ಬೆಂಗಳೂರು:
ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಬರ ಪರಿಹಾರ ಬಿಡುಗಡೆ ಮಾಡಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದು ಸುಳ್ಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಆರೋಪಿಸಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ್ದ ನಿರ್ಮಾ ಅವರು, ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿದ್ದು, ಇದರಿಂದಾಗಿ ಹಣ ಬಿಡುಗಡೆ ಮಾಡುವ ಕಾರ್ಯವಿಧಾನಗಳಿಗೆ ಕಾಲಾವಕಾಶ ಬೇಕಾಗಿದೆ ಎಂದು ಹೇಳಿದ್ದರು.
ಈ ಹೇಳಿಕೆ ಬೆನ್ನಲ್ಲೇ ಭಾನುವಾರ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವಿವಿಧೆಡೆ ಪ್ರಚಾರ ನಡೆಸಿದ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿರುವ ಮುಖ್ಯಂತ್ರಿಗಳು, ಕೇಂದ್ರದ ಆರ್ಥಿಕ ಅನ್ಯಾಯ, ಬರ ಪರಿಹಾರ ವಿಳಂಬದ ಬಗ್ಗೆ ಒಬ್ಬೊಬ್ಬರು ಒಂದೊಂದು ರೀತಿಯ ಸುಳ್ಳು ಹೇಳಿದ್ದಾರೆ. ಈ ಮೂಲಕ ರಾಜ್ಯದ ಜನತೆಯ ಮುಂದೆ ಅವರ ಬಣ್ಣ ಬಯಲಾಗಿದ್ದು, ಮತದಾರರು ಅಂತಹ ಸುಳ್ಳರಿಗೆ ಮತ ಹಾಕಿದರೆ ನಿಮ್ಮ ಮತಕ್ಕೆ ಗೌರವ ಬರುತ್ತದೆಯೇ ಎಂದು ಪ್ರಶ್ನಿಸಿದರು.
ಕೇಂದ್ರ ಸರ್ಕಾರ ಬೆಂಗಳೂರಿಗೆ ಕುಡಿಯುವ ನೀರು ಒದಗಿಸುವ ಮೇಕೆದಾಟು ಯೋಜನೆಗೆ ಅನುಮತಿ ಕೊಡಲಿಲ್ಲ. ಮೋದಿಯವರೂ ಬೆಂಗಳೂರಿನ ಜನತೆಗೆ ಕುಡಿಯುವ ನೀರು ಕೊಡುವ ಯೋಜನೆಗೆ ಬೆಂಬಲ ಘೋಷಿಸಲಿಲ್ಲ. ಕಪ್ಪು ಹಣ ತಂದು ಎಲ್ಲರ ಖಾತೆಗೆ 15 ಲಕ್ಷ ಹಾಕುತ್ತೇವೆ ಎಂದು 15 ರುಪಾಯಿಯನ್ನೂ ಹಾಕಿಲ್ಲ. ಮೋದಿಯವರು ಹೇಳಿದ ಯಾವುದನ್ನೂ ಜಾರಿ ಮಾಡಿಲ್ಲ. ಹೀಗಾಗಿ ಅವರ ಮುಖ ಮೋಡಿ ಮತ ಹಾಕಿದರೆ ನಿಮ್ಮ ಮತ ಗೌರವ ಕಳೆದುಕೊಳ್ಳಲಿದೆ ಎಂದು ಹೇಳಿದರು.
ನುಡಿದಂತೆ ನಡೆದು ನಿಮ್ಮ ಮತಗಳಿಗೆ ಘನತೆ ತರುವ ಕೆಲಸವನ್ನು ನಾವು ಮಾಡಿದ್ದೇವೆ. ಹೀಗಾಗಿ ನಮಗೆ ಶಕ್ತಿ ತುಂಬಿ. ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಸಂಸದರಾಗಿ ನಾಡಿನ ಜನತೆಗೆ ಆದ ಅನ್ಯಾಯಗಳ ಬಗ್ಗೆ ಸಂಸತ್ತಿನಲ್ಲಿ ಧ್ವನಿ ಎತ್ತಲಿಲ್ಲ. ಶೋಭಾ ಅವರನ್ನು ಉಡುಪಿ-ಚಿಕ್ಕಮಗಳೂರಿನ ಬಿಜೆಪಿ ಕಾರ್ಯಕರ್ತರೇ ಗೋ ಬ್ಯಾಕ್ ಎಂದು ಓಡಿಸಿದ್ದಾರೆ. ಹೀಗಾಗಿ ನೀವೂ ಕೂಡ ಸೋಲಿಸಿ ಎಂದರು.