ನಕಲಿ ಜಾತಿ ಪ್ರಮಾಣ ಪತ್ರ ಕೇಸ್‌ : ಹೈಕೋರ್ಟ್‌ ನಿಂದ ಮಹತ್ವದ ಆದೇಶ

ಬೆಂಗಳೂರು

    ನಕಲಿ ಜಾತಿ ಪ್ರಮಾಣ ಪತ್ರ ಪಡೆದ ಆರೋಪಿಗಳ ವಿರುದ್ಧ ಜಿಲ್ಲಾ ಜಾತಿ ಪರಿಶೀಲನಾ ಸಮಿತಿ ಶಿಫಾರಸ್ಸು ಮಾಡದೆ ನಾಗರಿಕ ಹಕ್ಕುಗಳು ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಲಾಗದು ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಅಷ್ಟೇ ಅಲ್ಲದೇ ಅದೇ ಆಧಾರದಲ್ಲಿ ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಪ್ರಕರಣ ರದ್ದುಪಡಿಸಿದೆ.

    ನ್ಯಾಯಮೂರ್ತಿ ಹೇಮಂತ್ ಚಂದನಗೌಡರ ಅವರಿದ್ದ ಏಕಸದಸ್ಯಪೀಠ ಶಿಪ್ಪಿಂಗ್ ಸಚಿವಾಲಯದಲ್ಲಿ ಸಹಾಯಕ ಲೈಟ್ ಕೀಪರ್ ಆಗಿ ಸೇವೆ ಸಲ್ಲಿಸುತ್ತಿದ್ದ ಎ. ಎಸ್. ಪಳನಿ ಎಂಬುವರ ಅರ್ಜಿ ಮಾನ್ಯ ಮಾಡಿದೆ. ಅವರ ವಿರುದ್ಧದ ಪ್ರಕರಣ ಮತ್ತು ಆರೋಪ ಪಟ್ಟಿ ರದ್ದುಪಡಿಸಿದೆ.

    ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳು ಮತ್ತು ಇತರೆ ಹಿಂದುಳಿದ ವರ್ಗಗಳ (ಮೀಸಲಾತಿ ಮತ್ತು ನೇಮಕಾತಿ ಇತರೆ) ಕಾಯಿದೆ 1990ರ ಅಡಿಯಲ್ಲಿ ನಕಲಿ ಜಾತಿ ಪ್ರಮಾಣಪತ್ರ ಮತ್ತು ಆದಾಯ ಪ್ರಮಾಣ ಪತ್ರ ನೀಡುವವರಿಗೆ ಶಿಕ್ಷೆ ವಿಧಿಸುವ ಸಂಬಂಧ ವಿವರಿಸಲಿದೆ.

    ಅದರಂತೆ ತಪ್ಪು ಮಾಹಿತಿ ನೀಡಿ ನಕಲಿ ಜಾತಿ ಪ್ರಮಾಣ ಪತ್ರ ಪಡೆದ ಆರು ತಿಂಗಳಿಂದ ಎರಡು ವರ್ಷಗಳವರೆಗೆ ಶಿಕ್ಷೆ ವಿಧಿಸಲು ಅವಿಕಾಶವಿರಲಿದೆ. ಆದರೆ, ಇದೇ ಕಾಯಿದೆಯ ಸೆಕ್ಷನ್ 5ಎ ಪ್ರಕಾರ ಸೆಕ್ಷನ್ 6ರಲ್ಲಿ ತಿಳಿಸಿರುವಂತೆ ಆರೋಪಿಯ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಬೇಕಾದರೆ ರಾಜ್ಯ ಸರ್ಕಾರದಿಂದ ಪೂರ್ವನುಮತಿ ಪಡೆಯಬೇಕಾಗಿದೆ. ಆದರೆ, ಈ ಪ್ರಕರಣದಲ್ಲಿ ರಾಜ್ಯ ಸರ್ಕಾರ ಯಾವುದೇ ರೀತಿಯ ಪೂರ್ವಾನುಮತಿ ಪಡೆದಿಲ್ಲ ಎಂದು ನ್ಯಾಯಾಲಯ ಹೇಳಿದೆ.

    ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳು ಮತ್ತು ಇತರೆ ಹಿಂದುಳಿದ ವರ್ಗಗಳ (ಮೀಸಲಾತಿ ಮತ್ತು ನೇಮಕಾತಿ ಇತರೆ) ನಿಯಮ 1992ರ ನಿಯಮ 7ರ ಪ್ರಕಾರ ನಕಲಿ ಜಾತಿ ಪ್ರಮಾಣ ಪತ್ರವನ್ನು ಪಡೆದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು, ಈ ಪ್ರಕರಣದಲ್ಲಿ ಅಕ್ರಮವಾಗಿ ಜಾತಿ ಪ್ರಮಾಣ ಪತ್ರ ಪಡೆದಿರುವ ಅರ್ಜಿದಾರರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಶಿಫಾರಸು ಮಾಡಿದ್ದಾರೆ.

    ಆದರೆ, ಜಿಲ್ಲಾ ಜಾತಿ ಪರಿಶೀಲನಾ ಸಮಿತಿ ಅರ್ಜಿದಾರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಸಂಬಂಧ ಯಾವುದೇ ಶಿಫಾರಸ್ಸು ಮಾಡಿಲ್ಲ. ಆದ್ದರಿಂದ ನಾಗರೀಕ ಹಕ್ಕುಗಳ ಜಾರಿ ನಿರ್ದೇಶನಾಲಯ ದಾಖಲಿಸಿರುವ ಎಫ್‌ಐಆರ್ ಮತ್ತು ಅದರ ಆಧಾರದಲ್ಲಿ ದಾಖಲಿಸಿರುವ ಆರೋಪ ಪಟ್ಟಿ ಅಮಾನ್ಯಗೊಳ್ಳಲಿದೆ ಎಂದು ನ್ಯಾಯಪೀಠ ತಿಳಿಸಿದೆ.

    ಅಲ್ಲದೆ, ಅರ್ಜಿದಾರರ ಜಾತಿ ಪ್ರಮಾಣ ಪತ್ರ ರದ್ದುಪಡಿಸಿರುವ ಕ್ರಮವನ್ನು ಪ್ರಶ್ನಿಸಿ ಮೇಲ್ಮನವಿ ಪ್ರಾಧಿಕಾರದ ಮುಂದೆ ಸಲ್ಲಿಸಿರುವ ಅರ್ಜಿ ವಿಚಾರಣಾ ಹಂತದಲ್ಲಿರುವಾಗಲೇ ನಾಗರೀಕ ಹಕ್ಕುಗಳ ಜಾರಿ ನಿರ್ದೇಶನಾಲಯ ಎಫ್‌ಐಆರ್ ಅಧಿಕಾರವನ್ನು ಮೀರಿ ಎಫ್‌ಐಆರ್ ದಾಖಲಿಸಿದೆ ಎಂದು ನ್ಯಾಯಾಲಯ ಹೇಳಿದೆ.

    ಅರ್ಜಿದಾರರ ವಿರುದ್ಧ ಕಾನೂನು ಕ್ರಮ ಜರುಗಿಸುವುದಕ್ಕೆ ಅಗತ್ಯವಿರುವ ಅಂಶಗಳು ಸ್ಪಷ್ಟವಾಗಿಲ್ಲ. ಆದ್ದರಿಂದ ಅರ್ಜಿದಾರರ ವಿರುದ್ಧದ ಕ್ರಿಮಿನಲ್ ಪ್ರಕ್ರಿಯೆ ಮುಂದುವರೆಸುವುದು ಕಾನೂನು ಪ್ರಕ್ರಿಯೆಯ ದುರುಪಯೋಗವಾಗಲಿದೆ ಎಂದು ಪೀಠ ತಿಳಿಸಿ ಅರ್ಜಿಯನ್ನು ಪುರಸ್ಕರಿಸಿದ್ದು, ಪ್ರಕರಣವನ್ನು ರದ್ದುಪಡಿಸಿ ಆದೇಶಿಸಿದೆ.

    ಅರ್ಜಿದಾರರಾದ ಪಳನಿ ಅವರು ಮೊದಲಿಯಾರ್ ಸಮುದಾಯಕ್ಕೆ ಸೇರಿದ್ದು, ಸರ್ಕಾರದ ಪ್ರಾಧಿಕಾರಗಳಿಗೆ ತಪ್ಪು ಮಾಹಿತಿ ನೀಡಿ ಪರಿಶಿಷ್ಟ ಪಂಗಡಕ್ಕೆ ಸೇರಿದ ವಾಲ್ಮೀಕಿ ಸಮುದಾಯಕ್ಕೆ ಸೇರಿದವರು ಎಂದು ತಿಳಿಸಿ ಜಾತಿ ಪ್ರಮಾಣ ಪತ್ರವನ್ನು ಪಡೆದುಕೊಂಡಿದ್ದರು.

    ಇದೇ ಪ್ರಮಾಣ ಪತ್ರವನ್ನು ನೀಡಿ ಶಿಪ್ಪಿಂಗ್ ಮತ್ತು ಸಾರಿಗೆ ಸಚಿವಾಲಯದಲ್ಲಿ ಲೈಟ್ ಕೀಪರ್ ಆಗಿ ಸೇವೆಗೆ ಸೇರಿಕೊಂಡಿದ್ದರು. ಈ ಜಾತಿ ಪ್ರಮಾಣ ಪತ್ರವನ್ನು ತಹಶೀಲ್ದಾರ್ ರದ್ದುಪಡಿಸಿದ್ದರು. ಇದನ್ನು ಪ್ರಶ್ನಿಸಿ ಪಳನಿ ಮೇಲ್ಮವಿ ಪ್ರಾಧಕಾರದ ಮುಂದೆ ಅರ್ಜಿ ಸಲ್ಲಿಸಿದ್ದರು.

    ಈ ಅರ್ಜಿ ವಿಚಾರಣಾ ಹಂತದಲ್ಲಿರುವಾಗಲೇ ನಾಗರೀಕ ಹಕ್ಕುಗಳ ಜಾರಿ ನಿರ್ದೇಶನಾಲಯ ಅರ್ಜಿದಾರರ ವಿರುದ್ಧ ಕೆ. ಆರ್. ಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದು, ತನಿಖೆ ನಡೆಸಿದ್ದ ಪೊಲೀಸರು ಆರೋಪ ಪಟ್ಟಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಅದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ ಮೊರೆ ಹೋಗಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap