ಬೆಂಗಳೂರು
ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ನಾಯಕರು ಬೆಂಗಳೂರಿನಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ಮುಂದುವರೆಸಿದ್ದು ಪೊಲೀಸರು ಕಾಂಗ್ರೆಸ್ ನಾಯಕರನ್ನು ಬಂಧಿಸಿ ನಂತರ ಬಿಡುಗಡೆ ಮಾಡಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ಕೆಪಿಸಿಸಿ ಕಚೇರಿ ಎದುರು ಧರಣಿ ನಡೆಸುತ್ತಿರುವ ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು, ‘ಕರ್ನಾಟಕಕ್ಕೆ BJP ಆಡಳಿತದ ಬಹುದೊಡ್ಡ ಕೊಡುಗೆಯೆಂದರೆ ‘ಕರಪ್ಶನ್ ಕ್ಯಾಪಿಟಲ್’ ಎಂಬ ಬಿರುದು. 40 ಪರ್ಸೆಂಟ್ ಕಮಿಷನ್ ಸರ್ಕಾರದ ಆಡಳಿತದಿಂದ ಅಧಿಕಾರಿಗಳು, ಗುತ್ತಿಗೆದಾರರು, ಜನಸಾಮಾನ್ಯರು ಬೇಸತ್ತಿದ್ದಾರೆ. ಭ್ರಷ್ಟ BJP ವಿರುದ್ಧ ಹೋರಾಡೋಣ ಬನ್ನಿ ಕೈಜೋಡಿಸಿ.
ಟ್ವೀಟ್ ಜೊತೆಗೆ ವಿಡಿಯೊವೊಂದನ್ನು ಹಂಚಿಕೊಂಡಿರುವ ಡಿಕೆ ಶಿವಕುಮಾರ್, ‘ಕರ್ನಾಟಕದ ಮಾನ ಮಾರ್ಯದೆಯನ್ನು ರಾಜ್ಯ ಬಿಜೆಪಿ ಸರ್ಕಾರ ರಾಷ್ಟ್ರ ಮಟ್ಟದಲ್ಲಿ ಹರಾಜು ಮಾಡಿದೆ. ಕರ್ನಾಟಕವನ್ನು ಭ್ರಷ್ಟಾಚಾರದ ರಾಜಧಾನಿಯನ್ನಾಗಿ ಬಿಜೆಪಿ ಮಾಡಿದೆ. ಭಾರತದ ಜನರು ಕರ್ನಾಟಕದ ಬಗ್ಗೆ ಮಾತನಾಡಿಕೊಳ್ಳುವಂತಹ ದುಸ್ಥಿತಿ ಎದುರಾಗಿದೆ. ಬಿಜೆಪಿ ಶಾಸಕ ಮಾಡಾಳ ವಿರುಪಾಕ್ಷಪ್ಪನವರ ಪುತ್ರ ಲಂಚ ಸ್ವೀಕರಿಸುತ್ತಿರುವಾಗಲೇ ಸಿಕ್ಕಿಬಿದ್ದಿದ್ದಾರೆ. ಲೋಕಾಯುಕ್ತ ಪೊಲೀಸರು ಆತನ ತನಿಖೆ ಆರಂಭಿಸಿದ್ದಾರೆ. ರಾಜ್ಯ ಬಿಜೆಪಿಯ ಭ್ರಷ್ಟಾಚಾರಕ್ಕೆ ಇದು ಸಾಕ್ಷಿ’ ಎಂದು ವಾಗ್ದಾಳಿ ನಡೆಸಿದ್ದಾರೆ.