ನವದೆಹಲಿ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಮನವಿ ಮೇರೆಗೆ ಕೇಂದ್ರ ಸರ್ಕಾರ , ಕರ್ನಾಟಕದಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು ಖರೀದಿಗೆ ಅವಧಿ ವಿಸ್ತರಿಸಿದೆ. ರಾಜ್ಯದಲ್ಲಿ ಬೆಂಬಲ ಬೆಲೆಯಲ್ಲಿ ಹೆಸರುಕಾಳು ಖರೀದಿ ಕಾಲಾವಕಾಶ ವಿಸ್ತರಣೆ ಬಗ್ಗೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ ಅವರು ಸಚಿವ ಜೋಶಿ ಅವರಿಗೆ ಪತ್ರ ಬರೆದು ಮಾಹಿತಿ ಹಂಚಿಕೊಂಡಿದ್ದಾರೆ.
ಕರ್ನಾಟಕದಲ್ಲಿ 2025-26ರ ಮುಂಗಾರು ಹಂಗಾಮಿನಲ್ಲಿ ಬೆಳೆದ ಹೆಸರುಕಾಳು ಖರೀದಿಗೆ ಬೆಂಬಲ ಬೆಲೆ ಯೋಜನೆಯಡಿ ಮತ್ತಷ್ಟು ಸಮಯ ಹೆಚ್ಚಿಸುವಂತೆ ಪ್ರಲ್ಹಾದ್ ಜೋಶಿ ಅವರು ಕೇಂದ್ರ ಕೃಷಿ ಸಚಿವರ ಗಮನ ಸೆಳೆದಿದ್ದರು. ಕೇಂದ್ರ ಸರ್ಕಾರ ಈ ಮನವಿ ಪುರಸ್ಕರಿಸಿ ಇದೀಗ ಹೆಸರುಕಾಳು ಬೆಂಬಲ ಯೋಜನೆ ಅವಧಿಯನ್ನು ವಿಸ್ತರಿಸಿ ಆದೇಶ ಹೊರಡಿಸಿದೆ. ಇದಕ್ಕಾಗಿ ಸಚಿವ ಪ್ರಲ್ಹಾದ್ ಜೋಶಿ ಅವರು ಪ್ರಧಾನಿ ನರೇಂದ್ರ ಜೋಶಿ ಮತ್ತು ಶಿವರಾಜ್ ಸಿಂಗ್ ಚೌವ್ಹಾಣ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಈ ಮಹತ್ವದ ನಿರ್ಧಾರದಿಂದ ಕೃಷಿಕರ ಉತ್ಪನ್ನಗಳಿಗೆ ನ್ಯಾಯಯುತ ಬೆಂಬಲ ಬೆಲೆಯನ್ನು ಖಚಿತಪಡಿಸಿದೆ ಎಂದು ತಿಳಿಸಿರುವ ಅವರು, ರಾಜ್ಯ ಸರ್ಕಾರ ಈ ಕೂಡಲೇ ಜಿಲ್ಲಾವಾರು ಖರೀದಿ ಕೇಂದ್ರಗಳನ್ನು ಸ್ಥಾಪಿಸಿ, ರಾಜ್ಯಾದ್ಯಂತ ಖರೀದಿ ಕೇಂದ್ರಗಳನ್ನು ಆರಂಭಿಸಿ ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಬೇಕು ಎಂದು ಜೋಶಿ ಒತ್ತಾಯಿಸಿದ್ದಾರೆ.
ರಾಜ್ಯದ ರೈತರ ಹಿತ ಕಾಪಾಡಲೆಂದು ಪ್ರಧಾನಿ ನರೇಂದ್ರ ಮೋದಿ ಅವರು ಸತತವಾಗಿ ಸ್ಪಂದಿಸುತ್ತಲೇ ಬಂದಿದ್ದಾರೆ. ಅಂತೆಯೇ ರಾಜ್ಯ ಸರ್ಕಾರ ಸಹ ರೈತರಿಗೆ ಇದರ ಲಾಭ ದೊರೆಕಿಸಿಕೊಡಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಆಗ್ರಹಿಸಿದ್ದಾರೆ.








