ಸಂವಿಧಾನ ಇಲ್ಲದ ಪ್ರಜಾಪ್ರಭುತ್ವ, ಆತ್ಮ ಇಲ್ಲದ ಜೀವ : ಸಿಎಂ

ಬೆಂಗಳೂರು:

    ಸಂವಿಧಾನವನ್ನು ನಾವು ರಕ್ಷಿಸಿದರೆ, ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ. ಸಂವಿಧಾನವನ್ನು ಅರಿಯುವ ಮೂಲಕ ಸಂವಿಧಾನವನ್ನು ಬಲಪಡಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

    ನಾಡಿನಲ್ಲಿ 75ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ, ಮಹಾತ್ಮಾ ಗಾಂಧೀಜಿ ಹಾಗೂ ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಗೌರವ ನಮನ ಸಲ್ಲಿಸಿದರು. ಬಳಿಕ ರಾಜ್ಯದ ಜನತೆಗೆ ಗಣರಾಜ್ಯೋತ್ಸವ ಜನತೆಗೆ ಶುಭಾಶಯಗಳನ್ನು ಕೋರಿದರು.

    ಈ ನಡುವೆ ಸಾಮಾಜಿಕ ಜಾಲತಾಣ ಎಕ್ಸ್  ನಲ್ಲಿ ಪೋಸ್ಟ್ ಮಾಡಿ ಗಣರಾಜ್ಯೋತ್ಸವದ ಸಂದೇಶವನ್ನು ನೀಡಿರುವ ಅವರು, ಭಾರತವು ತನ್ನನ್ನು ತಾನು ಆಳಿಕೊಳ್ಳಲು ರಚಿಸಿಕೊಂಡ ಸಂವಿಧಾನ ಜಾರಿಗೆ ಬಂದು 2024ರ ಜನವರಿ 26ಕ್ಕೆ 75 ವರ್ಷಗಳು ತುಂಬುತ್ತಿದೆ. ಭಾರತದ ಎಲ್ಲ ನಾಗರಿಕರಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು, ಚಿಂತನೆ, ಅಭಿವ್ಯಕ್ತಿ ನಂಬಿಕೆ ಮತ್ತು ಆರಾಧನೆಯ ಸ್ವಾತಂತ್ರ್ಯವನ್ನು, ಸ್ಥಾನಮಾನ ಮತ್ತು ಅವಕಾಶಗಳಲ್ಲಿ ಸಮಾನತೆಯನ್ನು ಖಾತರಿಪಡಿಸಿ, ಎಲ್ಲರ ನಡುವೆ ಭ್ರಾತೃತ್ವವನ್ನು ಉದ್ದೀಪನಗೊಳಿಸುವುದೇ ಸಂವಿಧಾನದ ಮೂಲ ಆಶಯವಾಗಿದೆ.

   ವಿಶ್ವಕ್ಕೆ ಮಾದರಿ ಸ್ವರೂಪದ ಇಂತಹದ್ದೊಂದು ಸಂವಿಧಾನವನ್ನು ನಮಗೆ ನೀಡಿದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಈ ಸಂದರ್ಭದಲ್ಲಿ ನೆನಪುಮಾಡಿಕೊಂಡು ಗೌರವ ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯ. ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು ಎಂದು ಹೇಳಿದ್ದಾರೆ.

   ಸಂವಿಧಾನವೇ ನಮ್ಮ ಧರ್ಮ ಮತ್ತು ಸಂವಿಧಾನದ ಆಶಯಗಳನ್ನು ಸಾಕಾರಗೊಳಿಸುವುದೇ ನಮ್ಮ ರಾಜಧರ್ಮ’ ಎಂದು ತ್ರಿಕರಣಪೂರ್ವಕವಾಗಿ ನಂಬಿಕೊಂಡು ಬಂದಿರುವ ನಮ್ಮ ಸರ್ಕಾರ, ಜಾತಿ-ಧರ್ಮಗಳ ಭೇದವಿಲ್ಲದೆ ಸಂಪತ್ತು, ಅವಕಾಶ ಮತ್ತು ಅಧಿಕಾರದಲ್ಲಿ ಸರ್ವರಿಗೂ ಸಮಪಾಲು ಸಿಗಬೇಕೆಂಬ ಸರ್ವೋದಯದ ಉದಾತ್ತ ಉದ್ದೇಶವನ್ನು ಹೊಂದಿದೆ. ಸಂವಿಧಾನ ಎನ್ನುವುದು ಪ್ರಜಾಪ್ರಭುತ್ವದ ಆತ್ಮ. ಸಂವಿಧಾನ ಇಲ್ಲದ ಪ್ರಜಾಪ್ರಭುತ್ವ, ಆತ್ಮ ಇಲ್ಲದ ಜೀವ. ಇತ್ತೀಚೆಗೆ ಸಂವಿಧಾನ ಬದಲಾವಣೆಯ ಕೂಗು ಅಲ್ಲಲ್ಲಿ ಕೇಳಿಬರುತ್ತಿದೆ. ಇದನ್ನು ಪ್ರಜಾಪ್ರಭುತ್ವ ಪ್ರೇಮಿಗಳೆಲ್ಲರೂ ಒಕ್ಕೊರಲಿನಿಂದ ಖಂಡಿಸಬೇಕಾಗಿದೆ. ಈ ಖಂಡನೆಗೆ ನಾನೂ ದನಿಗೂಡಿಸುತ್ತೇನೆ

    ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬರಿಗೂ ಸಂವಿಧಾನದ ಬಗ್ಗೆ ಗೌರವ ಮತ್ತು ಅದರ ಆಶಯಗಳ ಬಗ್ಗೆ ಬದ್ಧತೆ ಇರಲೇಬೇಕು. ಸಂವಿಧಾನೇತರ ಶಕ್ತಿಗಳಗೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜಾಗ ಇಲ್ಲ. ಸಂವಿಧಾನದ ಬಗ್ಗೆ ಭಿನ್ನಾಭಿಪ್ರಾಯ ಇಟ್ಟುಕೊಂಡು ಸಂಸದೀಯ ಪ್ರಜಾಪ್ರಭುತ್ವದ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬಾರದು. ಇದು ಸಂವಿಧಾನಕ್ಕೆ ಮಾಡುವ ಅಪಚಾರ ಮಾತ್ರವಲ್ಲ, ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ ಕೂಡಾ ಹೌದು.

    ಇಂತಹವರನ್ನು ತಿರಸ್ಕರಿಸುವುದು ಪ್ರತಿಯೊಬ್ಬ ಪ್ರಜೆಯ ಧರ್ಮವಾಗಿದೆ. ಜಾತ್ಯತೀತತೆ ಸಂವಿಧಾನದ ಮುಖ್ಯ ಆಶಯಗಳಲ್ಲಿ ಒಂದು. ಇದು ಅನ್ಯಧರ್ಮವನ್ನು ದ್ವೇಷಿಸದೆ ಸ್ವಂತ ಧರ್ಮವನ್ನು ಪ್ರೀತಿಸುವ ಉದಾತ್ತ ಮಾನವೀಯ ಗುಣ. ಜಾತಿ, ಧರ್ಮವನ್ನು ಮೀರಿ `ಮನುಷ್ಯ ಜಾತಿ ತಾನೊಂದೆ ವಲಂ’ ಎಂಬ ಕವಿವಾಣಿ ಕೂಡಾ ಸಂವಿಧಾನದ ಈ ಆಶಯವನ್ನೇ ನೆನಪು ಮಾಡಿಕೊಡುತ್ತದೆ. ಧಾರ್ಮಿಕ ರಾಷ್ಟ್ರೀಯತೆಯ ಮೂಲಕ ದೇಶ ಕಟ್ಟಲು ಸಾಧ್ಯವಾಗದು. ಇದು ಬಹುಧರ್ಮ, ಬಹುಭಾಷೆ ಮತ್ತು ಬಹುಸಂಸ್ಕೃತಿಯನ್ನು ಪ್ರತಿಪಾದಿಸುವ ಪ್ರಜಾಪ್ರಭುತ್ವಕ್ಕೆ ಮಾರಕವಾದುದು. ಪ್ರಜಾಪ್ರಭುತ್ವವನ್ನು ನಂಬಿರುವ ಯಾರೂ ಇದನ್ನು ಒಪ್ಪಲು ಸಾಧ್ಯ ಇಲ್ಲ ಎಂದು ತಿಳಿಸಿದ್ದಾರೆ.

    ಸ್ವಾತಂತ್ರ್ಯ ಎನ್ನುವುದು ಕೇವಲ ರಾಜಕೀಯ ಕ್ಷೇತ್ರಕ್ಕೆ ಸೀಮಿತವಾದುಲ್ಲ, ಆರ್ಥಿಕ ಮತ್ತು ಸಾಮಾಜಿಕ ಸ್ವಾತಂತ್ರ್ಯ ಸಾಕ್ಷಾತ್ಕಾರಗೊಂಡಾಗ ಮಾತ್ರ ಪ್ರಜಾಪ್ರಭುತ್ವ. ಇದನ್ನೇ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಾಮಾಜಿಕ ಪ್ರಜಾಪ್ರಭುತ್ವ ಎಂದು ಹೇಳಿದ್ದು. ಸಂವಿಧಾನದ ಈ ಆಶಯವನ್ನು ಸಾಕಾರಗೊಳಿಸುವುದು ಚುನಾಯಿತ ಸರ್ಕಾರದ ಕರ್ತವ್ಯವಾಗಿದೆ. ನಮ್ಮ ಯೋಚನೆಗಳು ಮತ್ತು ಯೋಜನೆಗಳು ಸಂವಿಧಾನದ ಆಶಯಗಳೇ ಆಗಿವೆ. ನಮ್ಮ ಆಡಳಿತದ ‘ಕರ್ನಾಟಕ ಮಾದರಿ’ ಬಗ್ಗೆ ಇಡೀ ದೇಶ ಮಾತ್ರ ಅಲ್ಲ ವಿಶ್ವಶ್ರೇಷ್ಠ ಆರ್ಥಿಕ ತಜ್ಞರು ಕೂಡಾ ಮೆಚ್ಚುಗೆಯನ್ನು ವ್ಯಕ್ತಪಡಿಸುತ್ತಿದ್ದಾರೆ. ಇದು ಕನ್ನಡಿಗರೆಲ್ಲರಿಗೂ ಅಭಿಮಾನದ ಸಂಗತಿಯಾಗಿದೆ ಎಂದು ಹೇಳಿದ್ದಾರೆ.

     ಬಡತನ ಎನ್ನುವುದು ಅಪರಾಧ ಅಲ್ಲ. ಇದು ಸಂಪತ್ತು ಮತ್ತು ಅವಕಾಶಗಳ ಅಸಮಾನ ಹಂಚಿಕೆಯ ಫಲ ಎನ್ನುವುದನ್ನು ನಾವು ಮರೆಯಬಾರದು. ನಮ್ಮ ಸಂಪತ್ತು ಮತ್ತು ಅವಕಾಶದ ಸಮಾನ ಹಂಚಿಕೆಯಾದಾಗ ಮಾತ್ರ ಸಮೃದ್ಧ, ಬಲಿಷ್ಠ ಮತ್ತು ಕ್ರಿಯಾಶಾಲಿಯಾದ ಸಮಾಜ ನಿರ್ಮಾಣ ಸಾಧ್ಯ ಎನ್ನುವದನ್ನು ನಾನು ಬಲವಾಗಿ ನಂಬಿದ್ದೇನೆ. ಈ ನಂಬಿಕೆಯ ಆಧಾರದಲ್ಲಿಯೇ ಸಾರ್ವತ್ರಿಕ ಮೂಲ ಆದಾಯದ (Universal basic income ) ಪರಿಕಲ್ಪನೆಯಡಿ ರೂಪುಗೊಂಡದ್ದು ನಮ್ಮ ಪಂಚ ಗ್ಯಾರಂಟಿ ಯೋಜನೆಗಳು. ಇಂದು ಇಡೀ ದೇಶ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡುತ್ತಿವೆ.

    ಹಲವಾರು ರಾಜ್ಯಗಳು ಇದನ್ನು ಅನುಷ್ಠಾನಕ್ಕೆ ತರುತ್ತಿವೆ. ವಚನ ಭಂಗಕ್ಕಿಂತ ದೊಡ್ಡ ದೇಶದ್ರೋಹ ಮತ್ತೊಂದಿಲ್ಲ ಎಂದು ನಾನು ಬಲವಾಗಿ ನಂಬಿದವನು. ಇದು ನಮ್ಮ ಪಕ್ಷದ ಬದ್ಧತೆ ಕೂಡಾ ಆಗಿದೆ. ಭರವಸೆಗಳನ್ನು ನೀಡಿ ಚುನಾವಣೆಯಲ್ಲಿ ಗೆದ್ದು ಬಂದಿರುವ ನಮಗೆ ಅದನ್ನು ಉಳಿಸಿಕೊಳ್ಳುವ ಜವಾಬ್ದಾರಿಯೂ ಇದೆ. ಇದನ್ನು ನಾವು ಮರೆತಿಲ್ಲ. ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಗ್ಯಾರಂಟಿ ಯೋಜನೆಗಳ ಭರವಸೆಯ ಈಡೇರಿಕೆಗೆ ಮೊದಲ ಸಚಿವ ಸಂಪುಟದಲ್ಲಿಯೇ ತಾತ್ವಿಕ ಅಂಗಿಕಾರ ಪಡೆದು ಜಾರಿ ಪ್ರಕ್ರಿಯೆಗೆ ಚಾಲನೆ ನೀಡಿದ್ದೆವು.

    ಇದರ ಫಲವಾಗಿ ಇಂದು ಐದು ಗ್ಯಾರಂಟಿ ಯೋಜನೆಗಳು ಅನುಷ್ಠಾನಗೊಂಡಿವೆ ಎನ್ನುವುದನ್ನು ನಿಮ್ಮ ಮುಂದೆ ಹೇಳಲು ಹೆಮ್ಮೆ ಪಡುತ್ತೇನೆ. ದೇಶದ ಯಾವುದೇ ರಾಜ್ಯ ಸರ್ಕಾರ ಕೂಡಾ ಇಂತಹದ್ದೊಂದ ಸಾಧನೆ ಮಾಡಿಲ್ಲ ಎನ್ನುವುದನ್ನು ವಿಶ್ವಾಸಪೂರ್ವಕವಾಗಿ ಹೇಳಬಲ್ಲೆ. ಇದು ರಾಜ್ಯದ ಜನತೆ ನಮ್ಮ ಸರ್ಕಾರಕ್ಕೆ ಕೊಟ್ಟಿರುವ ಶಕ್ತಿ ಎನ್ನುವುದನ್ನು ನಾವು ಮರೆತಿಲ್ಲ ಎಂದಿದ್ದಾರೆ.

    ಗ್ಯಾರಂಟಿ ಯೋಜನೆಗಳ ಜೊತೆಯಲ್ಲಿ ನಮ್ಮ ಸರ್ಕಾರದ ಅನ್ನಭಾಗ್ಯ, ಕ್ಷೀರಭಾಗ್ಯ, ಕ್ಷೀರಧಾರೆ, ಕೃಷಿಭಾಗ್ಯ, ಪಶುಭಾಗ್ಯ, ಋಣಮುಕ್ತಭಾಗ್ಯ, ವಿದ್ಯಾಸಿರಿ, ಆರೋಗ್ಯಭಾಗ್ಯ, ಜಲಭಾಗ್ಯ ಕಾರ್ಯಕ್ರಮಗಳು ಕೂಡಾ ಯಶಸ್ವಿಯಾಗಿ ಜಾರಿಯಲ್ಲಿದೆ. ಇವೆಲ್ಲ ಯೋಜನೆಗಳು ದುಡಿಯುವ ಕೈಗಳನ್ನು ಇನ್ನಷ್ಟು ಬಲಪಡಿಸಿ ಅವುಗಳು ರಾಜ್ಯದ ಅಭಿವೃದ್ಧಿಗೆ ಬಳಕೆಯಾಗುವಂತೆ ಮಾಡುವ ಕಾರ್ಯಕ್ರಮಗಳು. ಗ್ಯಾರಂಟಿ ಯೋಜನೆಗಳಿಂದ ರಾಜ್ಯದ 1.2 ಕೋಟಿ ಕುಟುಂಬಗಳಿಗೆ ವಾರ್ಷಿಕ 50 ರಿಂದ 60 ಸಾವಿರ ರೂ.ಗಳ ಆರ್ಥಿಕ ಸಹಾಯ ದೊರೆಯುತ್ತಿದೆ.

    ಅಧಿಕಾರಕ್ಕೆ ಬಂದ ಕೂಡಲೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಮಾಡಲು ಅನುವು ಮಾಡಿಕೊಟ್ಟ ಶಕ್ತಿ ಯೋಜನೆ ಅಭೂತಪೂರ್ವ ಜನಮನ್ನಣೆಗೆ ಪಾತ್ರವಾಗಿದೆ. ಮಹಿಳೆಯರು 138 ಕೋಟಿ ಬಾರಿ ಶಕ್ತಿ ಯೋಜನೆಯ ಮೂಲಕ ಉಚಿತವಾಗಿ ಪ್ರಯಾಣಿಸಿದ್ದಾರೆ. 1.18 ಕೋಟಿ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯಡಿ ಮಾಸಿಕ 2,000 ರೂ.ಗಳ ನೆರವು ನೀಡಲಾಗುತ್ತಿದ್ದು, ಗೃಹಜ್ಯೋತಿ ಯೋಜನೆಯಡಿ 1.51 ಕೋಟಿ ಜನರಿಗೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ.

   ಯುವನಿಧಿ ಯೋಜನೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದ್ದು, ಸುಮಾರು ಒಂದು ಲಕ್ಷ ಯುವಕ ಯುವತಿಯರು ಯೋಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ. ನಿರುದ್ಯೋಗ ಭತ್ಯೆಯನ್ನು ಪಡೆಯುವ ಅಭ್ಯರ್ಥಿಗಳು ಅನೇಕ ಸ್ಪರ್ಧಾತ್ಮಕ ಪರೀಕ್ಷಾ ಶುಲ್ಕವನ್ನು ಭರಿಸಲು, ಉತ್ತಮ ಪುಸ್ತಕಗಳನ್ನು ಖರೀದಿಸಿ ಅಧ್ಯಯನ ಮಾಡಲು, ಉದ್ಯೋಗ ಸಂದರ್ಶನಕ್ಕೆ ತೆರಳುವ ವೆಚ್ಚಕ್ಕೆ, ಉದ್ಯಮಶೀಲತೆ ತರಬೇತಿ ಪಡೆಯುವ ಮತ್ತು ವ್ಯಕ್ತಿತ್ವ ರೂಪಿಸಿಕೊಳ್ಳಲು ಬಳಸಲೆಂದೇ ಈ ಯೋಜನೆ ಜಾರಿಯಾಗಿದೆ ಎಂದಿದ್ದಾರೆ.

    ಯುವನಿಧಿಯ ಫಲಾನುಭವಿ ಯುವಜನರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡುವ ಮೂಲಕ ಅವರಿಗೆ ಉತ್ತಮ ಉದ್ಯೋಗಾವಕಾಶ ಕಲ್ಪಿಸಲು ಸಹ ನಮ್ಮ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ವಿರೋಧಿಗಳಿಂದ ವ್ಯಕ್ತವಾದ ಟೀಕೆ-ಟಿಪ್ಪಣಿ, ಅನುಮಾನ-ಆತಂಕಗಳನ್ನು ನಾವು ಗಮನಿಸಿದ್ದೇವೆ. ನಮ್ಮ ಸರ್ಕಾರ ದಿವಾಳಿಯಾಗಲಿದೆ ಎಂಬ ಅಪಪ್ರಚಾರವನ್ನು ಮಾಡಿದ್ದಾರೆ.

   ಇಂತಹವರೆಲ್ಲರಿಗೂ ನಮ್ಮ ಯೋಜನೆಗಳ ಫಲಾನುಭವಿಗಳೇ ದಿಟ್ಟತನದಿಂದ ಉತ್ತರ ನೀಡಬೇಕೆಂದು ನಾನು ಮನವಿ ಮಾಡುತ್ತೇನೆ. ನಾವು ಮಾತುಗಾರರಲ್ಲ, ಕೆಲಸಗಾರರು. ಚುನಾವಣೆಯ ಪೂರ್ವದಲ್ಲಿ ಭರವಸೆ ನೀಡಿದ್ದಂತೆ ಕರ್ನಾಟಕ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ (ಕೆಲವು ಭೂಮಿಗಳ ವರ್ಗಾವಣೆಯ ನಿಷೇಧ (ತಿದ್ದುಪಡಿ) ವಿಧೇಯಕಕ್ಕೆ ಮೊದಲ ಅಧಿವೇಶನದಲ್ಲಿಯೇ ಮಂಡಿಸಿ ಒಪ್ಪಿಗೆ ಪಡೆಯಲಾಗಿದೆ. ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಜಮೀನು ಪರಭಾರೆ ನಿಷೇಧ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಈ ಸಮುದಾಯಗಳ ಭೂ-ಒಡೆತನದ ಹಕ್ಕನ್ನು ಖಾತರಿಪಡಿಸಿದ್ದೇವೆ ಎಂದು ಹೇಳಿದ್ದಾರೆ.

    ಎಸ್.ಸಿ.ಎಸ್.ಪಿ/ಟಿ.ಎಸ್ಪಿ ಅಧಿನಿಯಮ 2013ರಡಿ ಹಂಚಿಕೆಯಾಗುವ ಅನುದಾನ ಆ ಸಮುದಾಯಗಳಿಗೇ ಬಳಕೆಯಾಗಬೇಕೆನ್ನುವುದು ಸರ್ಕಾರದ ಆಶಯ. ಈ ಬಗ್ಗೆ ದಲಿತ ಸಮುದಾಯಗಳ ದೀರ್ಘಕಾಲದ ಮನವಿಗೆ ಸರ್ಕಾರ ಸ್ಪಂದಿಸಿ ಕಾಯ್ದೆಯ ಕಲಂ 7 (ಡಿ) ಅನ್ನು ಕೈಬಿಡಲಾಗಿದೆ. ಹಿಂದುಳಿದ ಪ್ರವರ್ಗ-1 ಮತ್ತು ಪ್ರವರ್ಗ-2ಎ ಗಳಲ್ಲಿನ ಜಾತಿಗಳ ಜನರಿಗೆ ಕಾಮಗಾರಿಗಳ ಗುತ್ತಿಗೆಯಲ್ಲಿ 1 ಕೋಟಿ ರೂ.ಗಳವರೆಗೆ ಮೀಸಲಾತಿ ನೀಡಲಾಗಿದೆ. ಇದು ಸಾಮಾಜಿಕ ನ್ಯಾಯದ ಬಂಡಿ ಮೇಲೆ ಅಭಿವೃದ್ದಿಯ ರಥವನ್ನು ಮುಂದಕ್ಕೆ ಒಯ್ಯುವ ನಮ್ಮ ಪ್ರಯತ್ನವಾಗಿದೆ.

    ಈ ಬಾರಿ ಹವಾಮಾನ ವೈಪರೀತ್ಯ, ಮಳೆಯ ತೀವ್ರ ಕೊರತೆಯಿಂದಾಗಿ, 236 ರಲ್ಲಿ 223 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ.

    ಜನರಿಗೆ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವು ಕೊರತೆಯಾಗದಂತೆ ಬರಗಾಲವನ್ನು ನಮ್ಮ ಸರ್ಕಾರ ಯಶಸ್ವಿಯಾಗಿ ನಿಭಾಯಿಸುತ್ತಿದೆ. ನಮ್ಮ ನಿರಂತರ ಪ್ರಯತ್ನದ ಹೊರತಾಗಿಯೂ ಬರಪರಿಹಾರದ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸದೆ ಬಿಡಿಗಾಸನ್ನೂ ನೀಡದಿರುವುದನ್ನು ವಿಷಾದದಿಂದ ಹೇಳಬೇಕಾಗಿದೆ.

    ರಾಜ್ಯ ಸರ್ಕಾರವೇ ಬರದಿಂದ ಬಾಧಿತರಾದವರಿಗೆ ಬೆಳೆ ಪರಿಹಾರವಾಗಿ 2000 ರೂ.ಗಳ ವರೆಗಿನ ತಾತ್ಕಾಲಿಕ ಪರಿಹಾರದ ಘೋಷಣೆಯನ್ನು ಮಾಡಿದ್ದು, ಈವರೆಗೆ 550 ಕೋಟಿ ರೂ.ಗಳನ್ನು ರೈತರ ಖಾತೆಗೆ ಜಮೆ ಮಾಡಲಾಗಿದೆ. ವಾರದೊಳಗೆ ಮೊದಲ ಕಂತಿನ ಪರಿಹಾರ ರೈತರಿಗೆ ತಲುಪಿಸಲಾಗುವ ವ್ಯವಸ್ಥೆಯಾಗುತ್ತಿದೆ.

   ರೈತರು ಸಹಕಾರಿ ಬ್ಯಾಂಕುಗಳಿಂದ ಪಡೆದಿರುವ ಮಧ್ಯಮಾವಧಿ ಹಾಗೂ ದೀರ್ಘಾವಧಿ ಸಾಲಗಳ ಅಸಲು ಪಾವತಿಸಿದಲ್ಲಿ ಬಡ್ಡಿ ಮನ್ನಾ ಮಾಡಲು ನಮ್ಮ ಸರ್ಕಾರ ಆದೇಶ ಹೊರಡಿಸಿದೆ. ಕೊಬ್ಬರಿ ಬೆಲೆ ಕುಸಿತಗೊಂಡು ಸಂಕಷ್ಟದಲ್ಲಿರುವ ರೈತರಿಗೆ ನೆರವಾಗುವ ಉದ್ದೇಶದಿಂದ ಪ್ರತಿ ಕ್ವಿಂಟಾಲ್ ಕೊಬ್ಬರಿಗೆ 1500 ರೂಗಳ ನೆರವನ್ನು ರಾಜ್ಯ ಸರ್ಕಾರವೆ ನೀಡುತ್ತಿದೆ. ನೆಟೆ ರೋಗದಿಂದ ಬಾಧಿತರಾದ ತೊಗರಿ ಬೆಳೆಗಾರರಿಗೆ 223 ಕೋಟಿ ರೂಪಾಯಿ ಪರಿಹಾರ ನೀಡಿದ್ದೇವೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap