ಬೆಂಗಳೂರು:

ಬಾಗೇಪಲ್ಲಿ ಕ್ಷೇತ್ರದ ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.ಹಿರಿಯ ಕಾರ್ಮಿಕ ಹಾಗೂ ರೈತ ಮುಖಂಡರು, ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಕ್ಷೇತ್ರದ ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ ನಿಧನರಾದ ವಿಷಯ ತಿಳಿದು ದುಃಖಿತನಾಗಿದ್ದೇನೆ. ಭಗವಂತ ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ, ಅವರ ಕುಟುಂಬ ವರ್ಗಕ್ಕೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
-ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ
ಪ್ರಗತಿಪರ ಚಿಂತಕರು, ಕೃಷಿ-ಕಾರ್ಮಿಕರ ಪರ ಹೋರಾಟಗಾರರು, ಮಾಜಿ ಶಾಸಕರಾದ ಕಾಮ್ರೇಡ್ ಜಿ.ವಿ.ಶ್ರೀರಾಮರೆಡ್ಡಿ ಅವರ ನಿಧನದ ಸುದ್ದಿ ನನಗೆ ತೀವ್ರ ದುಃಖ ಉಂಟು ಮಾಡಿದೆ. ಎರಡು ಬಾರಿ ಬಾಗೇಪಲ್ಲಿ ಕ್ಷೇತ್ರದಿಂದ ಆಯ್ಕೆ ಆಗಿದ್ದ ಅವರು, ಮಾದರಿ ಜನಪ್ರತಿನಿಧಿಯಷ್ಟೇ ಅಲ್ಲ, ಅತ್ಯುತ್ತಮ ಸಂಸದೀಯ ಪಟುವೂ ಹೌದು. ಅವರ ಅಗಲಿಕೆಯಿಂದ ರಾಜ್ಯದಲ್ಲಿ ನಡೆಯುತ್ತಿರುವ ವೈಚಾರಿಕಪರ ಹೋರಾಟದಲ್ಲಿ ದೊಡ್ಡ ಶೂನ್ಯವನ್ನೇ ಸೃಷ್ಟಿಸಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಈ ದುಃಖವನ್ನು ಭರಿಸುವ ಶಕ್ತಿ ಅವರ ಅಭಿಮಾನಿಗಳಿಗೆ ಭಗವಂತ ಕರುಣಿಸಲಿ.
-ಎಚ್.ಡಿ. ಕುಮಾರಸ್ವಾಮಿ, ಮಾಜಿ ಸಿಎಂ.
ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಜಿ.ವಿ. ಶ್ರೀರಾಮರೆಡ್ಡಿ, ಯಾವುದೇ ಸರ್ಕಾರದ ಜನವಿರೋಧಿ ನೀತಿಗಳನ್ನು ವಿರೋಧ ಮಾಡುವುದರಲ್ಲಿ ಮುಂಚೂಣಿಯಲ್ಲಿದ್ದರು. ಆ ಮೂಲಕ ರಾಜಕೀಯ ರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ದುಃಖವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ದೇವರು ನೀಡಲಿ.
-ನಳಿನ್‌ಕುಮಾರ್ ಕಟೀಲ್, ಬಿಜೆಪಿ ರಾಜ್ಯಾಧ್ಯಕ್ಷ
ಜಿ.ವಿ.ಶ್ರೀರಾಮರೆಡ್ಡಿ ಎರಡು ಬಾರಿ ಶಾಸಕರಾಗಿದ್ದು, ಕ್ಷೇತ್ರಕ್ಕೆ ದುಡಿದು ತಮ್ಮ ಅಪಾರ ಕೊಡುಗೆಯನ್ನು ನೀಡುವ ಮೂಲಕ ಕ್ಷೇತ್ರದ, ರಾಜ್ಯದ ಜನರ ವಿಶ್ವಾಸ ಗಳಿಸಿರುವುದು ಗಮನಾರ್ಹ. ಸಾಮಾಜಿಕ ಹೋರಾಟದಿಂದ ಸಮಾಜ ಸುಧಾರಣೆಗಾಗಿ ಶ್ರಮಿಸಿದರು. ಅವರ ಆತ್ಮಕ್ಕೆ ಚಿರಶಾಂತಿ, ಕುಟುಂಬ ವರ್ಗದವರಿಗೆ, ಅಭಿಮಾನಿ ಬಳಗಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ.
-ವಿಶ್ವೇಶ್ವರ ಹೆಗಡೆ ಕಾಗೇರಿ, ಅಧ್ಯಕ್ಷರು, ವಿಧಾನಸಭೆ
ಕಮ್ಯುನಿಸ್ಟ್ ವಿಚಾರಧಾರೆಗಳಿಗೆ ಇಡೀ ಜೀವನವನ್ನೇ ಮುಡಿಪಾಗಿಟ್ಟಿದ್ದ, ವಿಧಾನಸಭೆಯಲ್ಲಿ ವಿದ್ಯಾರ್ಥಿ-ಯುವಜನರ, ರೈತ-ಕಾರ್ಮಿಕರ ಜನಪರ ಧ್ವನಿಯಾಗಿದ್ದ ಬಾಗೇಪಲ್ಲಿಯ ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ ಜಿವಿಎಸ್ ಎಂದೇ ಚಿರಪರಿಚಿತರು. ನಿಧನದಿಂದ ಜಾತ್ಯತೀತ ಶಕ್ತಿಗಳ ಒಗ್ಗೂಡಿಸುವಲ್ಲಿ, ಕೋಮುವಾದಿ ಶಕ್ತಿಗಳ ವಿರುದ್ಧ ಹೋರಾಡುತ್ತಿದ್ದ ರಾಜ್ಯದ ಕೊಂಡಿ ಕಳಚಿದಂತಾಗಿದೆ. ಧುರಿತ ಕಾಲದಲ್ಲಿ ಬದ್ಧತೆಯ ಹೋರಾಟಗಾರನನ್ನು ಈ ನೆಲ ಕಳೆದುಕೊಂಡಿದೆ. ಸಂಗಾತಿ ರೆಡ್ಡಿರ ಕುಟುಂಬ ಹಾಗೂ ಅಪಾರ ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ.
-ಬಿ.ಕೆ. ಹರಿಪ್ರಸಾದ್, ಕಾಂಗ್ರೆಸ್ ಮುಖಂಡ
ಸಿಪಿಎA ಪಕ್ಷದ ಹಿರಿಯ ನಾಯಕ ಮತ್ತು ಮಾಜಿ ಶಾಸಕ ಜಿ.ವಿ. ಶ್ರೀರಾಮರೆಡ್ಡಿ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ಬಡವರು, ಕಾರ್ಮಿಕರು ಮತ್ತು ರೈತರ ಪರ ಹೋರಾಟಕ್ಕೆ ಜೀವನವನ್ನೇ ಮುಡಿಪಾಗಿಟ್ಟಿದ್ದ ರೆಡ್ಡಿ ಅವರು, ಇತ್ತೀಚಿನ ವರ್ಷಗಳಲ್ಲಿ ಕೋಮುವಾದದ ವಿರುದ್ಧ ಗಟ್ಟಿದನಿಯಾಗಿದ್ದರು.
-ಸಿದ್ದರಾಮಯ್ಯ, ಮಾಜಿ ಸಿಎಂ.
ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸುತ್ತೇನೆ. ಶ್ರೀಯುತರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ, ಅವರ ಕುಟುಂಬದ ಸದಸ್ಯರು, ಬಂಧು-ಬಳಗಕ್ಕೆ ಅಗಲಿಕೆಯನ್ನು ಭರಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
-ಡಾ.ಕೆ. ಸುಧಾಕರ್, ಆರೋಗ್ಯ ಸಚಿವ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








