ನವದೆಹಲಿ :
ಲೋಕಸಭೆಯ ವಿರೋಧಪಕ್ಷದ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ ಪೌರತ್ವ ಕುರಿತು ಸಿಬಿಐ ತನಿಖೆಗೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಇಂದು ವಿಚಾರಣೆ ನಡೆಸಲಿದೆ. ಭಾರತೀಯ ನ್ಯಾಯ ಸಂಹಿತೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲು ಕೇಂದ್ರೀಯ ತನಿಖಾ ದಳಕ್ಕೆ ನಿರ್ದೇಶನ ನೀಡುವಂತೆ ಅಲಹಾಬಾದ್ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಅವರ ಬ್ರಿಟಿಷ್ ಪೌರತ್ವದ ಬಗ್ಗೆ ವಿವರವಾದ ತನಿಖೆ ನಡೆಸುವಂತೆ ಮನವಿ ಮಾಡಲಾಗಿದೆ.
ಗಾಂಧಿ ಅವರು ಬ್ರಿಟಿಷ್ ಪೌರತ್ವವನ್ನು ಪಡೆದ ದಿನದಂದೇ ಅವರು ಭಾರತದ ಪ್ರಜೆಯಾಗಿರಲು ಅನರ್ಹರಾಗಿದ್ದರು ಎಂದು ಹೇಳಲಾಗಿದೆ. ಸಂಸದ ರಾಹುಲ್ ಗಾಂಧಿ ಭಾರತೀಯ ಪೌರತ್ವವನ್ನು ರದ್ದುಗೊಳಿಸುವಂತೆ ಕೋರಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಕೂಡ ದೆಹಲಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತೀಯ ಪೌರತ್ವವನ್ನು ರದ್ದುಗೊಳಿಸಬೇಕೆಂಬ ಬೇಡಿಕೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಂತೆ ಗೃಹ ಸಚಿವಾಲಯಕ್ಕೆ ನಿರ್ದೇಶನ ನೀಡಬೇಕು ಎಂದು ಸ್ವಾಮಿ ತಮ್ಮ ಅರ್ಜಿಯಲ್ಲಿ ಮನವಿ ಮಾಡಿದ್ದರು.