ಬೆಂಗಳೂರು:
ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ (94) ಅವರು ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ಸಂಜೆ ನಿಧನರಾದರು. ಅನಾರೋಗ್ಯ ಹಿನ್ನೆಲೆಯಲ್ಲಿ ಕಳೆದ ಒಂದು ತಿಂಗಳಿಂದ ಶಾಮನೂರು ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದಾರೆ.
ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದ ಶಾಮನೂರು ಶಿವಶಂಕರಪ್ಪ ಅವರು, 1931ರ ಜೂನ್ 16ರಂದು ಜನಿಸಿದ್ದರು.
ದಶಕಗಳ ಕಾಲ ಸಕ್ರಿಯ ರಾಜಕಾರಣದಲ್ಲಿದ್ದ ಶಾಮನೂರು ಶಿವಶಂಕರಪ್ಪ ಅವರು ಆರು ಬಾರಿ ಶಾಸಕರಾಗಿ ಹಾಗೂ ಒಂದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದಾರೆ. ರಾಜ್ಯದ ವಿವಿಧ ಸರ್ಕಾರಗಳಲ್ಲಿ ಪ್ರಮುಖ ಖಾತೆಗಳನ್ನು ನಿಭಾಯಿಸುವ ಮೂಲಕ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರ ಪುತ್ರ ಎಸ್.ಎಸ್. ಮಲ್ಲಿಕಾರ್ಜುನ ತೋಟಗಾರಿಕೆ ಸಚಿವರಾಗಿದ್ದು ಅವರ ಸೊಸೆ ಪ್ರಭಾ ಮಲ್ಲಿಕಾರ್ಜುನ ಸಂಸದರಾಗಿದ್ದಾರೆ.
ಇವರ ನಿಧನಕ್ಕೆ ಕಾಂಗ್ರೆಸ್ ಸೇರಿ ವಿವಿಧ ರಾಜಕೀಯ ಪಕ್ಷಗಳ ಪ್ರಮುಖರು ಸೇರಿ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ.








