ವಿವೇಕಾನಂದರ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಿ – ಶಾಸಕ ಜಿ.ಬಿ.ಜ್ಯೋತಿಗಣೇಶ್

 ತುಮಕೂರು:

      ಸ್ವಾಮಿ ವಿವೇಕಾನಂದರ ತತ್ವಾದರ್ಶಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ಅವರು ತಿಳಿಸಿದರು.

      ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಯೋಗದಲ್ಲಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ನಡೆದ ಸ್ವಾಮಿ ವಿವೇಕಾನಂದರ ಜನ್ಮದಿನೋತ್ಸವ ಅಂಗವಾಗಿ “ರಾಷ್ಟ್ರೀಯ ಯುವ ದಿನಾಚರಣೆ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

      ಸ್ವಾಮಿ ವಿವೇಕಾನಂದರ ಜೀವನದ ಕುರಿತು ಪ್ರತಿಯೊಬ್ಬರು ತಿಳಿದುಕೊಳ್ಳಬೇಕು. ವಿದ್ಯಾರ್ಥಿ ಜೀವನ ಅತ್ಯಂತ ಮಹತ್ವದ ಘಟ್ಟವಾಗಿದೆ. ಈ ಹಂತದಲ್ಲಿ ವಿದ್ಯಾರ್ಥಿಗಳು ಹೆಚ್ಚು ವಿದ್ಯಾಭ್ಯಾಸದ ಕಡೆಗೆ ಗಮನಹರಿಸಬೇಕು. ದೇಶದ ಅಭಿವೃದ್ಧಿ ಬಗ್ಗೆ ಚಿಂತನೆ ಬೆಳೆಸಿಕೊಳ್ಳಬೇಕು ಎಂದರು.

      ವಿವೇಕಾನಂದರ ಜನ್ಮದಿನಾಚರಣೆ ಕೇವಲ ಆಚರಣೆಗಷ್ಟೆ ಸೀಮಿತವಾಗಬಾರದು. ದೇಶ ಕಟ್ಟುವ ಜವಾಬ್ದಾರಿ ಯುವಜನರ ಮೇಲಿದೆ. ಪ್ರಪಂಚದಲ್ಲಿಯೇ ಅತಿ ಹೆಚ್ಚು ಯುವಜನತೆ ಹೊಂದಿರುವ ದೇಶ ನಮ್ಮ ದೇಶ. ಆದ್ದರಿಂದ ವಿದ್ಯಾರ್ಥಿಗಳು ಸನ್ನದ್ಧರಾಗಿ ಸತ್ಯಮಾರ್ಗದಲ್ಲಿ ನಡೆಯಬೇಕು. ಇತ್ತೀಚಿನ ದಿನಗಳಲ್ಲಿ ಹಣಗಳಿಸಲು ಅನ್ಯಮಾರ್ಗ ಬಳಸಿಕೊಳ್ಳುತ್ತಿದ್ದಾರೆ. ಅಲ್ಲದೇ ವಿದ್ಯಾರ್ಥಿಗಳು ಹೆಚ್ಚಿನ ಸಮಯವನ್ನು ಮೊಬೈಲ್ ಬಳಕೆಯಲ್ಲಿ ಕಳೆಯುತ್ತಿದ್ದಾರೆ. ವಿದ್ಯಾರ್ಥಿಗಳಿಗಾಗಿ ಸರ್ಕಾರ ಉಚಿತ ಲ್ಯಾಪ್‍ಟಾಪ್ ನೀಡುತ್ತಿದೆ. ಇದನ್ನು ವಿದ್ಯಾಭ್ಯಾಸದ ಮಾಹಿತಿಗಾಗಿ ಬಳಸಿಕೊಳ್ಳಬೇಕು. ಬೇರೆಯವರಿಗೆ ತಮ್ಮನ್ನು ತಾವು ಹೊಲಿಕೆ ಮಾಡಿಕೊಳ್ಳಬೇಡಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

      ಜಿಲ್ಲಾಧಿಕಾರಿ ಡಾ|| ರಾಕೇಶ್‍ಕುಮಾರ್ ಮಾತನಾಡಿ, ಇಂದಿನ ಯುವಕರು ನಿರ್ದಿಷ್ಟ ಗುರಿ ಹಾಗೂ ಗುರುಗಳ ಮಾರ್ಗದರ್ಶನದಲ್ಲಿ ಜೀವನ ರೂಪಿಸಿಕೊಳ್ಳುವುದರೊಂದಿಗೆ ದೇಶಕಟ್ಟುವ ಶಕ್ತಿಗಳಾಗಬೇಕು. ಸಮಯದ ಮೌಲ್ಯ ತಿಳಿದವರು ಮಾತ್ರ ಜೀವನದ ಬೆಲೆ ತಿಳಿದುಕೊಳ್ಳಲು ಸಾಧ್ಯ. ವಿದ್ಯಾರ್ಥಿಗಳು ಹೆಚ್ಚಿನ ಸಮಯವನ್ನು ಸಾಮಾಜಿಕ ಜಾಲತಾಣಗಳ ಬಳಕೆಯಲ್ಲಿ ಕಳೆಯಬಾರದು. ಪ್ರತಿನಿತ್ಯ ನಾವು ಮಾಡುವ ಕೆಲಸವನ್ನು ಬರೆದಿಟ್ಟುಕೊಳ್ಳುವ ಅಭ್ಯಾಸ ಮಾಡಿಕೊಳ್ಳಬೇಕು. ನಾವು ಅರ್ಥಪೂರ್ಣವಾದ ಜೀವನವನ್ನು ನಡೆಸುತ್ತಿದ್ದೀವಾ..? ಎಂಬುದನ್ನು ಮೊದಲು ಅರ್ಥಮಾಡಿಕೊಳ್ಳಬೇಕು ಎಂದರು.

      ರಾಮಕೃಷ್ಣ-ವಿವೇಕಾನಂದ ಆಶ್ರಮದ ಅಧ್ಯಕ್ಷರಾದ ವೀರಾಶನಂದ ಸರಸ್ವತಿ ಸ್ವಾಮೀಜಿ ಅವರು ಆರ್ಶೀವಚನ ನೀಡುತ್ತಾ, ಸ್ವಾಮಿ ವಿವೇಕಾನಂದರು ತಮ್ಮ ವಾಕ್‍ಚಾತುರ್ಯದಿಂದ ಯುವಕರನ್ನು ತಮ್ಮೆಡೆಗೆ ಸೆಳೆಯುತ್ತಿದ್ದರು. ವಿಶ್ವಕ್ಕೆ ಬೆಳಕು ಚೆಲ್ಲಿದ ಮಹಾನ್ ವ್ಯಕ್ತಿ. ಚಿಕಾಗೋ ಸಮ್ಮೇಳನದಲ್ಲಿ ಎಲ್ಲ ಧರ್ಮಗಳ ಸಾರ ಒಂದೇ ಎಂದಿದ್ದಾರೆ. ಅಲ್ಲದೇ ಧರ್ಮ ಶ್ರೇಷ್ಠತೆ ಬಗ್ಗೆ ವಿವೇಕಾನಂದರು ತಿಳಿಸಿಕೊಟ್ಟಿದ್ದಾರೆ. ಅವರ ಚಿಂತನೆ, ವಿಚಾರಧಾರೆಗಳನ್ನು ಯುವಕರು ತಿಳಿದುಕೊಳ್ಳಬೇಕು. ನಮ್ಮನ್ನು ನಾವು ಮೊದಲು ನಂಬಬೇಕು. ನಾವು ಮಾಡುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಬೇಕು ಎಂದರು.

      ಕಾರ್ಯಕ್ರಮದಲ್ಲಿ ಸರ್ಕಾರದ ವತಿಯಿಂದ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‍ಟಾಪ್ ವಿತರಿಸಲಾಯಿತು. ತುಮಕೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ವಿಭಾಗದ ನಿರ್ದೇಶಕರಾದ ಡಾ|| ಎ.ಕೊಟ್ರೇಶ್ ಅವರು ಉಪನ್ಯಾಸ ನೀಡಿದರು.

      ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಉದೇಶ್, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಬಿ.ರುದ್ರಪ್ಪ, ಕಾಲೇಜು ಪ್ರಾಂಶುಪಾಲರಾದ ಪ್ರೊ||ಕೆ.ಎಸ್.ಜಗದೀಶ್ ಸೇರಿದಂತೆ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.  

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap