ಗದಗ:
ರೋಣ ಶಾಸಕರಾದ ಜಿ.ಎಸ್.ಪಾಟೀಲರಿಗೆ ಸಚಿವ ಸ್ಥಾನ ನೀಡುವ ಸುಳಿವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ್ದು, ಇದರ ಬೆನ್ನಲ್ಲೇ ಇಷ್ಟು ದಿನ ತಣ್ಣಗಾಗಿದ್ದ ಸಂಪುಟ ಪುನಾರಚನೆ ವಿಚಾರ ಮತ್ತೆ ಸದ್ದು ಮಾಡಲು ಆರಂಭಿಸಿದೆ.
ಗದಗ ಜಿಲ್ಲೆಯ ರೋಣ ವಿಧಾನಸಭಾ ಕ್ಷೇತ್ರದಲ್ಲಿ ಆಯೋಜಿಸಿದ್ದ 200 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ಹಾಗೂ ಸಿರಿಧಾನ್ಯ ಉತ್ಪನ್ನಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮುಖ್ಯಮಂತ್ರಿಗಳು ಮಾತನಾಡಿದರು. ಈ ವೇಳೆ ಶಾಸಕ ಜಿ.ಎಸ್.ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡುವ ಭರವಸೆಯನ್ನು ನೀಡಿದರು.
ಶಾಸಕರಾದ ಜಿ.ಎಸ್.ಪಾಟೀಲ್ ಅವರು ನನ್ನ ಬಳಿ ಬರುವುದು ರೋಣ ಮತ ಕ್ಷೇತ್ರದ ಅಭಿವೃದ್ಧಿ ವಿಚಾರಕ್ಕೆ ಮಾತ್ರ. ಮುಂದಿನ ಬಜೆಟ್‌ನಲ್ಲಿ ಈ ಕ್ಷೇತ್ರಕ್ಕೆ ಕೃಷಿ ಕಾಲೇಜು ನೀಡುವಂತೆ ಪಾಟೀಲರು ಒತ್ತಾಯಿಸಿದ್ದಾರೆ. ಜೊತೆಗೆ ಪಾಟೀಲರಿಗೆ ಸಚಿವ ಸ್ಥಾನ ನೀಡುವಂತೆ ಕ್ಷೇತ್ರದ ಜನತೆಯೂ ಒತ್ತಾಯಿಸಿದ್ದಾರೆ. ಜಿ.ಎಸ್.ಪಾಟೀಲರಿಗೆ ಮಂತ್ರಿ ಆಗುವ ಎಲ್ಲ ಅರ್ಹತೆಗಳಿವೆ. ಎರಡೂ ಬೇಡಿಕೆಗಳನ್ನು ಸಕಾರಾತ್ಮಕವಾಗಿ ಪರಿಶೀಲಿಸಲಾಗುವುದು ಎಂದು ಭರವಸೆ ನೀಡಿದರು.
ಕಾರ್ಯಕ್ರಮವೊಂದರ ವೇದಿಕೆಯಲ್ಲೇ ಮುಖ್ಯಮಂತ್ರಿಗಳು ಸಚಿವ ಸ್ಥಾನದ ಭರವಸೆ ನೀಡಿರುವ ಹಿನ್ನೆಲೆಯಲ್ಲಿ, ಸಚಿವ ಸಂಪುಟ ಪುನಾರಚನೆ ಕುರಿತು ಚರ್ಚೆಗಳು ಆರಂಭವಾಗಿವೆ.