ಬೆಂಗಳೂರು
7ನೇ ವೇತನ ಆಯೋಗ ರಚನೆ ಮಾಡಿ ಅದರ ವರದಿ ಅನುಷ್ಠಾನಕ್ಕೆ ಹಿಂದೆ ಮುಂದೆ ಮಾಡುತ್ತಾ ಬಂದಿದ್ದ ಸರ್ಕಾರ ಮಾರ್ಚ್ 1 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವ ಸರ್ಕಾರಿ ನೌಕರರನ್ನು ಸಮಾಧಾನಪಡಿಸುವ ಪ್ರಯತ್ನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಡಿದ್ದಾರೆ.
ಈ ಮೂಲಕ 7 ನೇ ವೇತನ ಆಯೋಗದ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮಾರ್ಚ್ ಒಳಗೆ ಮಧ್ಯಂತರ ವರದಿಯನ್ನು ತರಿಸಿಕೊಂಡು ಪರಿಶೀಲನೆ ಮಾಡುತ್ತೇವೆ ಎಂದು ಸಿಎಂ ತಿಳಿಸಿದ್ದಾರೆ.
ಈ ವಿಚಾರವಾಗಿ ಇಂದು ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ‘7 ನೇ ವೇತನ ಆಯೋಗದ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸುಧಾಕರ್ ರಾವ್ ನೇತೃತ್ವದ ವೇತನ ಆಯೋಗದ ಮಧ್ಯಂತರ ವರದಿಯನ್ನು ಕೇಳಲಿದ್ದೇನೆ. ಈ ವರದಿ ಸಲ್ಲಿಕೆಯಾದ ಬಳಿಕ ಅದರ ಆಧಾರದ ಮೇಲೆ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಿದ್ದೇವೆ’ ಎಂದು ತಿಳಿಸಿದ್ದಾರೆ.
7ನೇ ವೇತನ ಆಯೋಗ ಜಾರಿಗೊಳಿಸುವಂತೆ ಒತ್ತಾಯಿಸಿ ಹೋರಾಟ ನಡೆಸಲು ರಾಜ್ಯ ಸರಕಾರಿ ನೌಕರರು ನಿರ್ಧರಿಸಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧೀನದಲ್ಲಿರುವ ಸಿಬ್ಬಂದಿ ಇತ್ತೀಚೆಗೆ ತಮ್ಮ ವೇತನ ಮತ್ತು ಭತ್ಯೆಗಳನ್ನು ಪರಿಷ್ಕರಿಸಲು ಕೋರಿ 65 ಪುಟಗಳ ವರದಿಯನ್ನು ಸಲ್ಲಿಸಿದ್ದಾರೆ.