ನವದೆಹಲಿ:
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಇಂದು(ಗುರುವಾರ) ರಾತ್ರಿ 10.15ರ ವೇಳೆಗೆ ವಿಧಿವಶರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.
ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ದಿಲ್ಲಿಯ ಏಮ್ಸ್‌ಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು. ವಿನಮ್ರತೆ, ಪಾಂಡಿತ್ಯದಿಂದ ಎಲ್ಲರ ಗೌರವಕ್ಕೆ ಪಾತ್ರರಾದ ಹಾಗೂ ಮಿತಭಾಷಿಯೂ ಆದ ಡಾ.ಮನಮೋಹನ್ ಸಿಂಗ್ ಅವರು 2004ರಿಂದ 2014ರವರೆಗೆ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು. ಈ ವರ್ಷದ ಆರಂಭದಲ್ಲಿ ರಾಜ್ಯಸಭೆಯಿಂದ ನಿವೃತ್ತರಾಗಿದ್ದರು.
1990ರಲ್ಲಿ ಆರ್ಥಿಕ ಸುಧಾರಣೆಗಳು, ಉದಾರೀಕರಣ ನೀತಿಗಳನ್ನು ಜಾರಿಗೆ ತರುವ ಮೂಲಕ ಭಾರತದ ಅರ್ಥ ವ್ಯವಸ್ಥೆಗೆ ಹೊಸ ದಿಕ್ಕು ತೋರಿದ ಶ್ರೇಯ ಸಿಂಗ್ ಅವರದು. ಪಿ.ವಿ.ನರಸಿಂಹರಾವ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಮನಮೋಹನ್ ಸಿಂಗ್ ಅವರು ಹಣಕಾಸು ಸಚಿವರಾಗಿದ್ದರು. ನಂತರ, 2004ರಿಂದ 2014ರ ವರೆಗೆ ಪ್ರಧಾನಿಯಾಗಿದ್ದರು. ಈ ಅವಧಿಯಲ್ಲಿ ವ್ಯಾಪಕ ಭ್ರಷ್ಟಾಚಾರ ಕುರಿತು ಕೇಳಿಬಂದಿದ್ದ ಆರೋಪಗಳ ಕುರಿತು ಕ್ರಮ ಕೈಗೊಳ್ಳಲಿಲ್ಲ ಎಂಬ ಟೀಕೆಗಳನ್ನು ಸಿಂಗ್ ಎದುರಿಸಿದ್ದರು.