ಸಿಎಂ ವಿರುದ್ದ ಪ್ರಾಸಿಕ್ಯೂಷನ್‌ ಅನುಮತಿ : ಅಧಿಕೃತ ನಿವಾಸದಲ್ಲಿ ಸಭೆ

ಬೆಂಗಳೂರು: 

   ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ಎಸಗಲಾಗಿದೆ ಎಂಬ ಆರೋಪದ ಮೇಲೆ ತಮ್ಮ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುತ್ತಿದ್ದಂತೆ ಇತ್ತ ಸಿಎಂ ಸಿದ್ದರಾಮಯ್ಯ ಮಂದಿನ ಕಾನೂನು ಹೋರಾಟದ ಬಗ್ಗೆ ಸಮಾಲೋಚನೆ ನಡೆಸುತ್ತಿದ್ದಾರೆ. ಪ್ರಾಸಿಕ್ಯೂಷನ್​ಗೆ ನೀಡಿರುವ ಆದೇಶದ ಅಧಿಕೃತ ಪ್ರತಿ ಇನ್ನಷ್ಟೇ ಸಿಎಂ ಕೈಗೆ ತಲುಪಬೇಕಿದೆ.

   ಸದ್ಯ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿರುವ ಕಾನೂನು ಆಯ್ಕೆಗಳ ಬಗ್ಗೆ ಸಮಾಲೋಚನೆ ನಡೆಸುತ್ತಿದ್ದಾರೆ. ಪ್ರಾಸಿಕ್ಯೂಷನ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಹೈಕೋರ್ಟ್ ಮೆಟ್ಟಿಲನ್ನೂ ಏರಬಹುದು. ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಕುರಿತಾಗಿ ಈಗಾಗಲೇ ಸಿಎಂ ಪರ ವಕೀಲರು ಸಿದ್ಧತೆ ನಡೆಸಿದ್ದಾರೆ. ಸೋಮವಾರ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡುವ ಸಾಧ್ಯತೆ ಇದೆ.

   ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಗುಪ್ತಚರ ಇಲಾಖೆ ಮುಖ್ಯಸ್ಥ ಶರತ್ ಚಂದ್ರ ಜೊತೆ ಸಿಎಂ ಚರ್ಚೆ ನಡೆಸುತ್ತಿದ್ದಾರೆ. ಪ್ರಾಸಿಕ್ಯೂಷನ್​ಗೆ​ ಅನುಮತಿ ನೀಡಿರುವ ಬಗ್ಗೆ ಹಾಗೂ ಮುಂದೆ ಕೈಗೊಳ್ಳಬೇಕಾದ ನಡೆಗಳ ಬಗ್ಗೆ ಕಾನೂನು ಸಲಹೆಗಾರ ಬಿ ಪೊನ್ನಣ್ಣ ಅವರ ಜೊತೆ ಕೂಡ ಸಮಾಲೋಚಿಸುತ್ತಿದ್ದಾರೆ. 

   ಸದ್ಯ, ರಾಜ್ಯಪಾಲರ ಆದೇಶದ ಅಧಿಕೃತ ಪ್ರತಿ ತಲುಪಿದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳುವ ಬಗ್ಗೆ ಸಿಎಂ ನಿರ್ಧಿರಿಸಿದ್ದಾರೆ ಎನ್ನಲಾಗಿದೆ. ಈ ವಿಚಾರವಾಗಿ ಕೆಲವು ದಿನಗಳ ಹಿಂದೆ ಕೂಡ ಕಾನೂನು ತಜ್ಞರ ಜತೆ ಸಿಎಂ ಸಮಾಲೋಚನೆ ನಡೆಸಿದ್ದರು ಎಂದು ತಿಳಿದುಬಂದಿದೆ.

   ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​​ಗೆ ಅನುಮತಿ ವಿಚಾರವಾಗಿ ಮುಖ್ಯ ಕಾರ್ಯದರ್ಶಿ ಶಾಲಿನ್ ರಜನೀಶ್​, ಎಸಿಎಸ್​ ಅತೀಕ್​ಗೆ ನೋಟಿಸ್​ ನೀಡಲಾಗಿದೆ. ರಾಜಭವನದಿಂದ ನೋಟಿಸ್ ರವಾನೆಯಾಗಿದೆ. ಮುಡಾ ಪ್ರಕರಣದ ಮೂವರು ದೂರುದಾರರಾದ ಟಿಜೆಅಬ್ರಹಾಂ, ಸ್ನೇಹಮಯಿ ಕೃಷ್ಣ ಹಾಗೂ ಪ್ರದೀಪ್​​​ಗೆ ನೋಟಿಸ್ ಜಾರಿ ಮಾಡಲಾಗಿದೆ. ಪ್ರದೀಪ್ ಈಗಾಗಲೇ ರಾಜಭವನದಲ್ಲಿ ನೋಟಿಸ್ ಸ್ವೀಕರಿಸಿ ತೆರಳಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link