ಬೆಂಗಳೂರು :
ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ರಾಜ್ಯದಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸುಮಾರು 2.50 ಲಕ್ಷ ಹುದ್ದೆಗಳನ್ನು ಕ್ರಮೇಣ ಭರ್ತಿ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ವಿಧಾನ ಪರಿಷತ್ ನಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಿಎಂ ಬೊಮ್ಮಾಯಿ, ರಾಜ್ಯದಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2.50 ಲಕ್ಷ ಹುದ್ದೆಗಳನ್ನು ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿ ಭರ್ತಿ ಮಾಡಲಾಗುವುದು. ಕಳೆದ ಹಲವಾರು ವರ್ಷಗಳಿಂದ ಆರ್ಥಿಕ ಮಿತವ್ಯಯದ ಕಾರಣ ಹೊಸ ನೇಮಕಾತಿ ನಡೆದಿಲ್ಲ.ಆದರೆ ಅವಶ್ಯಕತೆ ಇದ್ದ ಹುದ್ದೆಗಳಿಗೆ ನೇಮಕಾತಿ ಮಾಡಿಕೊಂಡು ಬರಲಾಗುತ್ತಿದೆ ಎಂದರು.
ತಾವು ಗೃಹ ಸಚಿವರಾಗಿದ್ದಾಗ 16 ಸಾವಿರ ಪೊಲೀಸರ ನೇಮಕಾತಿಗೆ ಒಪ್ಪಿಗೆ ನೀಡಿ ಈಗಾಗಲೇ ಅಂತಿಮ ಹಂತದಲ್ಲಿದೆ. ಅದೇ ರೀತಿ 15 ಸಾವಿರ ಶಿಕ್ಷಕರ ನೇಮಕಕ್ಕೆ ಒಪ್ಪಿಗೆ ನೀಡಿ ಪ್ರಕ್ರಿಯೆ ಆರಂಭವಾಗಿದೆ. ಕಲ್ಯಾಣ ಕರ್ನಾಟಕ ಭಾಗದ 14 ಸಾವಿರ ಹುದ್ದೆಗಳ ನೇಮಕಾತಿಗೆ ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
