ರಾಜ್ಯದಲ್ಲಿ ಮತ್ತೆ ಮುನ್ನೆಲೆಗೆ ಹೆಚ್ಚುವರಿ ಡಿಸಿಎಂ ವಿಚಾರ….!

ಬಾಗಲಕೋಟೆ:

   ರಾಜ್ಯದಲ್ಲಿ ಮತ್ತೆ ಮೂರು ಉಪಮುಖ್ಯಮಂತ್ರಿಗಳ ನೇಮಕ ವಿಚಾರ ಮುನ್ನಲೆಗೆ ಬಂದಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ ವಿವಿಧ ಸಚಿವರು ಧ್ವನಿ ಎತ್ತಲು ಪ್ರಾರಂಭಿಸಿದ್ದಾರೆ.

   ಜಮೀರ್ ಅಹಮದ್ ಖಾನ್, ಸತೀಶ್ ಜಾರಕಿಹೊಳಿ ಅವರ ಬಳಿಕ ಇದೀಗ ಕೆಎನ್ ರಾಜಣ್ಣ ಅವರು ಈ ಬಗ್ಗೆ ಮಾತನಾಡಿದ್ದಾರೆ. ಸಮುದಾಯಗಳಿಗೆ ಪ್ರಾತಿನಿಧ್ಯ ನೀಡಲು ಹೆಚ್ಚು ಡಿಸಿಎಂ ಹುದ್ದೆಗಳನ್ನು ಸೃಷ್ಟಿಸಬೇಕಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

    ಬಾಪೂಜಿ ಕೋಆಪರೇಟಿವ್ ಕ್ರೆಡಿಟ್ ಸೊಸೈಟಿಯ ನೂತನ ಪ್ರಧಾನ ಕಚೇರಿಯನ್ನು ಉದ್ಘಾಟಿಸಿದ ಬಳಿಕ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ರಾಜಣ್ಣ, ನಾಯಕರನ್ನು ನಿರ್ಲಕ್ಷಿಸಿದರೆ ವಿವಿಧ ಸಮುದಾಯಗಳ ಜನರು ಪಕ್ಷದ ಮೇಲಿನ ನಂಬಿಕೆ ಕಳೆದುಕೊಳ್ಳುತ್ತಾರೆ. ಒಂದು ವರ್ಗದ ಜನರು ಮಾತ್ರ ಅಧಿಕಾರವನ್ನು ಉಳಿಸಿಕೊಂಡರೆ, ವಿವಿಧ ಸಮುದಾಯಗಳನ್ನು ಪ್ರತಿನಿಧಿಸುತ್ತಿರುವವರು ದೂರ ಹೋಗಬಹುದು. ಆ ಹಿನ್ನೆಲೆಯಲ್ಲಿ ಹೆಚ್ಚಿನ ಡಿಸಿಎಂ ಹುದ್ದೆಗಳ ಅಗತ್ಯವನ್ನು ಪ್ರತಿಪಾದಿಸುತ್ತಿದ್ದೇನೆ ಎಂದು ಹೇಳಿದರು.

   ಲಿಂಗಾಯತ, ಎಸ್‌ಸಿ/ಎಸ್‌ಟಿ ಮತ್ತು ಅಲ್ಪಸಂಖ್ಯಾತ ಸಮುದಾಯದ ಶಾಸಕರು ತಲಾ ಒಂದು ಡಿಸಿಎಂ ಹುದ್ದೆಯನ್ನು ಹೊಂದಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

    ಈಗಾಗಲೇ ಬಿಜೆಪಿ ಹಲವಾರು ರಾಜ್ಯಗಳಲ್ಲಿ ಹೆಚ್ಚುವರಿ ಡಿಸಿಎಂ ಹುದ್ದೆಗಳನ್ನು ಸೃಷ್ಟಿಸಿದ್ದು, ಈ ಮೂಲಕ ಮಾದರಿಯಾಗಿದೆ. ಉಪ ಮುಖ್ಯಮಂತ್ರಿಗಳು ಸಚಿವರಂತೆ ಯಾವುದೇ ಹೆಚ್ಚುವರಿ ಸವಲತ್ತುಗಳನ್ನು ಪಡೆಯುವುದಿಲ್ಲ, ಈ ಹುದ್ದೆಯು ಗೌರವವನ್ನು ಹೆಚ್ಚಿಸುತ್ತದೆ ಅಲ್ಲದೆ, ಸಮುದಾಯಗಳ ಜನರು ಹೆಮ್ಮೆಪಡುತ್ತಾರೆ ಮತ್ತು ತಮ್ಮನ್ನು ಗುರ್ತಿಸಿದ್ದಕ್ಕಾಗಿ ಪಕ್ಷಕ್ಕೆ ಕೃತಜ್ಞತೆ ಸಲ್ಲಿಸುತ್ತಾರೆ. ಇದು ಜನರ ವಿಶ್ವಾಸ ಗಳಿಸುವ ಮಾರ್ಗವಾಗಿದೆ ಎಂದು ತಿಳಿಸಿದರು.

   ಲೋಕಸಭೆ ಚುನಾವಣೆಯಲ್ಲಿ ಪಕ್ಷ ಬ್ಯುಸಿಯಾಗಿದ್ದ ಕಾರಣ ಈ ವಿಷಯವನ್ನುಪ್ರಸ್ತಾಪಿಸಲಿಲ್ಲ, ಈಗ ಜಮೀರ್ ಅಹಮದ್ ಖಾನ್, ಸತೀಶ್ ಜಾರಕಿಹೊಳಿ ಸೇರಿದಂತೆ ಹಲವು ಸಚಿವರು ಪ್ರಸ್ತಾಪಿಸಿದ್ದಾರೆ, ಆದರೆ, ಈ ಬಗ್ಗೆ ನಿರ್ಧಾರ ಕೈಗೊಳ್ಳುವುದು ಕೇಂದ್ರ ನಾಯಕತ್ವಕ್ಕೆ ಬಿಟ್ಟದ್ದು ಎಂದರು.

   ಬಳಿಕ ಕಾಂಗ್ರೆಸ್ ಸರ್ಕಾರ ತನ್ನ ಐದು ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸಲು ಚಿಂತನೆ ನಡೆಸುತ್ತಿದೆ ಎಂಬ ವರದಿಗಳನ್ನು ತಳ್ಳಿಹಾಕಿದ ಅವರು, ಪಕ್ಷದ ಯಾವುದೇ ಸಚಿವರು ಅಥವಾ ಶಾಸಕರು ಅದನ್ನು ವಿರೋಧಿಸಿಲ್ಲ ಎಂದು ಹೇಳಿದರು.

   ಬಡವರಿಗೆ ನೆರವಾಗುವ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ಸರ್ಕಾರ ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿಗಳೇ ಖಡಾಖಂಡಿತವಾಗಿ ಹೇಳಿದ್ದಾರೆಂದು ತಿಳಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link