ಚೆನ್ನೈ
ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಸಿಗದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದ್ದ ಎಂಡಿಎಂಕೆ ಪಕ್ಷದ ಹಿರಿಯ ನಾಯಕ ಈರೋಡ್ ಸಂಸದ ಗಣೇಶ ಮೂರ್ತಿ ಸಾವನ್ನಪ್ಪಿದ್ದಾರೆ. ಕೊಯಮತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಘಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಣೇಶ ಮೂರ್ತಿ ಇಂದು ಕೊನೆಯುಸಿರೆಳೆದಿದ್ದಾರೆ.
ಗಣೇಶ್ ಮೂರ್ತಿ ಅವರು ಎಂಡಿಎಂಕೆ ಪಕ್ಷದ ಹಿರಿಯ ನಾಯಕರಲ್ಲಿ ಒಬ್ಬರಾಗಿದ್ದು, 2019ರ ಲೋಕಸಭೆ ಚುನಾವಣೆಯಲ್ಲಿ ಈರೋಡೆ ಕ್ಷೇತ್ರದಿಂದ ಡಿಎಂಕೆ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸಂಸದರಾಗಿದ್ದರು. ಈ ಬಾರಿಯೂ ಸಹ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವಿನ ನಿರೀಕ್ಷೆಯಲ್ಲಿದ್ದರು.
ಗಣೇಶ್ ಮೂರ್ತಿ 2024ರ ಸಂಸತ್ ಚುನಾವಣೆಯಲ್ಲಿ ತಮಗೆ ಮತ್ತೊಮ್ಮೆ ಸ್ಪರ್ಧಿಸಲು ಅವಕಾಶ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದರು. ಈ ಬಾರಿ ಎಂಡಿಎಂಕೆ ಯಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳದೇ ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತಿದೆ. ಹೀಗಾಗಿ ಟಿಕೆಟ್ ಸಿಗದ ಕಾರಣ ಮನನೊಂದು ಗಣೇಶ್ ಮೂರ್ತಿ ಮಾರ್ಚ್ 24ರಂದು ಮಾತ್ರ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿತ್ತು.
ಗಣೇಶ್ ಮೂರ್ತಿ ಅವರ ಸ್ಥಿತಿ ಅರಿತ ಕುಟುಂಬಸ್ಥರು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದರು. ಕೊಯಮತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಘಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೆ ದುರಾದೃಷ್ಟವಶಾತ್ ಇಂದು ಬೆಳಗ್ಗೆ ಹೃದಯಾಘಾತವಾಗಿ ಗಣೇಶ ಮೂರ್ತಿ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ವರದಿಯಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ