ಬೆಂಗಳೂರು:
ಜನವರಿ 07; ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರದ ಬಿಜೆಪಿ ಶಾಸಕ, ಕಂದಾಯ ಸಚಿವ ಆರ್. ಅಶೋಕಗೆಕೋವಿಡ್ಸೋಂಕು ತಗುಲಿದೆ.
ನಗರದ ಖಾಸಗಿ ಆಸ್ಪತ್ರೆಗೆ ಅವರು ದಾಖಲಾಗಿದ್ದಾರೆ.
ಕೋವಿಡ್ ಸೋಂಕು ತಗುಲಿರುವ ಸಚಿವ ಆರ್. ಅಶೋಕ ಶುಕ್ರವಾರ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.
ಎರಡು ದಿನದಿಂದ ಅಶೋಕ ಹಲವಾರು ಕಾರ್ಯಕ್ರಮ, ಸಭೆಗಳಲ್ಲಿ ಪಾಲ್ಗೊಂಡಿದ್ದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಜೊತೆ ಹಲವು ಕಾರ್ಯಕ್ರಮಗಳಲ್ಲಿ ವೇದಿಕೆ ಹಂಚಿಕೊಂಡಿದ್ದರು.
ಬೆಂಗಳೂರು ಮತ್ತು ಕರ್ನಾಟಕದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಜನವರಿ 6ರಂದು 107 ಹೊಸ ಓಮಿಕ್ರಾನ್ ಪ್ರಕರಣಗಳು ದಾಖಲಾಗಿವೆ. ರಾಜ್ಯದ ಒಟ್ಟು ಓಮಿಕ್ರಾನ್ ಪ್ರಕರಣಗಳ ಸಂಖ್ಯೆ 333ಕ್ಕೆ ಏರಿಕೆಯಾಗಿದೆ.
ಕರ್ನಾಟಕದಲ್ಲಿ ಗುರುವಾರ 5031 ಹೊಸ ಕೋವಿಡ್ ಪ್ರಕರಣ ದಾಖಲಾಗಿತ್ತು. ಇದರಲ್ಲಿ ಬೆಂಗಳೂರು ನಗರದಲ್ಲಿಯೇ 4,324 ಪ್ರಕರಣ ಪತ್ತೆಯಾಗಿತ್ತು. ರಾಜ್ಯದ ಪಾಸಿಟಿವಿಟಿ ದರ ಶೇ 3.95 ಆಗಿದೆ.
ಕರ್ನಾಟಕದಲ್ಲಿ ಕೋವಿಡ್ ಸೋಂಕು ಹರಡುವಿಕೆ ತಡೆಯಲು ಹಲವಾರು ನಿರ್ಬಂಧಗಳನ್ನು ಜಾರಿಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಶುಕ್ರವಾರ ರಾತ್ರಿ 10 ಗಂಟೆಯಿಂದ ವಾರಾಂತ್ಯದ ಕರ್ಫ್ಯೂ ಸಹ ಜಾರಿಗೆ ಬರುತ್ತಿದೆ.
ಮಂಗಳವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಜ್ಞರ ಜೊತೆ ಸುಧೀರ್ಘ ಸಭೆ ನಡೆಸಿದ್ದರು. ಸಭೆಯಲ್ಲಿ ಕಂದಾಯ ಸಚಿವ ಆರ್. ಅಶೋಕ ಸಹ ಪಾಲ್ಗೊಂಡಿದ್ದರು. ಸಭೆಯ ಬಳಿಕ ಅವರೇ ಕಠಿಣ ನಿಯಮಗಳ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದರು.
