ಹಾಸನ:
ರಾಮನಗರ, ಮಂಡ್ಯ, ಚನ್ನಪಟ್ಟಣದಲ್ಲಿ ಚುನಾವಣೆಗೆ ಸ್ಪರ್ಧಿಸಿ ಸೋತ ನಂತರ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಹಾಸನದಲ್ಲಿ ಅದೃಷ್ಟ ಪರೀಕ್ಷೆಗೆ ಇಳಿಯಲಿಗದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ.
ಇದಕ್ಕೆ ಮತ್ತಷ್ಟು ಪುಷ್ಠಿ ನೀಡುವಂತೆ ನಿಖಿಲ್ ಕುಮಾರಸ್ವಾಮಿ ಇದೇ ಮೊದಲ ಬಾರಿಗೆ ಹಾಸನದಲ್ಲಿ ಪಕ್ಷದ ನಾಯಕರ ಸಭೆ ನಡೆಸಿ ಕುತೂಹಲಕ್ಕೆ ಕಾರಣವಾಗಿದೆ. ಪಕ್ಷ ಸಂಘಟನೆ ಹಿನ್ನೆಲೆಯಲ್ಲಿ ರಾಜ್ಯ ಯುವ ಜೆಡಿಎಸ್ ಅಧ್ಯಕ್ಷ ನಿಖಿಲ್ ಹಾಸನ ಜಿಲ್ಲೆಯಲ್ಲಿ ಸಭೆ ನಡೆಸಿದ್ದು, ಮುಂದಿನ ದಿನಗಳಲ್ಲಿ ಇಲ್ಲಿಂದಲೇ ರಾಜಕೀಯ ಇನಿಂಗ್ಸ್ ಆರಂಭಿಸುತ್ತಾರಾ ಎಂಬ ಚರ್ಚೆ ಶುರುವಾಗಿದೆ. ಹಳೇ ಮೈಸೂರು ಭಾಗದಲ್ಲಿ ಪಕ್ಷ ಬಲವರ್ಧನೆಗೆ ಮುಂದಾಗಲಾಗಿದೆ ಎನ್ನಲಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಮುಖಂಡರ ಸಭೆ ನಡೆಸಿದ್ದಾರೆ.
ಹಾಸನ ನಗರದ ಹೊರವಲಯದ ಹೊಯ್ಸಳ ರೆಸಾರ್ಟ್‌ನಲ್ಲಿ ನಡೆದ ಸಭೆಯಲ್ಲಿ ಹಾಲಿ ಹಾಗೂ ಮಾಜಿ ಶಾಸಕರು, ಪರಾಜಿತ ಅಭ್ಯರ್ಥಿಗಳು, ಜಿಲ್ಲಾಧ್ಯಕ್ಷರು, ಮುಖಂಡರಿದ್ದರು. ತಾಪಂ, ಜಿಪಂ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷವನ್ನು ಮತ್ತಷ್ಟು ಬಲಪಡಿಸಲು ಸಭೆ ನಡೆಸಲಾಗುತ್ತಿದೆ ಎನ್ನಲಾಗಿದೆ.
ಇನ್ನೂ ಸಭೆಯಲ್ಲಿ ಮಾತನಾಡಿದ ನಿಖಿಲ್ ರಾಜ್ಯ ಕಾಂಗ್ರೆಸ್ ಸರ್ಕಾರ ಕೇವಲ ಚುನಾವಣೆ ಸಂದರ್ಭದಲ್ಲಿ ಮಾತ್ರ ಗ್ಯಾರಂಟಿ ನೀಡುತ್ತಿದ್ದಾರೆ. ಗೃಹಲಕ್ಷ್ಮಿ ಹಣಕ್ಕಾಗಿ ರಾಜ್ಯದಲ್ಲಿ ತಾಯಂದಿರು ಕಾದು ಕುಳಿತಿದ್ದಾರೆ, ಚುನಾವಣೆ ಸಂದರ್ಭದಲ್ಲಿ ಮಾತ್ರ ಗ್ಯಾರಂಟಿ, ಉಪಚುನಾವಣೆ ಚುನಾವಣೆ ವೇಳೆ ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ಮಹಿಳೆಯರಿಗೆ ಹಣ ಬಂತು. ಮುಂದೆ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಘೋಷಣೆ ಆದರೆ ಗೃಹಲಕ್ಷ್ಮಿ ಹಣ ಹಾಕುತ್ತಾರೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಹೇಳಿದರು.
ಮುಂದಿನ ದಿನಗಳಲ್ಲಿ ಕುಮಾರಣ್ಣ ಪಕ್ಷದ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಮುಖಂಡರ ಸಭೆ ಕರೆಯಲಿದ್ದಾರೆ. ಲೋಕಸಭಾ ಅಧಿವೇಶನ ನಡೆಯುವಾಗ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಿ ಎಂದು ದೇವೇಗೌಡರು ಸೂಚನೆ ಕೊಟ್ಟಿದ್ದಾರೆ ಎಂದು ತಿಳಿಸಿದರು.
