ಸಹಕಾರಿ ಬ್ಯಾಂಕ್‌ ಗಳಿಗೆ ಮೋಸ : ಮಾಜಿ ಸಚಿವರ ವಿರುದ್ಧ ಪ್ರಕರಣ ದಾಖಲು ….!

ಬೆಂಗಳೂರು:

    ಸಹಕಾರಿ ಬ್ಯಾಂಕ್‌ನಿಂದ 439.7 ಕೋಟಿ ರೂಪಾಯಿ ಸಾಲ ಪಡೆದು ಮರುಪಾವತಿ ಮಾಡದೆ ವಂಚಿಸಿದ ಆರೋಪದ ಮೇಲೆ ಮಾಜಿ ಸಚಿವ, ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

    ಈ ಸಂಬಂಧ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್‌ನ ಪ್ರಧಾನ ವ್ಯವಸ್ಥಾಪಕ ರಾಜಣ್ಣ (56) ಅವರು ಶುಕ್ರವಾರ ದೂರು ದಾಖಲಿಸಿದ್ದಾರೆ.

     ರಮೇಶ್‌ ಜಾರಕಿಹೊಳಿ ಅವರು ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಬೆಳಗಾವಿಯ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಲಿಮಿಟೆಡ್‌ ಸಕ್ಕರೆ ಕಾರ್ಖಾನೆಯ ಸ್ಥಾಪನೆ, ವಿಸ್ತರಣೆ ಹಾಗೂ ನಿರ್ವಹಣೆಗಾಗಿ 2013 ರಿಂದ 2017ರವರೆಗೆ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್‌ ಬ್ಯಾಂಕ್‌ ಮತ್ತು ಅದರ ಸಮೂಹ ಬ್ಯಾಂಕ್‌ಗಳಿಂದ ಸಾಲ ಪಡೆದಿದ್ದರು. ನಂತರ ಆ ಸಾಲ ಹಿಂದಿರುಗಿಸದೆ ವಂಚಿಸಿದ್ದಾರೆ ಎಂದು ಆರೋಪಿಸಿದ್ದಾರೆ.

    ಸಾಲ ಮರುಪಾವತಿಸುವವರೆಗೂ ಬ್ಯಾಂಕ್‌ನ ಅನುಮತಿ ಇಲ್ಲದೆ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಲಿಮಿಟೆಡ್‌ನ ಆಡಳಿತ ಮಂಡಳಿ ಯ ವ್ಯವಸ್ಥಾಪಕ ನಿರ್ದೇಶಕರು ಮತ್ತು ನಿರ್ದೇಶಕರನ್ನು ಬದಲಿಸ ಬಾರದೆಂದು ಸಾಲ ಮಂಜೂರಾತಿ ಸಂದರ್ಭದಲ್ಲೇ ಷರತ್ತು ವಿಧಿಸಲಾಗಿತ್ತು. ಆದರೆ, ಆರೋಪಿಗಳು ಸಾಲ ಮರುಪಾವತಿ ಮಾಡುವುದರಿಂದ ತಪ್ಪಿಸಿಕೊಳ್ಳಲು ಮತ್ತು ಬ್ಯಾಂಕ್‌ಗೆ ಮೋಸ ಮಾಡುವ ದುರುದ್ದೇಶಕ್ಕೆ ಕಾರ್ಖಾನೆ ಆಡಳಿತ ಮಂಡಳಿಯ ಹುದ್ದೆಗಳಿಂದ ಹೊರ ನಡೆದಿದ್ದಾರೆ. ಈ ಬಗ್ಗೆ ಬ್ಯಾಂಕ್‌ಗೆ ಮಾಹಿತಿ ಸಹ ಕೊಟ್ಟಿಲ್ಲ. ಜತೆಗೆ, ಕಾರ್ಖಾನೆಗೆ ಸಂಬಂಧಪಡದ ವ್ಯಕ್ತಿಗಳನ್ನು ಆಡಳಿತ ಮಂಡಳಿಯ ನಿರ್ದೇಶಕರ ಹುದ್ದೆಗೆ ನೇಮಿಸಿ ನಂಬಿಕೆ ದ್ರೋಹ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
     ಈ ಸಂಬಂಧ ವಿಶ್ವೇಶ್ವರಪುರಂ ಪೊಲೀಸರು ಐಪಿಸಿ ಸೆಕ್ಷನ್ 406 (ಕ್ರಿಮಿನಲ್ ನಂಬಿಕೆ ದ್ರೋಹ) ಮತ್ತು 420 (ವಂಚನೆ) ಅಡಿಯಲ್ಲಿ ರಮೇಶ್ ಜಾರಕಿಹೊಳಿ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap