ಬೆಳಗಾವಿ :

ಜಿಲ್ಲಾಧಿಕಾರಿ ನಿವಾಸದಲ್ಲಿ ಪೇದೆಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಕಿತ್ತೂರು ತಾಲೂಕಿನ ನಿವಾಸಿಯಾದ ಪ್ರಕಾಶ ಗುರವಯ್ಯ ಆತ್ಮಹತ್ಯೆಗೆ ಶರಣಾದ ಪೇದೆ. ಜಿಲ್ಲಾಧಿಕಾರಿ ಎಸ್.ಬಿ.ಬೊಮ್ಮನಹಳ್ಳಿ ಅವರ ನಿವಾಸದಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಈತ ಇಲ್ಲಿನ ಗಾರ್ಡ್ ರೂಂನಲ್ಲಿ ಎಸ್.ಎಲ್.ಆರ್. ಬಂದೂಕಿನಿಂದ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಇವರಿಗೆ ಪತ್ನಿ, ಇಬ್ಬರು ಪುತ್ರರು, ತಂದೆ-ತಾಯಿ ಇದ್ದು, ಸಹೋದರ ಇಂಜಿನಿಯರಿಂಗ್ ಓದುತ್ತಿದ್ದಾನೆ. ಪೇದೆ ಪ್ರಕಾಶ್ ಮನೆಗೆ ಹೋಗದೆ 2 ತಿಂಗಳಾಗಿತ್ತು. ಕೆಲಸದ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತಪಡಿಸಲಾಗಿದೆ. ಸ್ಥಳಕ್ಕೆ ಬಂದಿದ್ದ ಪೇದೆ ಪ್ರಕಾಶ್ ತಾಯಿ ಆಕ್ರಂದನ ಮುಗಿಲು ಮುಟ್ಟಿತ್ತು.
ಇನ್ನು ಸ್ಥಳಕ್ಕೆ ಪೊಲೀಸ್ ಕಮೀಷನರ್ ಲೋಕೇಶ ಕುಮಾರ ಭೇಟಿ ನೀಡಿ ಪರಿಶೀಲನೆ ನಡೆಸಿದು, ಸ್ಥಳದಲ್ಲಿ ಕೆಲಸ ಮಾಡುತ್ತಿದ್ದವರಿಂದ ಮಾಹಿತಿ ಕಲೆ ಹಾಕಿದ್ದಾರೆ. ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








