ಫಿರೋಜಾಬಾದ್:
ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯ ಪಟಾಕಿಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿ, ಮೂರು ವರ್ಷದ ಬಾಲಕಿ, ಮಹಿಳೆ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಸೋಮವಾರ ರಾತ್ರಿ ಶಿಕೋಹಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ನೌಶೇರಾ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದಾರೆ. ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಟಾಕಿ ಸಂಗ್ರಹಿಸಿದ ಮನೆಯೊಂದರಲ್ಲಿ ಸ್ಫೋಟ ಸಂಭವಿಸಿದೆ. ಇದರಿಂದಾಗಿ ಮನೆ ಸಮೀಪದ ಮೇಲ್ಛಾವಣಿ ಕುಸಿದಿದೆ. ಪೊಲೀಸರು ಅವಶೇಷಗಳಡಿ ಸಿಲುಕಿದ 10 ಜನರನ್ನು ಹೊರಗೆ ತೆಗೆದಿದ್ದು, ಆರು ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾಲ್ವರು ಸಾವನ್ನಪ್ಪಿದ್ದಾರೆ. ಹೆಚ್ಚಿನ ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಆಗ್ರಾ ರೇಂಜ್ ಐಜಿ ದೀಪಕ್ ಕುಮಾರ್ ತಿಳಿಸಿದ್ದಾರೆ. ಸ್ಫೋಟದಿಂದಾಗಿ ಮನೆ ಕುಸಿದಿದ್ದು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಗ್ನಿಶಾಮಕ, ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತ ತಂಡ ಸ್ಥಳದಲ್ಲಿದ್ದು, ಪರಿಹಾರ ಕಾರ್ಯದಲ್ಲಿ ತೊಡಗಿದೆ ಎಂದು ಕುಮಾರ್ ಹೇಳಿದರು. ರಕ್ಷಣಾ ಕಾರ್ಯಾಚರಣೆ ತ್ವರಿತಗತಿಯಲ್ಲಿ ನಡೆಯುತ್ತಿದೆ ಎಂದು ಫಿರೋಜಾಬಾದ್ ಜಿಲ್ಲಾ ಮ್ಯಾಜಿಸ್ಟ್ರೇಟ್ ರಮೇಶ್ ರಂಜನ್ ಹೇಳಿದ್ದಾರೆ.