ಬೆಂಗಳೂರು :
ರಾಜ್ಯದ ಚಿಕ್ಕಬಳ್ಳಾಪುರ ಮತ್ತು ಯಾದಗಿರಿಯಲ್ಲಿ ನೂತನ ವೈದ್ಯಕೀಯ ಕಾಲೇಜುಗಳನ್ನು ಇದೇ ತಿಂಗಳ 17ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದು, 600 ಕೋಟಿ ವೆಚ್ಚದ ಆರೋಗ್ಯ ವಿಶ್ವವಿದ್ಯಾನಿಲಯಕ್ಕೆ ಇದೇ ತಿಂಗಳು ಮುಖ್ಯಮಂತ್ರಿ ಚಾಲನೆ ನೀಡಲಿದ್ದಾರೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ರಾಮನಗರದಲ್ಲಿ ನೂತನವಾಗಿ 99 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ 375 ಹಾಸಿಗೆಗಳ ಜಿಲ್ಲಾಸ್ಪತ್ರೆ ಉದ್ಘಾಟಿಸಿ ಮಾತನಾಡಿದ ಅವರು, ಕೋವಿಡ್ ನಂತರ ಸರ್ಕಾರ ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಿದೆ. ರಾಮನಗರದ ನೂತನ ಜಿಲ್ಲಾಸ್ಪತ್ರೆಗೆ ಅಗತ್ಯ ಎಲ್ಲಾ ಸೌಲಭ್ಯಗಳನ್ನು ಮತ್ತು ವೈದ್ಯರನ್ನು ತ್ವರಿತವಾಗಿ ನೇಮಕ ಮಾಡಲಾಗುವುದು. ಹಳೆ ಜಿಲ್ಲಾಸ್ಪತ್ರೆಯ ಕಟ್ಟಡದಲ್ಲಿ 100 ಹಾಸಿಗೆಗಳ ತಾಯಿ ಮಗು ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗುವುದು ಎಂದರು.
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾತನಾಡಿ, ಸರ್ಕಾರಿ ಆಸ್ಪತ್ರೆಯ ವೈದ್ಯರುಗಳು ಸಾರ್ವಜನಿಕರೊಡನೆ ಸೌಜನ್ಯ ಹಾಗೂ ಜನಸ್ನೇಹಿಯಾಗಿರಬೇಕು ಎಂದು ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವ ಡಾ.ಆಶ್ವತ್ಥನಾರಾಯಣ ಮಾತನಾಡಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಗುಣಮಟ್ಟ ಹೆಚ್ಚಸುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕ್ರಮ ವಹಿಸಿದೆ. ಮಣಿಪಾಲ್ ಆಸ್ಪತ್ರೆ ಸಿಬ್ಬಂದಿ ಕರೆತಂದು ವಿಶೇಷ ಆಸಕ್ತಿ ವಹಿಸಿ ಆಸ್ಪತ್ರೆ ನಿರ್ಮಾಣ ಮಾಡಲಾಗಿದೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ