ಕಾರವಾರ
ಜಿಲ್ಲೆಯ ಜನರ ಬಹುದಿನದ ಬೇಡಿಕೆಯಾದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸರ್ಕಾರದ ಮನ್ನಣೆ ಸಿಕ್ಕಿದೆ. ಜಿಲ್ಲೆಯಲ್ಲಿ ನಿರ್ಮಾಣವಾಗಲಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಜಾಗ ಮಂಜೂರು ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಜಿಲ್ಲೆಗೆ ಸುಸಜ್ಜಿತ ಆಸ್ಪತ್ರೆ ಬೇಕು ಎಂದು ದೊಡ್ಡ ಹೋರಾಟವೇ ನಡೆದಿತ್ತು, ಸಾಮಾಜಿಕ ಜಾಲತಾಣದಲ್ಲಿಯೂ ಅಭಿಯಾನ ನಡೆಸಲಾಗಿತ್ತು.
ಜಿಲ್ಲೆಯ ಕುಮಟಾ ತಾಲೂಕಿನಲ್ಲಿ ಏಕಲವ್ಯ ಮಾದರಿ ವಸತಿ ಶಾಲೆಗಾಗಿ ಮೀಸಲಿಟ್ಟಿದ್ದ ಸರ್ವೆ ನಂಬರ್ 440 ಅ/ಬದ 15.35 ಎಕರೆ ಜಾಗವನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗೆ ನೀಡಲಾಗಿದೆ. ಈ ಕುರಿತು ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಒಟ್ಟು 17.14 ಎಕರೆ ವಿಸ್ತೀರ್ಣದ ಜಾಗವನ್ನು ವಸತಿ ಶಾಲೆ ನಿರ್ಮಾಣಕ್ಕೆ ಮೀಸಲಿಡಲಾಗಿತ್ತು. ಕುಮಟಾದಲ್ಲಿ ಆಸ್ಪತ್ರೆ ಸ್ಥಾಪನೆಗೆ ಜಾಗದ ಕೊರತೆ ಇದ್ದ ಕಾರಣ ಈ ಜಾಗವನ್ನು ಮಂಜೂರು ಮಾಡಲಾಗಿದೆ.
