ಬೆಂಗಳೂರು:
ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನ ನಡೆಸಿದರೆ ದಂಗೆ ಏಳುವಂತೆ ಕರೆ ನೀಡಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಕರೆ ನೀಡಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಪಾಲರಿಗೆ ದೂರು ನೀಡಿದೆ.
ಸಂವಿಧಾನದ ಹೆಸರಿನಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿರುವ ಕುಮಾರ ಸ್ವಾಮಿ, ಸಂವಿಧಾನಬಾಹಿರ ಕೆಲಸಕ್ಕೆ ಜನರನ್ನು ಪ್ರಚೋದಿಸುವ ಕೆಲಸ ಮಾಡುತ್ತಿದ್ದಾರೆ. ಇದರಿಂದ ಸಂವಿಧಾನಿಕ ಬಿಕ್ಕಟ್ಟು ಸೃಷ್ಟಿಯಾಗಿದೆ ಎಂದು ಬಿಜೆಪಿ ಕಳವಳ ವ್ಯಕ್ತಪಡಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತಿತರರು ಸಹಿ ಮಾಡಿರುವ ಮನವಿ ಪತ್ರವನ್ನು ರಾಜ್ಯಪಾಲ ವಜೂಭಾಯಿ ವಾಲಾ ಅವರಿಗೆ ಸಲ್ಲಿಸಿದರು.
ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ, ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್, ಸಂಸದೆ ಶೋಭಾ ಕರಂದ್ಲಾಜೆ ಮತ್ತಿತರರು ನಿಯೋಗದಲ್ಲಿದ್ದರು.
ಮುಖ್ಯಮಂತ್ರಿ ಅವರು ಉದ್ದೇಶಪೂರ್ವಕವಾಗಿ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ. ಅವರ ಮೇಲೆ ಐಪಿಸಿ ಸೆಕ್ಷನ್ 121, 121 ಎ, 122, 123 ಮತ್ತು 124 ಎ ಅಡಿ ಕ್ರಮ ತೆಗೆದುಕೊಳ್ಳಬೇಕೆಂದು ನಿಯೋಗ ಒತ್ತಾಯಿಸಿದೆ.
ಜತೆಗೆ ಯುಡಿಯೂರಪ್ಪ ಅವರ ಮನೆಯ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಪುಂಡಾಟಿಕೆ ನಡೆಸಿದ್ದಾರೆ. ಅವರನ್ನು ತಡೆಯಲು ಪೊಲೀಸರು ವಿಫಲರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇದೆಯೋ ಇಲ್ಲವೋ ಎನ್ನುವ ಸಂದೇಹ ವ್ಯಕ್ತವಾಗಿದೆ ಎಂದು ಬಿಜೆಪಿ ನಾಯಕರು ಕಳವಳ ವ್ಯಕ್ತಪಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ