ಚನ್ನಪಟ್ಟಣ ಉಚುನಾವಣೆ: ಬಿಜೆಪಿ-ಜೆಡಿಎಸ್ ನಾಯಕರ ಮಾತುಕತೆ ವಿಫಲ!

ಬೆಂಗಳೂರು: 

   ಚನ್ನಪಟ್ಟಣ ಉಪಚುನಾವಣೆಯ ಅಭ್ಯರ್ಥಿ ಆಯ್ಕೆ ಸಂಬಂಧ ಮೈತ್ರಿ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ನಡುವಿನ ಭಿನ್ನಾಭಿಪ್ರಾಯ ಬಹಿರಂಗವಾಗಿದ್ದು, ಮುಖಂಡರ ನಡುವಿನ ಮಾತುಕತೆ ವಿಫಲವಾಗಿದೆ.

   ಟಿಕೆಟ್‌ಗಾಗಿ ಲಾಬಿ ನಡೆಸುತ್ತಿರುವ ಮಾಜಿ ಸಚಿವ ಸಿ.ಪಿ.ಯೋಗೇಶ್ವರ ಅವರು ಬಿಜೆಪಿ ಹೈಕಮಾಂಡ್ ಮೇಲೆ ಭರವಸೆ ಇಟ್ಟುಕೊಂಡಿದ್ದಾರೆ,ಇದೇ ವೇಳೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ಆರ್.ಅಶೋಕ ಯೋಗೇಶ್ವರ್ ಗೆ ಬೆಂಬಲ ಸೂಚಿಸಿದ್ದಾರೆ. ಗುರುವಾರ ನವದೆಹಲಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ತಮ್ಮನ್ನು ಅಭ್ಯರ್ಥಿ ಎಂದು ಘೋಷಿಸಿರುವ ಯೋಗೇಶ್ವರ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

   ರಾಷ್ಟ್ರ ರಾಜಧಾನಿಯಲ್ಲಿ ಬೀಡುಬಿಟ್ಟಿರುವ ಅಶೋಕ, ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ ಮತ್ತು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಯೋಗೇಶ್ವರ್ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಎನ್‌ಡಿಎ ಅಭ್ಯರ್ಥಿ ಯಾರೇ ಆಗಲಿ ಚನ್ನಪಟ್ಟಣ ಕ್ಷೇತ್ರದಲ್ಲಿ ಗೆಲುವು ಸಾಧಿಸುವುದು ಮುಖ್ಯ ಎಂದು ಅಶೋಕ ಅಭಿಪ್ರಾಯಪಟ್ಟಿದ್ದಾರೆ. ಆದರೆ ಯೋಗೇಶ್ವರ ಅವರಿಗೆ ಬಿಜೆಪಿ ಟಿಕೆಟ್ ಸಿಗುವ ವಿಶ್ವಾಸವಿಲ್ಲ ಮತ್ತು ಜೆಡಿಎಸ್ ಅಭ್ಯರ್ಥಿಯಾಗಿ ಅಥವಾ ಬಿಎಸ್ಪಿ ಟಿಕೆಟ್‌ನಲ್ಲಿ ಇಲ್ಲವೇ ಸ್ವತಂತ್ರವಾಗಿ ಸ್ಪರ್ಧಿಸಲು ಸಿದ್ಧರಿದ್ದಾರೆ ಎಂದು ಮೂಲಗಳು ತಿಳಿಸಿವೆ. ತ್ರಿಕೋನ ಹಣಾಹಣಿಯಲ್ಲಿ ತನಗೆ ಬಲವಿದೆ ಎಂದು ಅವರು ಭಾವಿಸಿದ್ದಾರೆ.

   ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ಕುಮಾರಸ್ವಾಮಿ ಪುತ್ರ ನಿಖಿಲ್ ಚನ್ನಪಟ್ಟಣದಲ್ಲಿ ಪಕ್ಷ ಸಂಘಟಿಸುತ್ತಿರುವುದು ಕುತೂಹಲ ಮೂಡಿಸಿದೆ. ಕರ್ನಾಟಕ ಡಿಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಕೂಡ ಕ್ಷೇತ್ರಕ್ಕೆ ಆಗಾಗ ಭೇಟಿ ನೀಡಿ ಜನರಿಗೆ ಹತ್ತಿರವಾಗುತ್ತಿದ್ದಾರೆ. ರಾಜಕೀಯ ವಿಶ್ಲೇಷಕರ ಪ್ರಕಾರ, ಒಕ್ಕಲಿಗ ಭದ್ರಕೋಟೆಯ ಮೇಲೆ ಹಿಡಿತ ಸಾಧಿಸಲು ಇಬ್ಬರೂ ಬಯಸಿದ್ದಾರೆ. ಹೀಗಾಗಿ ಚನ್ನಪಟ್ಟಣ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದ ಕ್ಷೇತ್ರವನ್ನು ತಮ್ಮ ಹಿಡಿತದಲ್ಲಿಟ್ಟುಕೊಳ್ಳಲು ಬಯಸಿದ್ದಾರೆ. ಕುಮಾರಸ್ವಾಮಿ ಮತ್ತು ಶಿವಕುಮಾರ್ ಅವರ ಪ್ರತಿಷ್ಠೆ ಪಣಕ್ಕಿಟ್ಟಿದ್ದಾರೆ.

Recent Articles

spot_img

Related Stories

Share via
Copy link
Powered by Social Snap