ಬೆಂಗಳೂರು
ಬೆಂಗಳೂರಿನ ಸ್ಯಾಟಲೈಟ್ ಟೌನ್ ರಿಂಗ್ ರೋಡ್ (ಎಸ್‌ಟಿಆರ್‌ಆರ್) ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್‌ಡಿ ಕುಮಾರಸ್ವಾಮಿ ಬುಧವಾರ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ದೆಹಲಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿರುವ ಪ್ರಮುಖ ಯೋಜನೆ ಸ್ಯಾಟಲೈಟ್ ಟೌನ್ ರಿಂಗ್ ರೋಡ್ ಯೋಜನೆಯ ಮೌಲ್ಯಮಾಪನ ಸಂಬಂಧ ಅವರು ಮಾತುಕತೆ ನಡೆಸಿದ್ದಾರೆ.
ಸ್ಯಾಟಲೈಟ್ ಟೌನ್ ರಿಂಗ್ ರೋಡ್ಗಾಗಿ ಮಾಡುವ ಭೂಸ್ವಾಧೀನಕ್ಕೆ ರೈತರಿಗೆ ತ್ವರಿತವಾಗಿ ಪರಿಹಾರವನ್ನು ವಿತರಿಸುವಂತೆ ಗಡ್ಕರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ. ಈ ಯೋಜನೆಯು ಕರ್ನಾಟಕದಲ್ಲಿ ಸರಿಸುಮಾರು 135 ಕಿಮೀ ವ್ಯಾಪಿಸಲಿದ್ದು, ಅಂದಾಜು ವೆಚ್ಚ 4,750 ಕೋಟಿ ರೂ. ಆಗಿದೆ.
ಕೇಂದ್ರ ಸರ್ಕಾರದ ಈ ಮಹತ್ವಾಕಾಂಕ್ಷೆಯ ಉಪಕ್ರಮವು ಕೈಗಾರಿಕಾ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡುವುದರ ಜತೆಗೆ, ಬೆಂಗಳೂರಿನ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ನೆರವಾಗಲಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಮಂಡ್ಯ ರಿಂಗ್ ರೋಡ್ ಯೋಜನೆಯ ಬಾಕಿ ಉಳಿದಿರುವ ಕಾಮಗಾರಿ ಸೇರಿದಂತೆ ಕರ್ನಾಟಕದ ಪ್ರಮುಖ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಬಗ್ಗೆಯೂ ಗಡ್ಕರಿ ಜತೆ ಮಾತುಕತೆ ನಡೆಸಿರುವುದಾಗಿ ಕುಮಾರಸ್ವಾಮಿ ತಿಳಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್ ಸಂದೇಶದಲ್ಲಿ ಅವರು ವಿವರಗಳನ್ನು ಹಂಚಿಕೊಂಡಿದ್ದಾರೆ.
ಪಾಂಡವಪುರ ಮತ್ತು ಕಿರಂಗೂರು NH-150 (ಜೇವರ್ಗಿ-ಚಾಮರಾಜನಗರ ಹೆದ್ದಾರಿ ಅಭಿವೃದ್ಧಿ), ಆಂಧ್ರಪ್ರದೇಶ ಮತ್ತು ಕರ್ನಾಟಕದ ಕುಪ್ಪಂ-ಬಂಗಾರಪೇಟೆ-ಕೋಲಾರ-ಚಿಂತಾಮಣಿ ಸಂಪರ್ಕಿಸುವ NH-42, ಗಜಾನನ ವೃತ್ತ (ಚಿಂತಾಮಣಿ) ಮತ್ತು ಚೇಳೂರು ನಡುವೆ NH-69 ಕಾಮಗಾರಿ ಸೇರಿದಂತೆ ವಿವಿಧ ಕಾಮಗಾರಿಗಳ ಬಗ್ಗೆ ಚರ್ಚಿಸಿರುವುದಾಗಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಸಚಿವರು ನಮ್ಮ ಮನವಿಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಮತ್ತು ಈ ಎಲ್ಲಾ ಯೋಜನೆಗಳನ್ನು ಪರಿಶೀಲಿಸುವುದಾಗಿ ಭರವಸೆ ನೀಡಿದ್ದಾರೆ. ಕರ್ನಾಟಕದ ಹೆದ್ದಾರಿಗಳ ಅಭಿವೃದ್ಧಿಗೆ ನಿರಂತರ ಬೆಂಬಲಕ್ಕಾಗಿ ಗಡ್ಕರಿ ಅವರಿಗೆ ಧನ್ಯವಾದಗಳು ಎಂದು ಕುಮಾರಸ್ವಾಮಿ ಉಲ್ಲೇಖಿಸಿದ್ದಾರೆ.