ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರು ದಿನಗಳ ಕಾಲ ರಾಷ್ಟ್ರ ರಾಜಧಾನಿ ನವದೆಹಲಿಗೆ ಭೇಟಿ ನೀಡುತ್ತಿದ್ದು, ಕರ್ನಾಟಕದಿಂದ ಚುನಾಯಿತ ಸಂಸದರು ಮತ್ತು ಕೇಂದ್ರ ಸಚಿವರು ಸೇರಿದಂತೆ ವಿವಿಧ ನಾಯಕರ ಭೇಟಿ ಮಾಡಿ ರಾಜ್ಯಕ್ಕೆ ಸಂಬಂಧಿಸಿದ ವಿವಿಧ ಯೋಜನೆಗಳು, ಅನುದಾನ ಕುರಿತು ಮಾತುಕತೆ ನಡೆಸುವ ನಿರೀಕ್ಷೆಗಳಿವೆ.
ಇಂದು ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಿಂದ ದೆಹಲಿಗೆ ತೆರಳಲಿರುವ ಸಿಎಂ, ಸಂಜೆ 6 ಗಂಟೆಗೆ ದೆಹಲಿಯಲ್ಲಿ ನಡೆಯಲಿರುವ ಸಂಸದರ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಬಾಕಿ ಅನುದಾದನ ವಿಚಾರವಾಗಿ ಸಂಸದರ ಜೊತೆ ಚರ್ಚಿಸಿ ಪ್ರಧಾನಿ ಮೋದಿ ಮೇಲೆ ಒತ್ತಡ ಹೇರುವ ಬಗ್ಗೆ ಚರ್ಚಿಸಲಿದ್ದಾರೆ.
ಇದೇ ವೇಳೆ ರಾಜ್ಯದಲ್ಲಿ ಮೂವರು ಹೆಚ್ಚುವರಿ ಡಿಸಿಎಂ ನೇಮಕದ ಕೂಗು ಕೇಳಿ ಬಂದಿರುವುದರಿಂದ ಸಿಎಂ ದೆಹಲಿ ಭೇಟಿ ಮಹತ್ವ ಪಡೆದುಕೊಂಡಿದೆ.
ಸತೀಶ್ ಜಾರಕಿಹೊಳಿ, ಡಾ.ಜಿ.ಪರಮೇಶ್ವರ, ಜಮೀರ್ ಅಹಮದ್, ಕೆ.ಎನ್.ರಾಜಣ್ಣ ಸೇರಿದಂತೆ ಇನ್ನೂ ಕೆಲವ ಸಚಿವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪಕ್ಷದ ಇತರ ಮುಖಂಡರ ಮೇಲೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಒತ್ತಡ ಹೇರುತ್ತಿದ್ದಾರೆನ್ನಲಾಗಿದೆ.
ಇನ್ನು, ರಾಜ್ಯದ ನೂತನ ಸಂಸದರು ಹಾಗೂ ರಾಜ್ಯದ ಕೇಂದ್ರ ಸಚಿವರ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ, ಪ್ರಹ್ಲಾದ್ ಜೋಷಿ, ಶೋಭಾ ಕರಂದ್ಲಾಜೆ, ವಿ ಸೋಮಣ್ಣ ಸೇರಿ ಉಭಯ ಪಕ್ಷಗಳ 28 ಸಂಸದರ ಜೊತೆ ಸಭೆಗೆ ಆಹ್ವಾನಿಸಲಾಗಿದೆ.
ಸಭೆಯಲ್ಲಿ ರಾಜ್ಯದ ನೀರಾವರಿ ಯೋಜನೆಯಾದ ಮಹಾದಾಯಿ, ಕೃಷ್ಣಾ, ಭದ್ರಾ ಮೇಲ್ದಂಡೆ ಯೋಜನೆ, ಮೇಕೆದಾಟು ಯೋಜನೆ ಮತ್ತು ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆಗಳಿವೆ.
ಸಂಜೆ ದೆಹಲಿಯಲ್ಲಿ ನಡೆಯುವ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಡಿಸಿಎಂ ಡಿಕೆ ಶಿವಕುಮಾರ್ ಮುಖಾಮುಖಿ ಆಗಲಿದ್ದಾರೆ. ವಿಧಾನಸಭೆ ಚುನಾವಣೆಗೂ ಮುನ್ನ ಡಿಕೆ ಶಿವಕುಮಾರ್ ಹಾಗೂ ಎಚ್.ಡಿ.ಕುಮಾರಸ್ವಾಮಿ ನಡುವೆ ಒಕ್ಕಲಿಗ ಸಮರ ಏರ್ಪಟ್ಟಿತ್ತು. ಅಲ್ಲದೇ, ಒಬ್ಬರಿಗೊಬ್ಬರು ಏಕ ವಚನದಲ್ಲೇ ವಾಗ್ದಾಳಿ ಮಾಡಿಕೊಂಡಿದ್ದರು. ಸಿದ್ದರಾಮಯ್ಯ ಕೂಡ ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.
ಇನ್ನು, ವರುಣಾ ಸೋಲಿನ ಬಳಿಕ ಲೋಕಸಭಾ ಚುನಾವಣೆಯಲ್ಲಿ ಸಂಸದರಾಗಿ ಆಯ್ಕೆಯಾಗಿ ಕೇಂದ್ರದಲ್ಲಿ ಸಚಿವರಾಗಿರುವ ವಿ.ಸೋಮಣ್ಣ ಕೂಡ ಇಂದಿನ ಸಭೆಯಲ್ಲಿ ಸಿದ್ದರಾಮಯ್ಯ ಜೊತೆ ಪಾಲ್ಗೊಳ್ಳುತ್ತಿರುವುದು ವಿಶೇಷವಾಗಿದೆ.