ಸರಕಾರಕ್ಕೆ ಕಾಂಗ್ರೆಸ್ ಸೈಕಲ್ ಜಾಥಾ ಬಿಸಿ

ಬೆಂಗಳೂರು :

     ಬಿಜೆಪಿ ಸರ್ಕಾರದ ಜನವಿರೋಧಿ ನೀತಿಗಳಿಂದಾಗಿ ದಿನೇ ದಿನೆ ಇಂಧನ ಹಾಗೂ ದಿನಬಳಕೆ ವಸ್ತುಗಳ ಬೆಲೆ ಗಗನಕ್ಕೇರುತ್ತಿರುವುದರ ವಿರುದ್ಧ ಸೈಕಲ್ ಜಾಥಾ ಮೂಲಕ ಕಾಂಗ್ರೆಸ್ ಪಕ್ಷದ ಮತ್ತೊಂದು ಸುತ್ತಿನ ಸಮರ ಸೋಮವಾರ ದಾಖಲಾಯಿತು.

     ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್ ನೇತೃತ್ವದಲ್ಲಿ ಶಾಸಕರು ಕಾಂಗ್ರೆಸ್ ಕಚೇರಿಯಿಂದ ವಿಧಾನಸೌಧದವರೆಗೆ ಸೈಕಲ್ ಜಾಥಾ ಮಾಡಿ, ಪ್ರತಿಭಟನೆ ನಡೆಸಿದರು.

     ಈ ಹಿಂದೆ ರಾಜ್ಯಾದ್ಯಂತ ಸೈಕಲ್ ಜಾಥಾ, 100 ನಾಟೌಟ್ ನಂತಹ ಕಾರ್ಯಕ್ರಮಗಳ ಮೂಲಕ ಜನರ ಪರವಾಗಿ ಬೀದಿಗಿಳಿದು ಹೋರಾಟ ಮಾಡಿದ್ದ ಕಾಂಗ್ರೆಸ್, ಕಳೆದ ವಾರ ವಿಧಾನ ಮಂಡಲ ಅಧಿವೇಶನದ ಮೊದಲ ದಿನ ಎತ್ತಿನಗಾಡಿ ಯಾತ್ರೆ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿತ್ತು.

      ಈ ಹೋರಾಟದ ಮುಂದುವರಿದ ಭಾಗವಾಗಿ ಇಂದು ಸೈಕಲ್ ಜಾಥಾ ನಡೆಸಿ ಸರ್ಕಾರಕ್ಕೆ ಕಾಂಗ್ರೆಸ್ ಮತ್ತೆ ಬಿಸಿ ಮುಟ್ಟಿಸಿದೆ. ಇಂತಹ ಹೋರಾಟ ಇಲ್ಲಿಗೇ ನಿಲ್ಲುವುದಿಲ್ಲ. ಬಂಡ ಬಿಜೆಪಿ ಸರ್ಕಾರ ಬೆಲೆ ಇಳಿಸಿ ಜನರ ಹೊರೆ ಕಡಿಮೆ ಮಾಡುವವರೆಗೂ ಮುಂದುವರಿಯಲಿದೆ ಎಂಬ ಸಂದೇಶ ರವಾನಿಸಿತು.

ವಿಧಾನಸೌಧಕ್ಕೆ ಆಗಮಿಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದು ಹೀಗೆ;

    ‘ಬಿಜೆಪಿ ಸರ್ಕಾರ ದಿನನಿತ್ಯ ಜನ ಸಾಮಾನ್ಯರ ಜೇಬಿಗೆ ಕತ್ತರಿ ಹಾಕುತ್ತಿದೆ. ಜನರ ಬದುಕು ದುಸ್ಥಿತಿಗೆ ತಲುಪಿದೆ. ಯಾರಿಗೂ ಸಂಬಳ ಹೆಚ್ಚಾಗಿಲ್ಲ. ಪಿಂಚಣಿ ಹೆಚ್ಚಾಗಿಲ್ಲ. ಕೋವಿಡ್ ಸಂದರ್ಭದಲ್ಲಿ ಯಾರಿಗೂ ಪರಿಹಾರ ಸಿಕ್ಕಿಲ್ಲ.

     ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಕಡಿಮೆ ಇರುವಾಗ ಅದರ ಲಾಭ ಮಾತ್ರ ಜನಸಾಮಾನ್ಯರಿಗೆ ಸಿಗುವಂತೆ ಮಾಡಿಲ್ಲ. ಪೆಟ್ರೋಲ್ ಬೆಲೆ 100 ರ ಗಡಿ ದಾಟಿದೆ, ಡೀಸೆಲ್ 94 ಆಗಿದೆ, ಅಡುಗೆ ಅನಿಲ 880 ರೂ. ಆಗಿದೆ. ಇದರಿಂದ ಇತರೆ ದಿನಬಳಕೆ ವಸ್ತುಗಳ ಬೆಲೆಯೂ ಹೆಚ್ಚಾಗಿದೆ.

ಪೆಟ್ರೋಲ್ ಬೆಲೆಯಲ್ಲಿ 25 ರೂ. ಡೀಸೆಲ್ ಬೆಲೆಯಲ್ಲಿ 20 ರೂ. ಹಾಗೂ ಅಡುಗೆ ಅನಿಲದ ಬೆಲೆ 150 ರೂ. ಕಡಿಮೆ ಮಾಡಿ ಎಂದು ಸರ್ಕಾರಕ್ಕೆ ಆಗ್ರಹಿಸುತ್ತಿದ್ದೇವೆ. ಜನಸಾಮಾನ್ಯರು ಬೆಲೆ ಏರಿಕೆಯಿಂದ ತಮ್ಮ ತಾಳಿ, ಒಡವೆ ಮಾರಿಕೊಂಡು ಜೀವನ ಮಾಡುವ ಸ್ಥಿತಿಗೆ ತಲುಪಿದ್ದಾರೆ.

ಕೋವಿಡ್ ಸಮಯದಲ್ಲಿ ಜನರ ಆಸ್ಪತ್ರೆ ಬಿಲ್ ನೀಡಲಿಲ್ಲ, ಸತ್ತವರ ಕುಟುಂಬಕ್ಕೆ ಪರಿಹಾರ ನೀಡಲಿಲ್ಲ. ಸತ್ತವರ ಕುಟುಂಬಕ್ಕೆ ಸಾಂತ್ವನ ಹೇಳಲಿಲ್ಲ, ಅವರಿಗೆ ಧೈರ್ಯ ತುಂಬಲಿಲ್ಲ.

ಸರ್ಕಾರದ ಈ ಜನವಿರೋಧಿ ನೀತಿ ವಿರೋಧಿಸಿ ನಾವಿಂದು ಈ ಪ್ರತಿಭಟನೆ ಮಾಡಿದ್ದೇವೆ. ಜನರ ಪರ ಧ್ವನಿ ಎತ್ತಲು ನಾವು ಮೊನ್ನೆ ಎತ್ತಿನ ಗಾಡಿಯಲ್ಲಿ ಸದನಕ್ಕೆ ಆಗಮಿಸಿದ್ದೆವು. ಇಂದು ಸೈಕಲ್ ಮೂಲಕ ಆಗಮಿಸಿದ್ದೇವೆ. ಸರ್ಕಾರ ಬೆಲೆ ಇಳಿಸಬೇಕು. ಇಲ್ಲದಿದ್ದರೆ ನಮ್ಮ ಹೋರಾಟ ಮುಂದುವರಿಯಲಿದೆ. ಜನರು ಕೂಡ ಈ ಕೆಟ್ಟ ಸರ್ಕಾರ ಕಿತ್ತೊಗೆಯಲು ಸಜ್ಜಾಗಬೇಕು ಎಂದು ಕರೆ ನೀಡುತ್ತೇನೆ ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link