು. 

     ಕೇಂದ್ರ ಸರ್ಕಾರದ ವಿರುದ್ಧ ಈವರೆಗೆ ರಾಜ್ಯ ಸರ್ಕಾರ ಧರಣಿ ನಡೆಸಿರಲಿಲ್ಲ. ಆದರೆ ಈಗ ಅನಿವಾರ್ಯವಾಗಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದೇವೆ. ಇದು ರಾಜಕೀಯ ಪ್ರೇರಿತ ಪ್ರತಿಭಟನೆಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. 

     ನಾಳೆ ಸಂಜೆಯೇ ದೆಹಲಿಗೆ ಹೋಗುತ್ತೇವೆ. ನಾಡಿದ್ದು ಪ್ರತಿಭಟನೆ ಮಾಡುತ್ತೇವೆ. ಸಂವಿಧಾನ ಅಳವಡಿಸಿಕೊಂಡ ಬಳಿಕ ಒಕ್ಕೂಟ ವ್ಯವಸ್ಥೆ ಒಪ್ಪಿಕೊಂಡಿದ್ದೇವೆ. ರಾಜ್ಯಗಳಿಂದ ತೆರಿಗೆ ರೂಪದಲ್ಲಿ ಕೇಂದ್ರ ಸರ್ಕಾರಕ್ಕೆ ಹಣ ಹೋಗುತ್ತದೆ. ಹಣಕಾಸು ಆಯೋಗ ನಿರ್ಧರಿಸಿದಂತೆ ಈ ಹಣ ರಾಜ್ಯಗಳಿಗೆ ನೀಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು.

     14ನೇ ಹಣಕಾಸು ಆಯೋಗದಂತೆ ರಾಜ್ಯಕ್ಕೆ ಶೇ 42ರಷ್ಟು ಹಣ ನೀಡಬೇಕು. 15ನೇ ಹಣಕಾಸು ಆಯೋಗದಂತೆ ರಾಜ್ಯಕ್ಕೆ ಶೇ 41ರಷ್ಟು ಹಣ ನೀಡಬೇಕು. ನರೇಂದ್ರ ಮೋದಿ ಪ್ರಧಾನಿಯಾದ ಬಳಿಕವೇ ಈ ಆಯೋಗ ರಚನೆ ಆಗಿತ್ತು ಎಂದು ಸಿದ್ದರಾಮಯ್ಯ ಹೇಳಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap