ಬೆಂಗಳೂರು
2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟದ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರು ಕಾತುರರಾಗಿದ್ದಾರೆ. ಸದ್ಯ ಕರ್ನಾಟಕ ಪರೀಕ್ಷಾ ಮಂಡಳಿ ಫಲಿತಾಂಶ ಪ್ರಕಟ ಮಾಡಲು ಸರ್ವ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಫಲಿತಾಂಶಕ್ಕೆ ದಿನಗಣನೆ ಆರಂಭವಾಗಿದೆ.
ಇಡಿ ರಾಜ್ಯವೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಕ್ಕೆ ಎದುರು ನೋಡುತ್ತಿದ್ದು, ಈ ವಾರವೇ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ನಾಳೆ (ಮೇ-7) ಮಂಗಳವಾರ ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ 2ನೇ ಹಂತದ ಮತದಾನ ನಡೆಯುವ ಕಾರಣ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ವಿಳಂಬವಾಗುತ್ತಿದೆ.
ಲೋಕಸಭೆ ಚುನಾವಣೆಯ ಮತದಾನ ಮುಗಿದ ಬಳಿಕ ಅಂದರೆ ಮೇ 9 ಅಥವಾ 10ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ ಇದೆ. ಇನ್ನು ಮೇ 10 ಬಸವ ಜಯಂತಿ ಹಿನ್ನೆಲೆಯಲ್ಲಿ ಸರ್ಕಾರಿ ರಜೆ ಇದೆ. ಹೀಗಾಗಿ ಮೇ 9ರೊಳಗೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ ಮಾಡಲು ಪರೀಕ್ಷಾ ಮಂಡಳಿ ಸಿದ್ಧತೆ ನಡೆಸಿದೆ ಎನ್ನಲಾಗಿದೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶದ ದಿನ ವಿದ್ಯಾರ್ಥಿಗಳು ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ಗಳಾದ kseab.karnataka.gov.in ಮತ್ತು karresults.nic.in ಗಳಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು. ಅಂಕಪಟ್ಟಿ ಬರುವುದು ತಡವಾಗುವ ಕಾರಣ ಮುಂದಿನ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಈ ವೆಬ್ಸೈಟ್ಗಳಲ್ಲಿ ಸಿಗುವ ಫಲಿತಾಂಶವನ್ನೇ ಡೌನ್‌ಲೋಡ್ ಮಾಡಿಕೊಳ್ಳಬಹುದು.
ಮೊದಲು ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ karresults.nic.in ಗೆ ಭೇಟಿ ನೀಡಿ, ಬಳಿಕ ಮುಖಪುಟದಲ್ಲಿ SSLC Results 2024 ಲಿಂಕ್ ಅನ್ನು ಕ್ಲಿಕ್ ಮಾಡಿ. ಈ ವೇಳೆ ಹೊಸ ಲಾಗಿನ್ ಪುಟವು ತೆರೆಯುತ್ತದೆ. ಇಲ್ಲಿ ಗಮನವಿರಿಸಿ. ನಿಮ್ಮ ಅಪ್ಲಿಕೇಶನ್ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿದಾಗ ನಿಮ್ಮ ಫಲಿತಾಂಶ ಕಾಣಸಿಗುತ್ತದೆ. ನಿಮ್ಮ ಹೆಸರು ಹಾಗೂ ಫಲಿತಾಂಶವನ್ನು ಸರಿಯಾಗಿ ನೋಡಿಕೊಳ್ಳಿ ಬಳಿಕ ಡೌನ್ಲೋಡ್ಗೆ ಅವಕಾಶವಿದ್ದು, ಡೌನ್‌ಲೋಡ್ ಮಾಡಿಕೊಳ್ಳಿ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ