ಬೆಂಗಳೂರು:
ಕರ್ನಾಟಕ ಮಾದರಿ ಆಡಳಿತ ಎಂದು ಹೇಳಿಕೊಂಡು ಬರುತ್ತಿದ್ದ ಕಾಂಗ್ರೆಸ್ ಹೈಕಮಾಂಡ್ ಗೆ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಇತ್ತೀಚೆಗಿನ ಬೆಳವಣಿಗೆಗಳು ದೊಡ್ಡ ಮುಜುಗರ ತಂದಿದ್ದು ಸುಳ್ಳಲ್ಲ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಕಳೆದ ರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ದೆಹಲಿಗೆ ಕರೆಸಿಕೊಂಡು ಮಾತನಾಡಿ ಎಚ್ಚರಿಕೆಯ ಮಾತುಗಳನ್ನಾಡಿದ್ದಾರೆ ಎಂದು ತಿಳಿದುಬಂದಿದೆ.
ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ದೆಹಲಿಯಲ್ಲಿ ಪಕ್ಷದ ಪ್ರಮುಖರನ್ನು ನಿನ್ನೆ ರಾತ್ರಿ ಭೇಟಿ ಮಾಡಿದ್ದಾರೆ. ಎಸ್‌ಟಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣ ಹಾಗೂ ಮುಡಾದಿಂದ ನಿವೇಶನ ಹಂಚಿಕೆಯಲ್ಲಿ ನಡೆದಿರುವ ಅವ್ಯವಹಾರದಲ್ಲಿ ಯಾವುದೇ ಪಾತ್ರ ಇಲ್ಲದಿದ್ದರೂ ವಿರೋಧ ಪಕ್ಷಗಳು ನನ್ನ ಹಾಗೂ ತಮ್ಮ ಸಂಪುಟದ ಸಚಿವರನ್ನು ಗುರಿಯಾಗಿಸಿವೆ ಎಂದು ಸಿದ್ದರಾಮಯ್ಯ ಹೈಕಮಾಂಡ್ ಗೆ ವಿವರಿಸಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರೊಂದಿಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಪಕ್ಷದ ನಾಯಕರಾದ ಕೆಸಿ ವೇಣುಗೋಪಾಲ್ ಮತ್ತು ರಂದೀಪ್ ಸಿಂಗ್ ಸುರ್ಜೇವಾಲಾ ಅವರೊಂದಿಗೆ ದೆಹಲಿಯ ಅವರ ನಿವಾಸದಲ್ಲಿ ಸಭೆ ನಡೆಸಿದರು.
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಇಂದು ಪಕ್ಷದ ಮುಖಂಡರು ಮತ್ತು ಕೆಲವು ಕೇಂದ್ರ ಸಚಿವರನ್ನು ಭೇಟಿ ಮಾಡುವ ನಿರೀಕ್ಷೆಯಿದೆ. ನಿನ್ನೆ ಭೇಟಿ ವೇಳೆ ವಿವಿಧ ವಿಷಯಗಳ ಕುರಿತು ಚರ್ಚಿಸಲಾಯಿತು. ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ನ ಸೇಡಿನ ರಾಜಕಾರಣದ ಬಗ್ಗೆ ಪಕ್ಷದ ಹೈಕಮಾಂಡ್‌ಗೆ ತಿಳಿಸಲಾಗಿದೆ. ಆಪಾದಿತ ಮುಡಾ ಮತ್ತು ಎಸ್ಟಿ ಕಾರ್ಪೊರೇಷನ್ ಹಗರಣಗಳ ಮೇಲೆ ನನ್ನನ್ನು ವೈಯಕ್ತಿಕವಾಗಿ ಗುರಿಯಾಗಿಸಿಕೊಂಡಿದ್ದಾರೆ ಎಂದು ನಾನು ಹೈಕಮಾಂಡ್ ಗೆ ಹೇಳಿದೆ. ಹೈಕಮಾಂಡ್ ಬೆಂಬಲಕ್ಕೆ ನಿಲ್ಲುತ್ತದೆ ಎಂಬ ವಿಶ್ವಾಸವಿದೆ ಎಂದು ಸಿಎಂ ಸಿದ್ದರಾಮಯ್ಯ ಭೇಟಿ ನಂತರ ಸುದ್ದಿಗಾರರಿಗೆ ತಿಳಿಸಿದರು.