ಬೆಂಗಳೂರು:
ಕೇಂದ್ರ ಸಚಿವರ ವಿರುದ್ಧ ನೀಡಿದ್ದ ಹೇಳಿಕೆಗೆ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರು ಇದೀಗ ತಮ್ಮ ಹೇಳಿಕೆ ಸಂಬಂಧ ಸ್ಪಷ್ಟನೆ ನೀಡಿದ್ದು, ಬ್ರಾಹ್ಮಣರು ಮುಖ್ಯಮಂತ್ರಿಯಾಗುವುದನ್ನು ನಾನು ವಿರೋಧಿಸುವುದಿಲ್ಲ ಎನ್ನುವ ಮೂಲಕ ಯು-ಟರ್ನ್ ಹೊಡೆದಿದ್ದಾರೆ.
ಮರಾಠ ಪೇಶ್ವೆಗಳ ಡಿಎನ್ಎ ಇರುವ ವ್ಯಕ್ತಿಯನ್ನು ಕರ್ನಾಟಕಕ್ಕೆ ಮುಖ್ಯಮಂತ್ರಿ ಮಾಡಲು ಬಿಜೆಪಿ ಮತ್ತು ಆರ್’ಎಸ್ಎಸ್ ಹೊರಟಿವೆ ಎಂದು ಹೇಳಿದ್ದೆ ಹೊರತು ರಾಜ್ಯದ ಬ್ರಾಹ್ಮಣ ಸಮುದಾಯವನ್ನು ನಾನು ನಿಂದಿಸಿಲ್ಲ ಮತ್ತು ನಾನು ಒಂದು ಸಮುದಾಯವನ್ನು ಗುರಿಯಾಗಿಸಿ ಮಾತನಾಡುವ ವ್ಯಕ್ತಿಯೇ ಅಲ್ಲ ಎಂದಿದ್ದಾರೆ.
ನನ್ನ ಹೇಳಿಕೆಯನ್ನು ತಿರುಚುವ ಪ್ರಯತ್ನ ವ್ಯವಸ್ಥಿವಾಗಿ ನಡೆಸಲಾಗಿದೆಯೇ ಹೊರತು ನಾನು ಎತ್ತಿದ ವಿಷಯದ ಬಗ್ಗೆ ಚರ್ಚೆಗಳಾಗುತ್ತಿಲ್ಲ. ಪೇಶ್ವೆಗಳ ಡಿಎನ್ಎ ಇರುವ ವ್ಯಕ್ತಿಯನ್ನು ಮುಖ್ಯಮಂತ್ರಿ ಮಾಡಲು ಬಿಜೆಪಿಯವರು ಹುನ್ನಾರ ಮಾಡಿದ್ದಾರೆಂದು ನಾನು ಹೇಳಿದ್ದೆ. ಇದಕ್ಕೆ ಯಾಕೆ ಗಾಬರಿ? ಬ್ರಾಹ್ಮಣ ಸಮುದಾಯವೂ ಸೇರಿ ನಾನು ಯಾವುದೇ ಸಮಾಜಕ್ಕೂ ಅಗೌರವ ತೋರಿಲ್ಲ. ತೋರುವುದೂ ಇಲ್ಲ ಎಂದು ಸ್ಪಷ್ಟವಾಗಿ ನುಡಿದರು.