ಮುಖ್ಯಮಂತ್ರಿಯಾಗಿ ಯಡಿಯೂರಪ್ಪನವರೆ ಮುಂದುವರಿಕೆ : ಮಸಾಲೆ ಜಯರಾಮ್

ಗುಬ್ಬಿ: 

     ರಾಜ್ಯದ ಮುಖ್ಯಮಂತ್ರಿಯಾಗಿ ಯಡಿಯೂರಪ್ಪನವರೆ ಪೂರ್ಣಾವಧಿಗೆ ಮುಂದುವರೆಯುವರು ಎಂದು ತುರುವೇಕೆರೆ ಕ್ಷೇತ್ರದ ಶಾಸಕ ಮಸಾಲೆ ಜಯರಾಮ್ ಅವರು ಹೇಳಿದರು.

     ಅವರು ಜೂ. 08 ರಂದು ಗುಬ್ಬಿ ಹೊರವಲಯದ ಹೇರೂರಿನಲ್ಲಿರುವ ಕೋವಿಡ್ ಆರೈಕೆ ಕೇಂದ್ರಕ್ಕೆ ಭೇಟಿ ನೀಡಿ ಮಾತನಾಡುತ್ತಿದ್ದರು. ಯಡಿಯೂರಪ್ಪನವರು ಕೋವಿಡ್ ಸಂಕಷ್ಟ ಕಾಲದಲ್ಲಿಯೂ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆಗೆ ಅವಕಾಶವೇ ಇಲ್ಲ ಎಂದು ಹೇಳಿದರು.

ಸಿ.ಪಿ.ಯೋಗಿಶ್ವರ್ ಅವರಿಗೆ ಮಂತ್ರಿಮಂಡಲದಲ್ಲಿ ಇರಲು ಇಷ್ಟವಿಲ್ಲದಿದ್ದರೆ ಹೊರಹೋಗಲು ಯಾರ ಅಭ್ಯಂತರವು ಇಲ್ಲ. ನಾವೆಲ್ಲರೂ ಮುಖ್ಯಮಂತ್ರಿಯ ಜೊತೆಗೆ ಇದ್ದು, ರಾಜ್ಯವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಶ್ರಮಿಸುತ್ತೇವೆ ಎಂದರು.
ಸರ್ಕಾರವು ವಿಶೇಷ ಪ್ಯಾಕೇಜನ್ನು ಘೋಷಣೆ ಮಾಡಿ ಅನುದಾನ ಬಿಡುಗಡೆ ಮಾಡುತ್ತಿದೆ. ಗುಬ್ಬಿ ಸಾರ್ವಜನಿಕ ಆಸ್ಪತ್ರೆಗೆ ಅಗತ್ಯವಿರುವ ಆಮ್ಲಜನಕ ಘಟಕವನ್ನು ಸ್ಥಾಪಿಸಲು ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಮಾತನಾಡಿ ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ಆಸ್ಪತ್ರೆಗೆ ಅಗತ್ಯವಿರುವ ಡಿಜಿಟಲ್ ಎಕ್ಸ್ ರೇ ಹಾಗೂ ಸ್ಕ್ಯಾನಿಂಗ್ ಕೇಂದ್ರವನ್ನು ತೆರೆಯಲು ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು. ಎಲ್ಲರ ಸಹಕಾರದಿಂದ ಹಾಗೂ ಅಧಿಕಾರಿಗಳ ಶ್ರಮದಿಂದ ಕೊರೋನ ನಿಯಂತ್ರಣಕ್ಕೆ ಬರುತ್ತಿದೆ. ಸಂಪೂರ್ಣ ನಿಯಂತ್ರಣಕ್ಕೆ ಬರುವವರೆಗೆ ಯಾವುದೇ ಕಾರಣಕ್ಕೂ ಲಾಕ್‍ಡೌನ್ ತೆರವುಗೊಳಿಸುವುದಿಲ್ಲ.

ಕೋವಿಡ್ ಮೂರನೇ ಅಲೆ ಹಾಗೂ ಬ್ಲಾಕ್‍ಫಂಗಸ್ ಅನ್ನು ಎದುರಿಸಲು ಅಗತ್ಯವಿರುವ ಎಲ್ಲಾ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ. ಜನತೆ ಹೆದರಬೇಕಾದ ಅಗತ್ಯವಿಲ್ಲ. ಅವರ ಕಷ್ಟಕ್ಕೆ ನಾವು ಸ್ಪಂದಿಸುತ್ತೇವೆ. ಕೋವಿಡ್ ಆರೈಕೆ ಕೇಂದ್ರದಲ್ಲಿ ಸೋಂಕಿತರಿಗೆ ಅಗತ್ಯವಿರುವ ಎಲ್ಲ ಮೂಲಭೂತ ಸೌಕರ್ಯಗಳನ್ನು ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

      ತಹಸೀಲ್ದಾರ್ ಡಾ.ಪ್ರದೀಪ್‍ಕುಮಾರ್ ಹಿರೇಮಠ ಅವರು ಮಾತನಾಡುತ್ತ ತಾಲ್ಲೂಕಿನಾದ್ಯಂತ ಸ್ವ್ಯಾಬ್ ಪರೀಕ್ಷೆಯನ್ನು ತೀವ್ರಗೊಳಿಸಲಾಗಿದ್ದು, ಸೋಂಕಿತರಿಗೆ ಕೋವಿಡ್ ಆರೈಕೆ ಕೇಂದ್ರದಲ್ಲಿ ವ್ಯವಸ್ಥಿತವಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಯಾವುದೇ ಗೊಂದಲಗಳಿಲ್ಲದೆ ತಾಲ್ಲೂಕಿನಲ್ಲಿ ಕೋವಿಡ್ ಲಸಿಕೆ ನೀಡುವ ಕಾರ್ಯ ಮುಂದುವರೆದಿದೆ. ಈ ತಿಂಗಳ ಅಂತ್ಯದ ವೇಳೆಗೆ 18ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಕೋವಿಡ್ ಲಸಿಕೆಯನ್ನು ನೀಡಲಾಗುವುದು ಎಂದು ತಿಳಿಸಿದರು. ಸಾರ್ವಜನಿಕರು ಇನ್ನೂ ಉತ್ತಮ ರೀತಿಯಲ್ಲಿ ಸಹಕರಿಸಿದರೆ ತಾಲ್ಲೂಕು ಅತೀ ಶೀಘ್ರದಲ್ಲೆ ಕೊರೋನ ಮುಕ್ತವಾಗಲು ಸಾಧ್ಯವಾಗುವುದು ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap