ಬೆಂಗಳೂರು:
ಭಾರತೀಯ ಹವಾಮಾನ ಇಲಾಖೆ (IMD) ಭಾರತದ ಉತ್ತರದ ಕೆಲವು ರಾಜ್ಯಗಳಲ್ಲಿ ಬುಧವಾರದವರೆಗೆ ಹಗುರದಿಂದ ಸಾಧಾರಣ ಮಳೆ ಮತ್ತು ಹಿಮಪಾತದ ಮುನ್ಸೂಚನೆ ನೀಡಿದೆ.
ಕರ್ನಾಟಕದ ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು, ಬೆಂಗಳೂರು, ಬೀದರ್, ಧಾರವಾಡ, ಹುಬ್ಬಳ್ಳಿ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಚಳಿ ಹೆಚ್ಚಾಗುತ್ತಲೇ ಇದೆ.
ಕಾರವಾರದಲ್ಲಂತೂ ಕಾಶ್ಮೀರದ ರೀತಿಯ ವಾತಾವರಣ ನಿರ್ಮಾಣವಾಗಿದೆ. ಇನ್ನೂ 4 ದಿನಗಳ ಕಾಲ ರಾಜ್ಯಾದ್ಯಂತ ಚಳಿ ಮುಂದುವರೆಯಲಿದೆ. ಮಲೆನಾಡು, ಕರಾವಳಿ, ಕೊಡಗು, ಬೆಂಗಳೂರು, ಉತ್ತರ ಕರ್ನಾಟಕದ ಮಂದಿ ಕೊರೆಯುವ ಚಳಿಗೆ ಕಂಗಾಲಾಗಿದ್ದಾರೆ. ಇನ್ನೊಂದೆಡೆ ನೆರೆಯ ರಾಜ್ಯಗಳಲ್ಲಿ ಚಳಿಯ ಜೊತೆಗೆ ಮಳೆಯೂ ಮುಂದುವರೆದಿದೆ.
ಭಾರತೀಯ ಹವಾಮಾನ ಇಲಾಖೆ (IMD) ಭಾರತದ ಉತ್ತರದ ಕೆಲವು ರಾಜ್ಯಗಳಲ್ಲಿ ಬುಧವಾರದವರೆಗೆ (ಡಿಸೆಂಬರ್ 29) ಹಗುರದಿಂದ ಸಾಧಾರಣ ಮಳೆ ಮತ್ತು ಹಿಮಪಾತದ ಮುನ್ಸೂಚನೆ ನೀಡಿದೆ.
ಇಂದು ಜಮ್ಮು ಮತ್ತು ಕಾಶ್ಮೀರ, ಲಡಾಖ್ ಮತ್ತು ಹಿಮಾಚಲ ಪ್ರದೇಶದ ಮೇಲೆ ಮಳೆ ಮತ್ತು ಹಿಮಪಾತದ ಸಾಧ್ಯತೆ ಹೆಚ್ಚಾಗಿದೆ. ಉತ್ತರಾಖಂಡದಲ್ಲಿ ಇಂದಿನಿಂದ ಬುಧವಾರದವರೆಗೆ ಇದೇ ರೀತಿಯ ಹವಾಮಾನವಿರಲಿದೆ.
ಕೇಂದ್ರ ಹವಾಮಾನ ಮುನ್ಸೂಚನೆ ಸಂಸ್ಥೆ ನೀಡಿದ ಮಾಹಿತಿ ಪ್ರಕಾರ, ಇಂದು ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ ಮತ್ತು ರಾಜಸ್ಥಾನಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಪ್ರದೇಶದಲ್ಲಿ ಇಂದಿನಿಂದ ಬುಧವಾರದವರೆಗೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಇಂದು ಪೂರ್ವ ಮತ್ತು ಪಕ್ಕದ ಪಶ್ಚಿಮ ಉತ್ತರ ಪ್ರದೇಶ ಮತ್ತು ಪೂರ್ವ ರಾಜಸ್ಥಾನದಲ್ಲಿ ಗುಡುಗು, ಮಿಂಚು ಮತ್ತು ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ.
ಮಧ್ಯಪ್ರದೇಶ, ವಿದರ್ಭ ಮತ್ತು ಛತ್ತೀಸ್‌ಗಢದಲ್ಲಿ ಇನ್ನೆರಡು ದಿನ ಮಳೆ ಬೀಳಲಿದೆ. ಆದರೆ ಪೂರ್ವ ಭಾಗದಲ್ಲಿ ಬಿಹಾರ, ಜಾರ್ಖಂಡ್, ಒಡಿಶಾ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಇಂದಿನಿಂದ ಡಿಸೆಂಬರ್ 30ರ ಅವಧಿಯಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಇಂದು ಪಶ್ಚಿಮ ಬಂಗಾಳ, ಸಿಕ್ಕಿಂನಲ್ಲಿ ಗುಡುಗು, ಮಿಂಚು ಮತ್ತು ಆಲಿಕಲ್ಲು ಮಳೆಯ ಮುನ್ಸೂಚನೆ ನೀಡಲಾಗಿದೆ.
ಇಂದು ಮತ್ತು ನಾಳೆ ಪೂರ್ವ ಮಧ್ಯಪ್ರದೇಶ, ವಿದರ್ಭ ಮತ್ತು ಛತ್ತೀಸ್‌ಗಢದಲ್ಲಿ ಹಾಗೂ ಇಂದು ಪಶ್ಚಿಮ ಮಧ್ಯಪ್ರದೇಶ, ಬಿಹಾರ ಮತ್ತು ಜಾರ್ಖಂಡ್ನಲ್ಲಿ ಮಳೆಯಾಗಲಿದೆ.
ಬಿಹಾರದಲ್ಲಿ ಬುಧವಾರ ಮತ್ತು ಗುರುವಾರ ಶೀತ ಗಾಳಿಯ ಮುನ್ಸೂಚನೆಯಿದೆ. ಆದರೆ ಪಂಜಾಬ್, ಹರಿಯಾಣ ಮತ್ತು ಚಂಡೀಗಢದಲ್ಲಿ ಡಿಸೆಂಬರ್ 31ರಂದು ಇದೇ ರೀತಿಯ ಪರಿಸ್ಥಿತಿ ಇರಲಿದೆ.
“ಡಿಸೆಂಬರ್ 31ರಂದು ಪಂಜಾಬ್, ಹರಿಯಾಣ ಮತ್ತು ಚಂಡೀಗಢದಲ್ಲಿ ಶೀತ ಗಾಳಿಯ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ” ಎಂದು IMD ತಿಳಿಸಿದೆ.
ಇವುಗಳಲ್ಲದೆ, ಮುಂದಿನ 3 ದಿನಗಳಲ್ಲಿ ಪಂಜಾಬ್, ಹರಿಯಾಣ ಮತ್ತು ಉತ್ತರ ರಾಜಸ್ಥಾನದಲ್ಲಿ ಮತ್ತು ಇಂದು ಉತ್ತರ ಪ್ರದೇಶ, ಸೌರಾಷ್ಟ್ರ ಮತ್ತು ಕಚ್‌ನಲ್ಲಿ ದಟ್ಟವಾದ ಮಂಜು ಇರುತ್ತದೆ. ಪೂರ್ವ ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ವಿದರ್ಭದಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಇಂದು ಸಿಡಿಲು ಮತ್ತು ಆಲಿಕಲ್ಲು ಸಹಿತ ಮಳೆಯಾಗಬಹುದು.
ಇಂದು ವಿದರ್ಭ, ಛತ್ತೀಸ್‌ಗಢ ಮತ್ತು ಪೂರ್ವ ಮಧ್ಯಪ್ರದೇಶದಲ್ಲೂ ಮಳೆಯಾಗುವ ನಿರೀಕ್ಷೆಯಿದೆ. ಬಿಹಾರ, ಇಂದೋರ್ ಮತ್ತು ಬಿಲಾಸ್‌ಪುರದಂತಹ ಸ್ಥಳಗಳಲ್ಲಿ ಬುಧವಾರದವರೆಗೆ ಗುಡುಗು ಸಹಿತ ಮಳೆಯಾಗಲಿದೆ.
ಡಿಸೆಂಬರ್ 29ರವರೆಗೆ ಪಶ್ಚಿಮ ಹಿಮಾಲಯದ ಪ್ರದೇಶದಲ್ಲಿ ಮಳೆ ಮತ್ತು ಹಿಮಪಾತ ಉಂಟಾಗಲಿದೆ. ಇಂದು ಈ ಪ್ರದೇಶದಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗಲಿದೆ.
ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ದೆಹಲಿಯಲ್ಲಿ ಇಂದಿನಿಂದ ಡಿ. 29ರ ಅವಧಿಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ. ಇಂದು ರಾಜಸ್ಥಾನ ಮತ್ತು ಉತ್ತರ ಪ್ರದೇಶದಲ್ಲಿ ಮಳೆ ಸುರಿಯಲಿದೆ. ಇಂದಿನಿಂದ ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್ ಮತ್ತು ಮಣಿಪುರದಲ್ಲಿ ಆಲಿಕಲ್ಲು ಮಳೆಯಾಗಲಿದೆ.
ಮುಂದಿನ 2 ದಿನಗಳಲ್ಲಿ ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ