ನವದೆಹಲಿ:
ಆಪಾದಿತ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯವು (ಇ.ಡಿ) ಶುಕ್ರವಾರ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.
ಆಪಾದಿತ ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ನೀಡಲಾದ ಜಾಮೀನು ಪ್ರಶ್ನಿಸಿ ಇ.ಡಿ ಸಲ್ಲಿಸಿರುವ ಅರ್ಜಿಯನ್ನು ಆಲಿಸುವವರೆಗೆ ದೆಹಲಿ ಸಿಎಂಗೆ ಜಾಮೀನು ನೀಡುವ ವಿಚಾರಣಾ ನ್ಯಾಯಾಲಯದ ಆದೇಶ ಜಾರಿಗೆ ತರಲಾಗುವುದಿಲ್ಲ ಎಂದು ದೆಹಲಿ ಹೈಕೋರ್ಟ್ ಶುಕ್ರವಾರ ಹೇಳಿದೆ.
ಕೇಜ್ರಿವಾಲ್‌ಗೆ ಜಾಮೀನು ನೀಡಿರುವ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿರುವ ಇ.ಡಿ, ಅರ್ಜಿಯ ತುರ್ತು ವಿಚಾರಣೆಗೆ ಮನವಿ ಮಾಡಿದ್ದು, ನ್ಯಾಯಮೂರ್ತಿಗಳಾದ ಸುಧೀರ್ ಕುಮಾರ್ ಜೈನ್ ಮತ್ತು ರವೀಂದರ್ ದುಡೇಜಾ ಅವರ ಪೀಠವು, ಪ್ರಕರಣಕ್ಕೆ ಸಂಬಂಧಿಸಿದ ಫೈಲ್ 10-15 ನಿಮಿಷಗಳಲ್ಲಿ ತನ್ನ ಮುಂದೆ ಬರಲಿದ್ದು, ನಂತರ ವಿಚಾರಣೆ ನಡೆಸುವುದಾಗಿ ಹೇಳಿದೆ.
ಇ.ಡಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಮುಗಿಯುವವರೆಗೂ ವಿಚಾರಣಾ ನ್ಯಾಯಾಲಯದ ಆದೇಶದ ಪ್ರಕಾರ ಕ್ರಮಕೈಗೊಳ್ಳುವಂತಿಲ್ಲ ಎಂದು ಹೈಕೋರ್ಟ್ ಹೇಳಿದೆ.ಇ.ಡಿ ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ ರಾಜು, ತನ್ನ ಪ್ರಕರಣವನ್ನು ವಾದಿಸಲು ಸಂಸ್ಥೆಗೆ ಸರಿಯಾದ ಅವಕಾಶವನ್ನು ನೀಡಿಲ್ಲ ಎಂದು ವಾದಿಸಿ ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ತಡೆ ಕೋರಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ದೆಹಲಿ ಸಿಎಂ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ವಾದ-ಪ್ರತಿವಾದ ಆಲಿಸಿದ್ದ ರೋಸ್ ಅವೆನ್ಯೂ ಕೋರ್ಟ್ ವಿಶೇಷ ನ್ಯಾಯಾಧೀಶರಾದ ನಿಯಾಯ್ ಬಿಂದು ಅವರು ಆದೇಶವನ್ನು ಕಾಯ್ದಿರಿಸಿದ್ದರು. ಬಳಿಕ ಗುರುವಾರ ಸಂಜೆ ತೀರ್ಪು ಪ್ರಕಟಿಸಿದ ಅವರು, ಅರವಿಂದ ಕೇಜ್ರಿವಾಲ್ ಅವರಿಗೆ 1 ಲಕ್ಷ ರೂ. ಮೊತ್ತದ ಬಾಂಡ್ ಮೇಲೆ ಜಾಮೀನು ನೀಡಿದ್ದಾರೆ.
ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರನ್ನು ಕಳೆದ ಮಾರ್ಚ್ 21ರಂದು ಇಡಿ ಬಂಧಿಸಿತ್ತು. ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಸುಪ್ರೀಂ ಕೋರ್ಟ್ ಜೂನ್ 1 ರವರೆಗೆ ಅವರಿಗೆ ಮಧ್ಯಂತರ ಜಾಮೀನು ನೀಡಿತ್ತು. ನಂತರ ಜೂನ್ 2 ರಂದು ಅವರು ಮತ್ತೆ ತಿಹಾರ್ ಜೈಲು ಅಧಿಕಾರಿಗಳ ಮುಂದೆ ಶರಣಾಗಿದ್ದರು.
