ಬೆಂಗಳೂರು
2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ವಿಶೇಷ ಅವಕಾಶ ನೀಡಲುನಿರ್ಧಾರ ಮಾಡಲಾಗಿದೆ. ಜೊತೆಗೆ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ವಯೋಮಿತಿ ಸಡಿಲಿಸಿ ಅರ್ಜಿ ಸಲ್ಲಿಸುವುದಕ್ಕೆ ವಿಶೇಷ ಅವಕಾಶ ನೀಡಲಾಗುವುದು ಎಂದು ಇಂದು (ಶುಕ್ರವಾರ) ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಕಾನೂನು ಸಚಿವ ಎಚ್ಕೆ ಪಾಟೀಲ್ ಹೇಳಿದ್ದಾರೆ.
ಇನ್ನು ಕರ್ನಾಟಕದಲ್ಲಿ ಖಾಲಿ ಇರುವ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳನ್ನು ಹಲವು ವರ್ಷಗಳಿಂದ ಭರ್ತಿ ಮಾಡುವ ಕಾರ್ಯ ಆಗಿರಲಿಲ್ಲ. ಈ ಮಧ್ಯೆ ಕೋವಿಡ್ ಸೇರಿದಂತೆ ವಿವಿಧ ಕಾರಣಗಳಿಗೆ ನೇಮಕಾತಿ ವಿಳಂಬವಾಗಿತ್ತು. ಈ ಬಾರಿ 2023-24ನೇ ಸಾಲಿನಲ್ಲಿ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ನೇಮಕಾತಿಗೆ ಗರಿಷ್ಠ 3 ವರ್ಷ ವಯೋಮಿತಿ ಸಡಿಲಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ.
2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ನೇಮಕಾತಿ ಅಧಿಸೂಚನೆಯಲ್ಲಿ ಗ್ರೂಪ್ ಎ ಮತ್ತು ಗ್ರೂಪ್ ಬಿ ಹುದ್ದೆಗಳಿಗೆ ಆಕಾಂಕ್ಷಿಗಳಾಗಿರುವ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ ಬದಲಾಗಿ 38 ವರ್ಷದವರೆಗೆ, ಒಬಿಸಿ ವರ್ಗದವರಿಗೆ 38 ವರ್ಷ ಬದಲಿಗೆ 41 ವರ್ಷದವರೆಗೆ, ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷದ ಬದಲಿಗೆ 43 ವರ್ಷದ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತದೆ. ಆದರೆ ಈ ನಿಯಮವು ಈ ಬಾರಿಗೆ ಮಾತ್ರ ಅನ್ವಯವಾಗಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ