ಹುಬ್ಬಳ್ಳಿ:
ಕರ್ನಾಟಕದಲ್ಲಿ ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರಿಗೆ ಬಿಜೆಪಿ ಟಿಕೆಟ್ ನೀಡುವುದೇ ಎಂಬ ಅನಿಶ್ಚಿತತೆಯ ನಡುವೆಯೇ, ಈ ವಿಷಯ ಪಕ್ಷದ ಹೈಕಮಾಂಡ್‌ನ ಪರಿಶೀಲನೆಯಲ್ಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಶುಕ್ರವಾರ ಹೇಳಿದ್ದಾರೆ.
ಈ ವಾರದ ಆರಂಭದಲ್ಲಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುವ ಮೊದಲು ಬಿಜೆಪಿ ವರಿಷ್ಠರು, ಇತರರಿಗೆ ದಾರಿ ಮಾಡಿಕೊಡುವಂತೆ ಶೆಟ್ಟರ್‌ಗೆ ಸೂಚಿಸಿದ್ದರು, ಆದರೆ ಅವರು ಕೊನೆಯ ಬಾರಿಗೆ ಸ್ಪರ್ಧಿಸಲು ಬಯಸುವುದಾಗಿ ಹೇಳಿದ್ದರು. ಹೀಗಾಗಿ ಅವರಿಗೆ ಟಿಕೆಟ್ ನೀಡುವ ಸಂಬಂಧ ಪಕ್ಷ ಚಿಂತನೆ ನಡೆಸುತ್ತಿದೆ ಎಂದು ಹೇಳಿದರು.
ಜಗದೀಶ್ ಶೆಟ್ಟರ್ ವರು ಪ್ರತಿನಿಧಿಸುವ ಹುಬ್ಬಳ್ಳಿ-ಧಾರವಾಡ ಕ್ಷೇತ್ರಕ್ಕೆ ಪಕ್ಷ ಇನ್ನೂ ಅಭ್ಯರ್ಥಿಯನ್ನು ಘೋಷಿಸಿಲ್ಲ. ”ಜಗದೀಶ್ ಶೆಟ್ಟರ್ ಗೆ ಟಿಕೆಟ್ ವಿಚಾರ ಪಕ್ಷದ ರಾಷ್ಟ್ರೀಯ ನಾಯಕತ್ವದ ಪರಿಶೀಲನೆಯಲ್ಲಿದೆ, ಜಗದೀಶ್ ಶೆಟ್ಟರ್ ಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಲಾಗಿದೆ, ಶೆಟ್ಟರ್ ಮತ್ತು ನಾನು ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದೆವು, ಎಲ್ಲವೂ ಸುಸೂತ್ರವಾಗಿ ಬಗೆಹರಿಯಲಿದೆ ಎಂದು ತಿಳಿಸಿದರು.