ಗುಬ್ಬಿ :
ತಾಲೂಕಿನಲ್ಲಿ ಬೆರಳೆಣಿಕೆಯಷ್ಟು ಕೊರೋನ ಪ್ರಕರಣಗಳು ಮಾತ್ರ ಪತ್ತೆಯಾಗುತ್ತಿದ್ದು, ಉದಾಸೀನ ಮಾಡದೇ ಸೋಂಕಿತ ವ್ಯಕ್ತಿಗಳು ಕಂಡುಬಂದಲ್ಲಿ ತಕ್ಷಣವೇ ಅವರನ್ನು ಕೋವಿಡ್ ಆರೈಕೆ ಕೇಂದ್ರಕ್ಕೆ ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಗುವುದು ಎಂದು ತಹಶೀಲ್ದಾರ್ ಡಾ.ಪ್ರದೀಪ್‍ಕುಮಾರ್ ಹಿರೇಮಠ್ ಅವರು ತಿಳಿಸಿದರು.
ಭಾನುವಾರ ಹೇರೂರಿನ ಕೋವಿಡ್ ಆರೈಕೆ ಕೇಂದ್ರದಲ್ಲಿ ಸೋಂಕಿತರೊಡನೆ ಸಮಾಲೋಚನೆ ನಡೆಸಿ ಮಾತನಾಡಿದ ಅವರು ಕೊರೋನ ಸೋಂಕಿನ ಯಾವುದೇ ಲಕ್ಷಣಗಳು ಕಾಣಿಸಿಕೊಂಡರೆ ಇಲ್ಲಿಗೆ ಬಂದು ಚಿಕಿತ್ಸೆ ಪಡೆದರೆ ರೋಗ ಹರಡುವುದನ್ನು ತಡೆಯುವುದರ ಜೊತೆಗೆ ಬೇಗ ಗುಣಮುಖರಾಗಲು ಸಾಧ್ಯವಾಗುತ್ತದೆ ಎಂದರು. ಇಲ್ಲಿ ಯಾವುದೇ ಮೂಲಭೂತ ಸೌಕರ್ಯಗಳಿಗೆ ತೊಂದರೆಯಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸುವಂತೆ ಹೇಳಿದರು.
ಸಾರ್ವಜನಿಕರು ಹಾಗೂ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ಶ್ರಮ ವಹಿಸಿದ್ದರಿಂದ ಕೊರೋನ ನಿಯಂತ್ರಣಗೊಳ್ಳಲು ಸಾಧ್ಯವಾಗಿದೆ. ಉದಾಸೀನತೆ ತೋರಿದರೆ ರೋಗ ಉಲ್ಭ್ಬಣಗೊಳ್ಳುವ ಸಾಧ್ಯತೆ ಇರುವುದರಿಂದ ಯಾವುದೇ ಸೋಂಕಿತರು ಮನೆಯಲ್ಲಿಯೇ ಉಳಿದುಕೊಂಡರೆ ಮನೆಯಲ್ಲಿರುವ ಆರೋಗ್ಯವಂತರು ಸೋಂಕಿಗೆ ಒಳಗಾಗುವ ಸಾಧ್ಯತೆ ಇರುವುದರಿಂದ ಇಲ್ಲಿಗೆ ಬಂದು ಚಿಕಿತ್ಸೆ ಪಡೆಯುವುದು ಸೂಕ್ತ ಎಂದರು.
ತಾಲೂಕು ಆರೋಗ್ಯಾಧಿಕಾರಿ ಡಾ.ಬಿಂದುಮಾಧವ ಅವರು ಮಾತನಾಡಿ ಸಾರ್ವಜನಿಕರು ಕೊರೋನ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುತ್ತಾ ಯಾವುದೇ ಮೂಢನಂಬಿಕೆಗೆ ಒಳಗಾಗದೆ ಕಾಲಕ್ಕೆ ಸರಿಯಾಗಿ ಕೋವಿಡ್ ಲಸಿಕೆಯನ್ನು ಪಡೆದುಕೊಳ್ಳುವಂತೆ ತಿಳಿಸಿದರು. ಈಗಾಗಲೇ ಕೊರೋನದ ಮೂರನೇ ಅಲೆಯ ಬಗ್ಗೆ ತಜ್ಞರು ಎಚ್ಚರಿಕೆಯನ್ನು ನೀಡುತ್ತಿರುವುದರಿಂದ ಎಲ್ಲರೂ ಜಾಗರೂಕತೆಯಿಂದ ಇರಬೇಕಾಗಿದೆ. ಪದೆ ಪದೆ ಕೈ ತೊಳೆಯುವುದರ ಜೊತೆಗೆ ಮಾಸ್ಕ್‍ಧರಿಸಿ, ಅಂತರವನ್ನು ಕಾಪಾಡಿಕೊಳ್ಳುವುದು ಅಗತ್ಯವಾಗಿದೆ. ಈಗ ಮಳೆಗಾಲ ಪ್ರಾರಂಭವಾಗುತ್ತಿರುವುದರಿಂದ ಮಲೇರಿಯಾ, ಡೆಂಗ್ಯೂ ಕಾಯಿಲೆಗಳು ಹರಡುವ ಸಾಧ್ಯತೆ ಇದೆ. ಆದ್ದರಿಂದ ಸಾರ್ವಜನಿಕರು ಸ್ವಚ್ಛತೆಯ ಕಡೆಗೆ ಹೆಚ್ಚು ಗಮನಹರಿಸಿ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಕಂದಾಯ ಇಲಾಖೆ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
