ನವದೆಹಲಿ:
27 ವರ್ಷಗಳ ಬಳಿಕ ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರಕ್ಕೆ ಬಂದಿರುವ ಬಿಜೆಪಿಗೆ ಮುಖ್ಯಮಂತ್ರಿ ಆಯ್ಕೆ ದೊಡ್ಡ ತಲೆನೋವಾಗಿದ್ದು, ಫಲಿತಾಂಶ ಪ್ರಕಟವಾಗಿ ಸುಮಾರು 15 ದಿನಗಳ ನಂತರ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗಾಗಿ ಬುಧವಾರ ಕೇಂದ್ರ ವೀಕ್ಷಕರಾಗಿ ಮಾಜಿ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಮತ್ತು ರಾಷ್ಟ್ರೀಯ ಕಾರ್ಯದರ್ಶಿ ಓಂ ಪ್ರಕಾಶ್ ಧಂಕರ್ ಅವರನ್ನು ಬಿಜೆಪಿ ನೇಮಕ ಮಾಡಿದೆ.
ದೆಹಲಿಯ ಮುಂದಿನ ಮುಖ್ಯಮಂತ್ರಿಯ ಆಯ್ಕೆಯ ಬಗ್ಗೆ ಸಸ್ಪೆನ್ಸ್ ನಡುವೆಯೇ ಬಿಜೆಪಿ ಶಾಸಕಾಂಗ ಪಕ್ಷವು ತನ್ನ ನಾಯಕನನ್ನು ಆಯ್ಕೆ ಮಾಡಲು ಇಂದು ಸಂಜೆ ಸಭೆ ಸೇರಲಿದೆ.ಪಕ್ಷದ ಸಂಸದೀಯ ಮಂಡಳಿಯು ರವಿಶಂಕರ್ ಪ್ರಸಾದ್ ಮತ್ತು ಧಂಕರ್ ಅವರನ್ನು ಕೇಂದ್ರ ವೀಕ್ಷಕರಾಗಿ ನೇಮಿಸಿದೆ ಎಂದು ಬಿಜೆಪಿ ಇಂದು ಪ್ರಕಟಣೆಯಲ್ಲಿ ತಿಳಿಸಿದೆ.
ಇಂದು ಸಂಜೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದ್ದು, ಸಭೆಯಲ್ಲಿ ರವಿಶಂಕರ್ ಪ್ರಸಾದ್, ಒಪಿ ಧಂಕರ್ ದೆಹಲಿ ನೂತನ ಮುಖ್ಯಮಂತ್ರಿಯ ಹೆಸರನ್ನು ಪ್ರಕಟಿಸಲಿದ್ದಾರೆ.ಪಕ್ಷದ ಶಾಸಕರಿಂದ ಆಯ್ಕೆಯಾದ ನಂತರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ, ರಾಜಭವನಕ್ಕೆ ತೆರಳಿದ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರನ್ನು ಭೇಟಿ ಮಾಡಿ, ದೆಹಲಿಯಲ್ಲಿ ನೂತನ ಸರ್ಕಾರ ರಚಿಸಲು ಹಕ್ಕು ಮಂಡಿಸಲಿದ್ದಾರೆ.
ಈ ಮಧ್ಯೆ, ನಾಳೆ ಮಧ್ಯಾಹ್ನ 12:35ಕ್ಕೆ ರಾಮಲೀಲಾ ಮೈದಾನದಲ್ಲಿ ನಡೆಯಲಿರುವ ನೂತನ ಸರ್ಕಾರದ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಸಿದ್ಧತೆಗಳು ಭರದಿಂದ ಸಾಗಿವೆ.
ಪ್ರಧಾನಿ ನರೇಂದ್ರ ಮೋದಿ, ಅವರ ಸಂಪುಟ ಸಹೋದ್ಯೋಗಿಗಳು, ಎನ್‌ಡಿಎ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ ಸುಮಾರು 50,000 ಜನ ಈ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 48 ಸ್ಥಾನಗಳನ್ನು ಗೆದ್ದಿದೆ.
