ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿಗಳಿಗೆ ಜಾಮೀನು ಮಂಜೂರು

ಬೆಂಗಳೂರು:

    ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳಿಗೆ ಹೈಕೋರ್ಟ್‌ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ನ್ಯಾಯಮೂರ್ತಿ ಎಸ್‌.ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿದೆ.

   ಆರೋಪಿಗಳಾದ ಹುಕ್ಕೇರಿಯ ಭರತ್ ಜಯವಂತ ಕುರಾನೆ (42), ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದ (ಈ ಹಿಂದಿನ ಹೆಸರು ಔರಂಗಾಬಾದ್) ಶ್ರೀಕಾಂತ್ ಪಂಗಾರ್ಕರ್ (48), ಶಿಕಾರಿಪುರದ ಸುನಿತ್ ಕುಮಾರ್ (42) ಮತ್ತು ಮಹಾರಾಷ್ಟ್ರ ಸತಾರದ ಸುಧನ್ವ ಗೋಂದಲೇಕರ್ (43)ಗೆ ಜಾಮೀನು ಮಂಜೂರು ಮಾಡಿದೆ.

   ಆರೋಪಿಗಳು ತಲಾ ಒಂದು ಲಕ್ಷ ರೂಪಾಯಿ ಮೌಲ್ಯದ ವೈಯಕ್ತಿಕ ಬಾಂಡ್, ಇಬ್ಬರ ಭದ್ರತಾ ಖಾತರಿ ಒದಗಿಸಬೇಕು. ವಿಚಾರಣಾಧೀನ ನ್ಯಾಯಾಲಯ ವಿನಾಯಿತಿ ನೀಡದ ಹೊರತು ವಿಚಾರಣೆಯ ಎಲ್ಲಾ ದಿನ ಆರೋಪಿಗಳು ವಿಚಾರಣೆಗೆ ಹಾಜರಾಗಬೇಕು. ಅರ್ಜಿದಾರರು ಪ್ರಾಸಿಕ್ಯೂಷನ್ ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು ಮತ್ತು ಇಂಥಹದ್ದೇ ಆರೋಪದಲ್ಲಿ ಮತ್ತೆ ಭಾಗಿಯಾಗುವಂತಿಲ್ಲ. ಪ್ರಕರಣ ಇತ್ಯರ್ಥವಾಗುವವರೆಗೆ ನ್ಯಾಯಾಲಯ ಅನುಮತಿಸದ ಹೊರತು ಅರ್ಜಿದಾರರು ವಿಚಾರಣಾಧೀನ ನ್ಯಾಯಾಲಯದ ವ್ಯಾಪ್ತಿ ತೊರೆಯುವಂತಿಲ್ಲ. ಈ ಪೈಕಿ ಯಾವುದೇ ಷರತ್ತು ಉಲ್ಲಂಘಿಸಿದರೂ ಪ್ರಾಸಿಕ್ಯೂಷನ್ ಜಾಮೀನು ರದ್ದತಿಗೆ ಕೋರಬಹುದು ಎಂದು ನ್ಯಾಯಾಲಯ ಹೇಳಿದೆ.

   ಇದರೊಂದಿಗೆ ಪ್ರಕರಣದ 18 ಆರೋಪಿಗಳ ಪೈಕಿ 8 ಆರೋಪಿಗಳಿಗೆ ಜಾಮೀನು ದೊರೆತಂತಾಗಿದೆ. ಈ ಹಿಂದೆ ನಾಲ್ವರು ಆರೋಪಿಗಳಿಗೆ ಜಾಮೀನು ಮಂಜೂರಾಗಿತ್ತು.

Recent Articles

spot_img

Related Stories

Share via
Copy link