ಚಿತ್ರದುರ್ಗ:
ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸುಮಾರು 350 ಕೋಟಿ ರೂ. ಅನುದಾನದಡಿ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ಶಾಸಕ ಚಂದ್ರಪ್ಪ ಅವರು ಹೇಳಿದರು.
ಹೊಳಲ್ಕೆರೆ ತಾಲ್ಲೂಕು ಕಾಳಘಟ್ಟ ಲಂಬಾಣಿ ಹಟ್ಟಿ ಗ್ರಾಮದಲ್ಲಿ ನೂತನ ಕಂದಾಯ ಗ್ರಾಮ ‘ಪ್ರಿಯಾ ನಗರ’ ಗ್ರಾಮದ ಉದ್ಘಾಟನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಹೊಳಲ್ಕೆರೆ ಕ್ಷೇತ್ರದಲ್ಲಿ ಸುಮಾರು 350 ಕೋಟಿ ರೂ. ವೆಚ್ಚದಲ್ಲಿ ರಸ್ತೆ, ಕುಡಿಯುವ ನೀರು ಮತ್ತು ವಿವಿಧ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಕಾಳಘಟ್ಟ ಲಂಬಾಣಿಹಟ್ಟಿ ಗ್ರಾಮವನ್ನು 3.20 ಕೋಟಿ ರೂ. ವೆಚ್ಚದಲ್ಲಿ ರಸ್ತೆ, ಕುಡಿಯುವ ನೀರು, ಅಂಗನವಾಡಿ ಕಟ್ಟಡ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದರು.
ಭದ್ರಾ ಮೇಲ್ದಂಡೆ ಯೋಜನೆಯಿಂದ ಕ್ಷೇತ್ರದ ಕೆರೆಗಳನ್ನು ತುಂಬಿಸುವ ಮಹತ್ವದ ಕಾರ್ಯ ನಡೆಯುತ್ತಿದ್ದು, ಒಂದು ವರ್ಷದೊಳಗೆ ಯೋಜನೆಯಡಿ ಕೆರೆಗಳನ್ನು ತುಂಬಿಸಲಾಗುವುದು. ಕ್ಷೇತ್ರದ ಎಲ್ಲ ಗ್ರಾಮಗಳಿಗು ಶಾಂತಿ ಸಾಗರದಿಂದ ಕುಡಿಯುವ ನೀರು ಪೂರೈಸಲು 300 ಕೋಟಿ ರೂ. ಯೋಜನೆ ರೂಪಿಸಲಾಗಿದ್ದು, ಶೀಘ್ರ ಪ್ರಾರಂಭಿಸಲಾಗುವುದು. ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಅವರು ಈ ಗ್ರಾಮದಲ್ಲಿ ಕೈಗೊಂಡ ಗ್ರಾಮ ವಾಸ್ತವ್ಯದಿಂದಾಗಿ, ಗ್ರಾಮದಲ್ಲಿ ತ್ವರಿತಗತಿಯಲ್ಲಿ ಅಭಿವೃದ್ಧಿಯಾಗಲು ಸಾಧ್ಯವಾಯಿತು ಎಂದರು.
ಅಧಿಕಾರಿಗಳು ಪ್ರಾಮಾಣಿಕತೆ, ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಿದರೆ, ಏನೆಲ್ಲ ಸಾಧಿಸಬಹುದು ಎನ್ನುವುದಕ್ಕೆ ಈ ಗ್ರಾಮವೇ ಸಾಕ್ಷಿಯಾಗಿದೆ. ಹೀಗಾಗಿ ಈ ಗ್ರಾಮಕ್ಕೆ ಗ್ರಾಮಸ್ಥರೆ ಅಭಿಮಾನದಿಂದ ‘ಪ್ರಿಯಾ ನಗರ’ ಎಂದು ನಾಮಕರಣ ಮಾಡಿದ್ದಾರೆ. ಇನ್ನು ಮುಂದೆ ಕಂದಾಯ ಗ್ರಾಮವಾಗಿ ದಾಖಲೆಗಳಲ್ಲಿ ಕಾಳಘಟ್ಟ ಲಂಬಾಣಿ ಹಟ್ಟಿ, ‘ಪ್ರಿಯಾ ನಗರ’ ಆಗಲಿದೆ ಎಂದರು.
ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಡಿ 10 ಲಕ್ಷ ರೂ. ವೆಚ್ಚದಲ್ಲಿ ಸ್ಥಾಪಿಸಲಾದ ಶುದ್ಧ ಕುಡಿಯುವ ನೀರಿನ ಘಟಕವನ್ನು ಶಾಸಕ ಚಂದ್ರಪ್ಪ ಅವರು ಇದೇ ಸಂದರ್ಭದಲ್ಲಿ ಉದ್ಘಾಟನೆ ಮಾಡಿದರು. ಅಲ್ಲದೆ 10.80 ಲಕ್ಷ ರೂ. ವೆಚ್ಚದಲ್ಲಿ ಅಂಗನವಾಡಿ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.
ಅಪರ ಜಿಲ್ಲಾಧಿಕಾರಿ ಸಂಗಪ್ಪ ಅವರು ಮಾತನಾಡಿ, ಗ್ರಾಮಸ್ಥರು, ತಮ್ಮ ಗ್ರಾಮಗಳ ಅಭಿವೃದ್ಧಿಗೆ ಅಧಿಕಾರಿಗಳು, ಜನಪ್ರತಿನಿಧಿಗಳೊಂದಿಗೆ ಕೈಜೋಡಿಸಬೇಕು. ರಸ್ತೆ, ಕುಡಿಯುವ ನೀರು, ಶಿಕ್ಷಣ ಇವು ಮೂಲಭೂತ ಸೌಕರ್ಯಗಳಾಗಿದ್ದು, ಇವುಗಳನ್ನು ಪಡೆಯಲು ಗ್ರಾಮಗಳು ಮುಂದಾಗಬೇಕು. ಸರ್ಕಾರ ಜನರ ಶ್ರೇಯೋಭಿವೃದ್ಧಿಗಾಗಿಯೇ ಹತ್ತು ಹಲವು ಯೋಜನೆಗಳನ್ನು ರೂಪಿಸಿ, ಜಾರಿಗೊಳಿಸಿದ್ದು, ಈ ಯೋಜನೆಗಳನ್ನು ಅರ್ಹರು ಪಡೆದು, ಅಭಿವೃದ್ಧಿ ಕಂಡಾಗಲೇ ಯೋಜನೆಗಳು ಸಾರ್ಥಕತೆ ಪಡೆದುಕೊಳ್ಳುತ್ತವೆ ಎಂದರು.
ಮುಖಂಡರಾದ ಬಸವಂತಪ್ಪ ಅವರು ಕಾರ್ಯಕ್ರಮ ಕುರಿತು ಮಾತನಾಡಿದರು. ಉಪವಿಭಾಗಾಧಿಕಾರಿ ವಿಜಯಕುಮಾರ್, ಜಂಟಿಕೃಷಿ ನಿರ್ದೇಶಕ ಲಕ್ಷ್ಮಣ್ ಕಳ್ಳೆನವರ್, ಗ್ರಾ.ಪಂ. ಸದಸ್ಯೆ ಪುಷ್ಪಾವತಿ, ತಹಸಿಲ್ದಾರ್ ಕೆ. ನಾಗರಾಜ್, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ