ಬೆಂಗಳೂರು :
ಜಗತ್ತು ವೇಗವಾಗಿ ಬದಲಾಗುತ್ತಿದೆ, ಎಲ್ಲೆಡೆ ಹೊಸ ತಂತ್ರಜ್ಞಾನ ಮಾನವನ ಕೆಲಸವನ್ನು ಕಡಿಮೆ ಮಾಡುತ್ತಿದೆ. ಡಿಜಿಟಲ್ ಪೇಮೆಂಟ್ ಜಾರಿಗೆ ಬಂದು ಹಲವು ವರ್ಷಗಳೇ ಕಳೆದರು, ಅದ್ಯಾಕೋ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಈ ವ್ಯವಸ್ಥೆ ಜಾರಿಗೆ ಬಂದಿರಲಿಲ್ಲ, ಆದರೆ ಈಗ ಮೈಸೂರಿನಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಇದೇ ಮೊದಲ ಬಾರಿಗೆ ಕ್ಯೂಆರ್ ಕೋಡ್ ಮೂಲಕ ಇ-ಪೇಮೆಂಟ್ ವ್ಯವಸ್ಥೆ ಜಾರಿಗೆ ತಂದಿದೆ.
ಜನ ಟಿಕೆಟ್‌ಗೆ ಕ್ಯೂ ನಿಲ್ಲಬಾರದು, ಚಿಲ್ಲರೆ ಸಮಸ್ಯೆ ಉಂಟಾಗಬಾರದು ಎನ್ನುವ ಉದ್ದೇಶದಿಂದ ಹೊಸ ವ್ಯವಸ್ಥೆ ಜಾರಿ ಮಾಡಲಾಗಿದ್ದು, ಪ್ರಯಾಣಿಕರು ಕೂಡ ಈ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ನಂತರ ಮೈಸೂರು ನಗರವು ವೇಗವಾಗಿ ಬೆಳೆಯುತ್ತಿದೆ. ಹೀಗಾಗಿ ಪ್ರಯಾಣಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಮೈಸೂರು ನಗರದಲ್ಲಿರುವ 514 ಮಾರ್ಗಗಳಲ್ಲಿ ಎಲ್ಲಾ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಇ-ಪೇಮೆಂಟ್ ವ್ಯವಸ್ಥೆ ಜಾರಿಗೆ ತಂದಿದೆ. ಹೀಗಾಗಿ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಹೆಚ್ಚಿನ ಪ್ರಯಾಣಿಕರು ಇದರ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ
ಹೊಸ ವ್ಯವಸ್ಥೆಯನ್ನು ಅನುಷ್ಠಾನಗೊಳಿಸುವ ಉದ್ದೇಶದಿಂದ ಈ ವ್ಯವಸ್ಥೆ ಕಾರ್ಯ ನಿರ್ವಹಣೆ ಬಗ್ಗೆ ಕೆಎಸ್‌ಆರ್‌ಟಿಸಿ ಕಂಡಕ್ಟರ್‌ಗಳಿಗೆ ವಾರದ ಹಿಂದೆಯೇ ತರಬೇತಿ ನೀಡಲಾಗಿದೆ. ಎಲ್ಲರೂ ಅದನ್ನು ಬಳಕೆ ಮಾಡಲು ಆರಂಭಿಸಿದ್ದಾರೆ. ಭಾನುವಾರ ಎಲ್ಲಾ ಬಸ್‌ಗಳಲ್ಲಿಯೂ ಡೈನಾಮಿಕ್ ಕ್ಯೂಆರ್ ಕೋಡ್ ಮೂಲಕ ಇ-ಪೇಮೆಂಟ್ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ಬರುತ್ತಿದೆ ಎಂದು ಮೈಸೂರು ನಗರ ವಿಭಾಗೀಯ ನಿಯಂತ್ರಣಾಧಿಕಾರಿ ವೀರೇಶ್ ತಿಳಿಸಿದ್ದಾರೆ.