ಮಾಡ್ನಾಳ್ ವಿರೂಪಾಕ್ಷಪ್ಪ ಅವರನ್ನು ಬಂಧಿಸಿ : ಕಾಂಗ್ರೆಸ್ ಆಗ್ರಹ

ಬೆಂಗಳೂರು

      ಬಿಜೆಪಿ ಶಾಸಕ ಮಾಡ್ನಾಳ್ ವಿರೂಪಾಕ್ಷಪ್ಪ ಅವರ ಬ್ರಷ್ಟಾಚಾರ ಮತ್ತು ಅಕ್ರಮಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಮುಖಂಡರು ಬೃಹತ್ ಪ್ರತಿಭಟನಾ ರಾಲಿ ನಡೆಸಿದರು. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಿಂದ ರೇಸ್ ಕೋರ್ಸ್ ರಸ್ತೆಯ ಮುಖ್ಯಮಂತ್ರಿ ಮನೆಗೆ ರಾಲಿ ನಡೆಸಿದರು. ರೇಸ್ ಕೋರ್ಸ್ ಬಳಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಮತ್ತಿತರರನ್ನು ಪೊಲೀಸರು ಬಂಧಿಸಿದರು.

     ಭ್ರಷ್ಟ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ, ಮುಖ್ಯಮಂತ್ರಿ ಕೂಡಲೇ ರಾಜೀನಾಮೆ ನೀಡಬೇಕು. ಅಕ್ರಮ ನಡೆಸಿರುವ ಮಾಡ್ನಾಳ್ ವಿರೂಪಾಕ್ಷಪ್ಪ ಅವರನ್ನು ಬಂಧಿಸಬೇಕು ಎಂದು ಪ್ರತಿಭಟನಾಕಾರರು ಭಿತ್ತಿ ಪತ್ರ ಹಿಡಿದು ಘೋಷಣೆ ಕೂಗಿದರು. ಸಿದ್ದರಾಮಯ್ಯ ಅವರು ಸೂಟ್ ಕೇಸ್ ಹಿಡಿದುಕೊಂಡು ಬಂದಿದ್ದರು. ಪ್ರತಿಯೊಬ್ಬರೂ ವಿವಿಧ ರೀತಿಯ ಭಿತ್ತಿ ಪತ್ರಗಳನ್ನು ಪ್ರದರ್ಶಿಸಿದರು.

    ಇದಕ್ಕೂ ಮುನ್ನ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, ಕೇವಲ ಪ್ರಶಾಂತ್ ಮಾಡಾಳ್ ಅವರನ್ನು ಬಂಧಿಸುವುದಲ್ಲ, ಅವರ ತಂದೆ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ತಕ್ಷಣ ಬಂಧಿಸಬೇಕು ಮತ್ತು ಬೊಮ್ಮಾಯಿ ಅವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

     ರಾಜ್ಯ ಸರ್ಕಾರದ ವಿರುದ್ಧದ ಎಲ್ಲಾ ಭ್ರಷ್ಟಾಚಾರದ ಆರೋಪಗಳಿಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ದಾಖಲೆ ಕೇಳುತ್ತಾರೆ, ಆದರೆ ನಮ್ಮ ಸರ್ಕಾರದ ಅವಧಿಯಲ್ಲಿ ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಮಾಡಿಕೊಂಡಾಗ ಜಾರ್ಜ್ ಅವರು ತಪ್ಪು  ಮಾಡದಿದ್ದರೂ ರಾಜೀನಾಮೆ ನೀಡಿದ್ದರು, ನಾನು ಜಾರ್ಜ್ ಅವರಿಗೆ ನೀವು ರಾಜೀನಾಮೆ ಕೊಡುವುದು ಬೇಡ ಎಂದು ಹೇಳಿದ್ದೆ, ಆದರೂ ಅವರು ನೈತಿಕತೆ ಆಧಾರದಲ್ಲಿ ರಾಜೀನಾಮೆ ನೀಡಿದ್ದರು.

    ದೇವೇಗೌಡರು ನಮ್ಮ ವಿರುದ್ಧ ಒಂದಂಕಿ ಲಾಟರಿ ಆರೋಪ ಮಾಡಿದಾಗ ಕೂಡಲೇ ಪತ್ರಿಕಾಗೋಷ್ಠಿ ಕರೆದು ಅದನ್ನು ಸಿಬಿಐ ಗೆ ವಹಿಸಿದ್ದೆ, ಪರೇಶ್ ಮೇಸ್ತಾ ಎಂಬ ಯುವಕ ಕಾಲುಜಾರಿ ಬಿದ್ದು ಸತ್ತಾಗ ಅದನ್ನು ಕೊಲೆ ಎಂದು ದೊಂಬಿ, ಗಲಾಟೆ ಎಬ್ಬಿಸಿದರು, ಅದನ್ನು ಕೂಡ ಸಿಬಿಐ ತನಿಖೆಗೆ ವಹಿಸಿದ್ದೆ, ಈ ಯಾವುದೇ ಪ್ರಕರಣದಲ್ಲಿ ನಾವು ಬಿಜೆಪಿಯವರಿಂದ ದಾಖಲೆ ಕೇಳಿಲ್ಲ, ನಮ್ಮ ಸರ್ಕಾರದ ಅವಧಿಯಲ್ಲಿ ಒಟ್ಟು 8 ಪ್ರಕರಣಗಳನ್ನು ಸಿಬಿಐ ತನಿಖೆಗೆ ವಹಿಸಿದ್ದೆ, ಇಂದು ಆ ಎಲ್ಲಾ ಪ್ರಕರಣಗಳಲ್ಲಿ ಸಿಬಿಐ ಬಿ ರಿಪೋರ್ಟ್ ನೀಡಿದೆ. ನಮ್ಮ ಮೇಲಿನ ಎಲ್ಲಾ ಆರೋಪಗಳು ಸುಳ್ಳು ಎಂದು ಸಾಬೀತಾಗಿದೆ. ಈ ಬಸವರಾಜ ಬೊಮ್ಮಾಯಿಗೆ ಮಾನ ಮರ್ಯಾದೆ ಇದೆಯಾ? ಅಧಿಕಾರಕ್ಕೆ ಅಂಟಿಕೊAಡು ಕೂತಿದ್ದಾರೆ. ಒಂದನ್ನಾದರೂ ತನಿಖೆ ಮಾಡಿಸಿದ್ದಾರೆಯೇ ಎಂದು ಖಾರವಾಗಿ ಪ್ರಶ್ನಿಸಿದರು.

     ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಸೇರಿಕೊಂಡು ಮಂತ್ರಿಗಳು, ಶಾಸಕರು, ನಿಗಮ ಮಂಡಳಿ ಅಧ್ಯಕ್ಷರು ಇಂತಿಷ್ಟು ಲಂಚ ಕಲೆಕ್ಷನ್ ಮಾಡಿಕೊಡಬೇಕು ಎಂದು ನಿಗದಿ ಮಾಡಿದ್ದಾರೆ. ಅವರಿಗೆ ಈ ಬಾರಿ ಜಾತಿ, ಧರ್ಮಗಳ ಆಧಾರದಲ್ಲಿ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ ಎಂಬುದು ಅರಿವಾಗಿದೆ. ಮುಂದಿನ ಚುನಾವಣೆಯಲ್ಲಿ ಪ್ರತೀ ವಿಧಾನಸಭಾ ಕ್ಷೇತ್ರದಲ್ಲಿ ಗೆಲ್ಲಲು ಕನಿಷ್ಠ 100 ಕೋಟಿ ಖರ್ಚು ಮಾಡಿದರೂ ಆಶ್ಚರ್ಯ ಇಲ್ಲ. ಮಾಡಾಳ್ ವಿರೂಪಾಕ್ಷಪ್ಪನನ್ನು ಈ ಕೂಡಲೇ ಬಂಧಿಸಬೇಕು ಮತ್ತು ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ನಿಮ್ಮ ಭ್ರಷ್ಟಾಚಾರಕ್ಕೆ ಇದಕ್ಕಿಂತ ದಾಖಲೆ ಬೇರೆ ಬೇಕಾ? ಎಂದು ಪ್ರಶ್ನಿಸಿದರು.

   8 ಕೋಟಿಗೂ ಅಧಿಕ ಮೊತ್ತದ ಹಣ, ಆಭರಣಗಳನ್ನು ಲೋಕಾಯುಕ್ತದವರು ಮಾಡಾಳ್ ವಿರೂಪಾಕ್ಷಪ್ಪ ಅವರ ಮನೆಯಿಂದ ವಶಪಡಿಸಿಕೊಂಡಿದ್ದಾರೆ. ನನ್ನ ಪ್ರಕಾರ ಬೊಮ್ಮಾಯಿ ಈಗಾಗಲೇ ರಾಜೀನಾಮೆ ಕೊಟ್ಟುಬಿಡಬೇಕಿತ್ತು. ಸಿದ್ದರಾಮಯ್ಯ ಅವರ ಸರ್ಕಾರ ಎಐಸಿಸಿಗೆ ಎಟಿಎಂ ಆಗಿತ್ತು ಎಂದು ಅಮಿತ್ ಶಾ ಅವರು ನಿನ್ನೆ ಆರೋಪ ಮಾಡಿದ್ದಾರೆ, ಇದಕ್ಕೇನು ಹೇಳ್ತೀರಿ ಶಾ? ಗಡಿಪಾರಾಗಿದ್ದ, ಜೈಲಿಗೆ ಹೋಗಿದ್ದ ಶಾ ಅವರಿಂದ ಪಾಠ ಕಲಿಯಬೇಕ ನಾವು? ದೇಶದ ದುರಂತ ನೋಡ್ರೀ ಎಂದು ಸಿದ್ದರಾಮಯ್ಯ ವ್ಯಂಗವಾಡಿದರು.

    ಮರ್ ಜಾ ಮೋದಿ ಎಂದು ಕಾಂಗ್ರೆಸ್ ನವರು ಹೇಳುತ್ತಾರೆ ಎಂದು ಮೋದಿ ಅವರು ಜನರ ಸಿಂಪತಿ ಗಳಿಸಲು ನಾಟಕ ಮಾಡುತ್ತಿದ್ದಾರೆ. ನಿಮ್ಮ ಬಳಿ ಇಂಟಲಿಜೆನ್ಸ್ ಇದೆ, ರಾ ಇದೆ, ಹೀಗೆ ಕೂಗಿದವರನ್ನು ಜೈಲಿಗೆ ಹಾಕೋದಲ್ವಾ ಮೋದಿಜಿ? ಇನ್ನು ಯಾಕೆ ಸುಮ್ಮನಿದ್ದೀರಿ?. ಮೋದಿ ಅವರಿಗೆ ಯಡಿಯೂರಪ್ಪ ಅವರ ಮೇಲೆ ನಿಜವಾಗಿ ಕಾಳಜಿ ಇಲ್ಲ. ಅವರ ಮೇಲೆ ಇದ್ದಕ್ಕಿದ್ದಂತೆ ಸಿಂಪತಿ ಬಂದಂತೆ ನಾಟಕ ಮಾಡುತ್ತಿದ್ದಾರೆ.

     ಯಡಿಯೂರಪ್ಪ ಅವರು ಕೇಂದ್ರ ನಾಯಕರು ಕೇಳಿದಷ್ಟು ದುಡ್ಡು ಕಳಿಸುತ್ತಿರಲಿಲ್ಲ ಎಂದು ಕಾಣುತ್ತೆ ಅದಕ್ಕೆ ಅವರನ್ನು ಅಧಿಕಾರದಿಂದ ಇಳಿಸಿ, ಆರ್,ಎಸ್,ಎಸ್ ನ ಕೈಗೊಂಬೆಯಂತೆ ಕೆಲಸ ಮಾಡುವ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿ ಮಾಡಿದ್ದಾರೆ. ಪಾಪ ಯಡಿಯೂರಪ್ಪ ಅವರು ಕಣ್ಣೀರು ಹಾಕುತ್ತಾ ಅಧಿಕಾರದಿಂದ ಇಳಿಯುವ ಹಾಗೆ ಮಾಡಿದ್ರಲ್ಲ ಮೋದಿಜಿ, ಈಗ ಓಟಿಗಾಗಿ ಅವರ ಕೈ ಹಿಡಿದುಕೊಂಡು ಹೊಗಳುತ್ತೀರಾ ಎಂದು ಪ್ರಶ್ನಿಸಿದರು.

    ಸಾಕಪ್ಪ ಸಾಕು 40% ಸರ್ಕಾರ? ಎಂದು ಇಂದು ಜನ ಹೇಳುತ್ತಿದ್ದಾರೆ. ಸಾರ್ವಜನಿಕ ಸಭೆಗಳಲ್ಲಿ 40% ಕಮಿಷನ್ ಹಗರಣದ ಬಗ್ಗೆ ಮಾತನಾಡಿ ಸರ್ ಎಂದು ಜನರೇ ಕೇಳುತ್ತಿದ್ದಾರೆ. ಗುತ್ತಿಗೆದಾರರ ಸಂಘದ ಅಧ್ಯಕ್ಷರು, ರುಪ್ಸಾ ಅಧ್ಯಕ್ಷರು ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಪತ್ರ ಬರೆದ ಉದಾಹರಣೆ ಹಿಂದೆ ಇದೆಯಾ? ಮಠಗಳಿಗೆ ನೀಡುವ ಅನುದಾನಕ್ಕೂ ಲಂಚ ಕೊಡಬೇಕು ಎಂದು ದಿಂಗಾಲೇಶ್ವರ ಸ್ವಾಮೀಜಿ ಹೇಳಿದ್ದಾರೆ. ಇಷ್ಟೊಂದು ಲಜ್ಜೆಗೆಟ್ಟು ಲಂಚ ತಿನ್ನುವ ಸರ್ಕಾರವನ್ನು ನಾನು ನೋಡಿಯೇ ಇರಲಿಲ್ಲ. ಅದಕ್ಕೆ ನಿನ್ನೆ ಬೆಳಗಾವಿಯಲ್ಲಿ ಕೂಡಲೇ ಚುನಾವಣೆ ಘೋಷಣೆ ಮಾಡುವಂತೆ ಮನವಿ ಮಾಡಿದ್ದೆ, ಚುನಾವಣಾ ನೀತಿ ಸಂಹಿತೆ ಘೋಷಣೆ ಆದರೆ ಇವರು ಲಂಚ ಹೊಡೆಯುವುದಾದರೂ ನಿಲ್ಲುತ್ತದೆ ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link