ಧಾರವಾಡ
ಕರ್ನಾಟಕ ವಿಧಾನಸಭೆ ಚುನಾವಣೆಗೆ ವೇಳಾಪಟ್ಟಿ ಘೋಷಣೆಯಾಗಿದೆ. ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಮೇ 10ರಂದು ರಾಜ್ಯದಲ್ಲಿ ಚುನಾವಣೆ ನಡೆಯಲಿದ್ದು, ಮೇ 13ರಂದು ಚುನಾವಣಾ ಫಲಿತಾಂಶ ಘೋಷಣೆಯಾಗಲಿದೆ. ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಚುನಾವಣಾ ಆಯೋಗದ ನಿರ್ದೇಶನದಂತೆ ಚುನಾವಣಾ ಕಾರ್ಯದಲ್ಲಿ ನಿರತರಾಗಿದ್ದಾರೆ.
ಜಿಲ್ಲಾ ಚುನಾವಣಾಧಿಕಾರಿ, ಧಾರವಾಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ನಿಯೋಜಿತ ಕೆಲಸ ನಿರ್ವಹಣೆಯಲ್ಲಿ ಬೇಜವಾಬ್ದಾರಿತನ, ಶೋಕಾಸ್ ನೋಟಿಸ್‌ಗೆ ನಿರ್ಲಕ್ಷ್ಯ ದ ಉತ್ತರ ನೀಡಿರುವುದು, ಚುನಾವಾಣಾ ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರ ನಾಗರಾಜ ಕೂಬಳ್ಳಿಯನ್ನು ನವಲಗುಂದ ವಿಧಾನಸಭಾ ಕ್ಷೇತ್ರದ ಫ್ಲೈಯಿಂಗ್ ಸ್ಕ್ವಾಡ್ ತಂಡಕ್ಕೆ ನಿಯೋಜಿಸಿ, ಕರ್ತವ್ಯ ನಿರ್ವಹಿಸಲು ಆದೇಶಿಸಲಾಗಿತ್ತು. ನಿಯೋಜಿತ ಕರ್ತವ್ಯ ನಿರ್ವಹಿಸದೇ ನಿರ್ಲಕ್ಷ್ಯ ತೋರಿದ ಮತ್ತು ಶೋಕಾಷ್ ನೋಟಿಸ್‌ಗೆ ನಿಯಮ ಬಾಹಿರವಾಗಿ ಬೇಜವಾಬ್ದರಿ ಉತ್ತರಿಸಿದ ಕಾರಣ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತ್ತುಗೊಳಿಸಿ ಆದೇಶಿಸಿದ್ದಾರೆ.
ಚುನಾವಣಾ ಆಯೋಗ ಚುನಾವಣೆ ವೇಳಾಪಟ್ಟಿಯನ್ನು ಘೋಷಿಸಿದ್ದು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಮಾದರಿ ನೀತಿ ಸಂಹಿತೆಯನ್ನು ಅಚ್ಚುಕಟ್ಟಾಗಿ ಅನುಷ್ಠಾನಗೊಳಿಸುವುದು ಅವಶ್ಯವಿರುವುದರಿಂದ ಜಿಲ್ಲಾ ಚುನಾವಣಾಧಿಕಾರಿಗಳ ಕಾರ್ಯಾಲಯದಿಂದ ವಿವಿಧ ಮಾದರಿ ನೀತಿ ಸಂಹಿತೆ ತಂಡಗಳನ್ನು ರಚಿಸಿಲಾಗಿದೆ. ಅದರಂತೆ ಹುಬ್ಬಳ್ಳಿ ಹೆಸ್ಕಾಂ ಕಾರ್ಪೋರೇಟ್ ಕಚೇರಿ ಕಾರ್ಯನಿರ್ವಾಹಕ ಅಭಿಯಂತರ ನಾಗರಾಜ ಕೂಬ್ಬಳ್ಳಿಯನ್ನು ನಿಯೋಜಿಸಲಾಗಿತ್ತು. ತಂಡದವರು ಅಪ್ಲಿಕೇಶನ್ ಅನ್ನು ಮೊಬೈಲ್‌ನಲ್ಲಿ ಡೌನ್‌ಲೋಡ್ ಮಾಡಿಕೊಂಡು ಪ್ರತಿನಿತ್ಯ ಸದರಿ ತಂತ್ರಾಂಶದ ಮೂಲಕ ಸ್ವೀಕೃತವಾಗುವ ದೂರುಗಳನ್ನು ನಿರ್ವಹಿಸುವಂತೆ ಸೂಚಿಸಲಾಗಿತ್ತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ